ಶಿವಮೊಗ್ಗ: ಸೊರಬದ ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಗುರುವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಕಾರ್ಯವೈಖರಿ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದ ರಾಜು ತಲ್ಲೂರು ಆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈಗ ಬಿಜೆಪಿ ಸೇರುವ ಮೂಲಕ ಮುಂದಿನ ಚುನಾವಣೆ (Election 2023) ವೇಳೆಗೆ ಪಕ್ಷ ಬಲವರ್ಧನೆಗೆ ಶ್ರಮಿಸುವುದಾಗಿ ಹೇಳಿದ್ದಾರೆ.
ಗುರುವಾರ ಬೆಳಗ್ಗೆ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಆಗಮಿಸಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜು ತಲ್ಲೂರು ಅವರ ಪಕ್ಷ ಸೇರ್ಪಡೆಯಿಂದ ನಾಲ್ಕೈದು ಕ್ಷೇತ್ರಗಳಿಗೆ ಅನುಕೂಲವಾಗಲಿದೆ. ಅವರು ಯಾವುದೇ ಷರತ್ತು ಹಾಕಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಪಕ್ಷಕ್ಕೆ ಬರಮಾಡಿಕೊಂಡ ಈಶ್ವರಪ್ಪ, ರಾಘವೇಂದ್ರ
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿಮಾನಿಗಳೊಂದಿಗೆ ರಾಜು ತಲ್ಲೂರು ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಪಕ್ಷದ ಶಾಲು ಹೊದೆಸಿ, ಹೂಗುಚ್ಚ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜು ತಲ್ಲೂರು, ಹಿಂದೆ ಬಿಜೆಪಿಯಲ್ಲಿದ್ದ ನಾನು ಪಕ್ಷ ಬಿಟ್ಟು ತಪ್ಪು ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತ ಮೆಚ್ಚಿ ಬಿಜೆಪಿ ಸೇರ್ಪಡೆಗೊಂಡಿದ್ದೇನೆ. ಜಿಲ್ಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ತಂದಿದ್ದಾರೆ. ಪಕ್ಷದ ಬೆಳವಣಿಗೆಯಲ್ಲಿ ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ರಾಜು ತಲ್ಲೂರು ಬಿಜೆಪಿಗೆ ಸೇರಿರುವುದು ಸಂತೋಷ. ಅವರಿಗೆ ಪಕ್ಷದಲ್ಲಿ ಉತ್ತಮ ಭವಿಷ್ಯವಿದೆ. ಅವರನ್ನು ರಾಜ್ಯ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಬಳಸಿಕೊಳ್ಳಲಾಗುವುದು. ಇವರ ನೇತೃತ್ವದಲ್ಲಿ ಪಕ್ಷ ಮತ್ತು ಸಂಘಟನೆಗೆ ಹೆಚ್ಚಿನ ಶಕ್ತಿ ಲಭಿಸಲಿ ಎಂದರು.
ಮಾಜಿ ಸಚಿವ, ಶಾಸಕ ಕೆ.ಎಸ್.ಈಶ್ವರಪ್ಪ ಮಾತನಾಡಿ, ರಾಷ್ಟ್ರಾದ್ಯಂತ ಬಿಜೆಪಿ ಸೇರ್ಪಡೆ ಆರಂಭಗೊಂಡಿದೆ. ಪಂಡಿತ ದೀನದಯಾಳ್ ಅವರ ಕನಸು ಸಾಕಾರಗೊಳ್ಳುತ್ತಿದೆ. ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ನಮ್ಮ ತಾಯಿಯಂತಿರುವ ಪಕ್ಷಕ್ಕೆ ನೋವಾಗದಂತೆ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಾಲತೇಶ್, ಸೊರಬ ಮಂಡಲ ಅಧ್ಯಕ್ಷ ಪ್ರಕಾಶ್, ನಾಗರಾಜ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು. ಆದರೆ, ಸ್ಥಳೀಯ ಶಾಸಕ ಕುಮಾರ್ ಬಂಗಾರಪ್ಪ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.
ಇದನ್ನೂ ಓದಿ | Suicide Case | ವಿಜಯನಗರ, ಶಿವಮೊಗ್ಗದಲ್ಲಿ ಪ್ರತ್ಯೇಕ ಕಡೆ ಇಬ್ಬರು ರೈತರು ಸೇರಿ ಮೂವರ ಆತ್ಮಹತ್ಯೆ