Site icon Vistara News

HD Kumaraswamy : ಎಚ್‌ಡಿಕೆ ವಿರುದ್ಧ ಪೋಸ್ಟರ್‌; ಟಿ.ಎ. ಶರವಣ ನೇತೃತ್ವದಲ್ಲಿ ಜೆಡಿಎಸ್‌ ಪ್ರತಿಭಟನೆ

TA Sharavan protest against congress Karnataka

ಬೆಂಗಳೂರು: ದೀಪಾವಳಿ ಹಬ್ಬದ (Diwali Festival) ಪ್ರಯುಕ್ತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ನಿವಾಸಕ್ಕೆ ವಿದ್ಯುತ್ ದೀಪಗಳ ಅಲಂಕಾರ (Decoration of electric lights) ಮಾಡಲಾಗಿತ್ತು. ಈ ವೇಳೆ ಖಾಸಗಿ ಡೆಕೋರೇಟರ್‌ ಮಾಡಿದ ತಪ್ಪನ್ನು ಇಟ್ಟುಕೊಂಡು ಕಾಂಗ್ರೆಸ್‌ ಕೀಳು ಮಟ್ಟದಲ್ಲಿ ಟೀಕೆಗಳನ್ನು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಜೆಡಿಎಸ್ ಪ್ರತಿಭಟನೆ ನಡೆಸಿದೆ. ಈ ವೇಳೆ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ (TA Sharavana), ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕಾಂಗ್ರೆಸ್‌ ಮುಖಂಡರು ಕೀಳು ಮಟ್ಟದಲ್ಲಿ ಟೀಕೆಗಳನ್ನು ಮಾಡುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಚೇರಿಯ ಗೋಡೆಗೆ “ವಿದ್ಯುತ್ ಕಳ್ಳ” ಎಂದು ಎಚ್‌.ಡಿ. ಕುಮಾರಸ್ವಾಮಿ ಅವರ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿದ್ದಾರೆ. ಇದು ಕಾಂಗ್ರೆಸ್‌ನವರ ಹೀನ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

TA Sharavan protest against congress Karnataka

ಕುಮಾರಸ್ವಾಮಿ ಅವರ ವಿರುದ್ಧ ಕೀಳಾಗಿ ಪೋಸ್ಟರ್‌ ಅಂಟಿಸಿದ, ರಚಿಸಿದವರ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ನಮಗೆ ನ್ಯಾಯ ಬೇಕು. ಇದು ಭ್ರಷ್ಟ ಹಾಗೂ ರೌಡಿ ಸರ್ಕಾರವಾಗಿದೆ ಎಂದು ಟಿ.ಎ. ಶರವಣ ಕಿಡಿಕಾರಿದರು.

ಸ್ಪಷ್ಟನೆ ನೀಡಿದರೂ ಹೀಗೆ ಮಾಡಿದರು

ಈ ಬಗ್ಗೆ ಸ್ವತಃ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದರು. ದಂಡ ಕಟ್ಟಲು ತಾವು ಸಿದ್ಧರಿರುವುದಾಗಿ ಸ್ಪಷ್ಟಪಡಿಸಿದ್ದರು. ಅಲ್ಲದೆ, ಡೆಕೋರೇಟರ್‌ ಮಾಡಿದ ಅಚಾತುರ್ಯ ಎಂದು ಸಹ ಹೇಳಿದ್ದರು. ಇಷ್ಟಾದರೂ ಜೆಡಿಎಸ್‌ ಕಚೇರಿ ಕಾಂಪೌಂಡ್‌ ಮೇಲೆ ಕೀಳು ಅಭಿರುಚಿಯ ಪೋಸ್ಟರ್‌ ಅನ್ನು ಅಂಟಿಸಲಾಗಿದೆ ಎಂದು ಟಿ.ಎ. ಶರವಣ ಆಕ್ರೋಶವನ್ನು ವ್ಯಕ್ತಪಡಿಸಿದರು.

ಎಚ್‌ಡಿಕೆ ನೀಡಿದ್ದ ಸ್ಪಷ್ಟೀಕರಣ ಏನು?

ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ @INCKarnataka ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ” ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದರು.

Exit mobile version