ಬೆಂಗಳೂರು: ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ʼಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು (Employee ID card) ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಕಡ್ಡಾಯವಾಗಿ ಹಾಕಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ. ಸುತ್ತೋಲೆ ಹೊರಡಿಸಿದ್ದಾರೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ʼಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ, ಸಿಬ್ಬಂದಿ ತಮ್ಮ ಇಲಾಖೆ, ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ತಿಳಿಸಲಾಗಿದೆ.
ಇದನ್ನೂ ಓದಿ | Job Alert: ಗ್ಯಾಸ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ
ನೂತನ ಕೊರಳದಾರ ವಿನ್ಯಾಸವನ್ನು https://photos.app.goo.gl/YcJeNHnDNPecW8Q48 ಆನ್‌ಲೈನ್ ವಿಳಾಸದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್; ನಾಳೆಯಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ
ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅಂತರ ವಿಭಾಗ ಮಟ್ಟದ ಕೋರಿಕೆ, ಪರಸ್ಪರ ವರ್ಗಾವಣೆಗೆ (Teachers Transfer) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಿದ್ದು, ಆಗಸ್ಟ್ 17ರಿಂದ ಪ್ರಕ್ರಿಯೆ ಆರಂಭವಾಗಲಿದೆ. ಆ. 17, 19, 20 ಮತ್ತು 27 ರಂದು ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 7 ಗಂಟೆವರೆಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ವರ್ಗಾವಣೆಗೆ ಈಗಾಗಲೇ ಪ್ರಕಟಿಸಿರುವ ಆದ್ಯತಾ ಪಟ್ಟಿಗೆ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ತಾವು ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಎಲ್ಲಾ ಮೂಲ ದಾಖಲೆಗಳೊಂದಿಗೆ ಕೌನ್ಸೆಲಿಂಗ್‌ಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಬೇಕು.
ಇದನ್ನೂ ಓದಿ | Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಆ.17ರಂದು ಎಲ್ಲಾ ಮುಖ್ಯ ಶಿಕ್ಷಕರು, ಹಿರಿಯ ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರು ಹಾಗೂ 1ರಿಂದ 300 ರವರೆಗೆ ಅದ್ಯತಾ ಕ್ರಮಾಂಕದ ಸಹ ಶಿಕ್ಷಕರಿಗೆ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ.
ಆಗಸ್ಟ್ 19 ರಂದು 301 ರಿಂದ 800 ರವರೆಗಿನ ಅದ್ಯತಾ ಕ್ರಮಾಂಕದ ಸಹ ಶಿಕ್ಷಕರಿಗೆ ಕೌನ್ಸೆಲಿಂಗ್ ನಡೆಸಲಾಗುವುದು, ಆ.20ರಂದು 801 ರಿಂದ ಕ್ರಮಾಂಕ ಮುಕ್ತಾಯವಾಗುವವರೆಗೆ ಕೌನ್ಸೆಲಿಂಗ್ ನಡೆಯಲಿದೆ. ಅದೇ ರೀತಿ ಆ.17ರಿಂದ ಪರಸ್ಪರ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.