ನವ ದೆಹಲಿ: 2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವುದಕ್ಕಾಗಿ ಬಿಜೆಪಿ(BJP) ಅಧ್ಯಕ್ಷ ಜೆ ಪಿ ನಡ್ಡಾ ಅವರ ನೇತೃತ್ವದಲ್ಲಿ ರಾಜ್ಯ ಉಸ್ತುವಾರಿಗಳ ಸಭೆ ದಿಲ್ಲಿಯಲ್ಲಿ ಮಂಗಳವಾರ ನಡೆಯಿತು. ಪಕ್ಷವನ್ನು ಬಲಪಡಿಸುವ ಬಗ್ಗೆ ಈ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.
ವಿವಿಧ ರಾಜ್ಯಗಳಿಗೆ ಹೊಸ ಉಸ್ತುವಾರಿಗಳನ್ನು ನೇಮಕ ಮಾಡಿದ ಮೇಲೆ ಜೆ ಪಿ ನಡ್ಡಾ ಅವರು ನಡೆಸುತ್ತಿರುವ ಮೊದಲ ಸಭೆ ಇದಾಗಿದೆ. ಈ ಸಭೆಯಲ್ಲಿ ನಡ್ಡಾ ಮಾತ್ರವಲ್ಲದೇ, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರೂ ಭಾಗವಹಿಸಿದ್ದರು. ಸಭೆಯನ್ನು ದಿಲ್ಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
2024ರ ಲೋಕಸಭೆ ಚುನಾವಣೆಗೆ ಪಕ್ಷವನ್ನು ಯಾವ ರೀತಿ ಸಜ್ಜುಗೊಳಿಸಬೇಕು, ಸಂಘಟನೆಯನ್ನು ಬಲಪಡಿಸಲು ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ, ತ್ರಿಪುರಾದ ಮಾಜಿ ಸಿಎಂ ಬಿಪ್ಲಬ್ ಕುಮಾರ್ ದೇಬ್, ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ವಿನೋದ್ ಥಾವಡೆ, ತರುಣ್ ಚುಗ್, ಸುನೀಲ್ ಬನ್ಸಲ್ ಅವರೂ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಲಿಕೆ ಮತ್ತು ಪ್ರೇರಣೆ ಎಂದ ಸಿ ಟಿ ರವಿ
ಜೆ ಪಿ ನಡ್ಡಾ ನೇತೃತ್ವದ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸಮ್ಮುಖದಲ್ಲಿ ಸಭೆಯಲ್ಲಿ ಪಾಲ್ಗೊಂಡೆ. ನನಗೆ ಇದು ಪ್ರೇರಣೆ ನೀಡಿತು ಮತ್ತು ಬಹುದೊಡ್ಡ ಕಲಿಕೆಯ ಸಭೆಯಾಯಿತು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | Worldwide BJP: 13 ದೇಶದ ರಾಯಭಾರಿಗಳ ಜತೆ ಸಭೆ ನಡೆಸಿದ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ