ಬೆಂಗಳೂರು: ಹಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಹಿಂದೆ ನಾಟಿ ವೈದ್ಯಕ್ಕೆ ಮಾಜಿ ಸಿಎಂ ಮೊರೆ ಹೋಗಿದ್ದರು. ಆದರೆ, ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಅವರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.
ಸಿಎಂ ಆಗಿದ್ದ ಸಂದರ್ಭದಲ್ಲಿ ಸಾಕಷ್ಟು ಪ್ರವಾಸ ಮಾಡಿದ್ದರಿಂದ ಬೊಮ್ಮಾಯಿ ಅವರಿಗೆ ಮಂಡಿ ನೋವು ಹೆಚ್ಚಾಗಿತ್ತು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಷ್ಟಪಟ್ಟು ನಡೆಯುತ್ತಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದರು. ಆಗ ವಿದೇಶಕ್ಕೆ ತೆರಳಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಅವರು ನಿರ್ಧರಿಸಿದ್ದರು ಎನ್ನಲಾಗಿತ್ತು. ಚುನಾವಣೆ ಸಮಯವಾದ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಸದ್ಯ ಬೆಂಗಳೂರಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಡಿ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದಾಗ ಮಾಜಿ ಸಿಎಂಗೆ ಹೃದಯ ಸಂಬಂಧಿತ ಸಮಸ್ಯೆ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ | Dr HD Ranganath: ಉಚಿತ ಶಸ್ತ್ರಚಿಕಿತ್ಸೆ ಮಾಡಿ, ಮಾನವೀಯತೆ ಜತೆಗೆ ವೃತ್ತಿಪರತೆ ಮೆರೆದ ಶಾಸಕ ಡಾ. ರಂಗನಾಥ್
ಆದಷ್ಟು ಬೇಗ ಗುಣಮುಖನಾಗಿ ಬರುವೆ
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ. ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಆತ್ಮೀಯರೇ,
— Basavaraj S Bommai (@BSBommai) October 17, 2023
ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ.
ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ…
ಶೀಗ್ರ ಚೇತರಿಕೆಗೆ ಸಿಎಂ ಸೇರಿ ಹಲವು ಗಣ್ಯರ ಹಾರೈಕೆ
ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಗಣ್ಯರು ಹಾರೈಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮೊಣಕಾಲು ನೋವು ನಿಮಿತ್ತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಮೊಣಕಾಲು ನೋವು ನಿಮಿತ್ತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ.
— CM of Karnataka (@CMofKarnataka) October 17, 2023
– ಮುಖ್ಯಮಂತ್ರಿ @siddaramaiah
ಮಾಜಿ ಸಿಎಂ ಬಿಎಸ್‌ವೈ ಟ್ವೀಟ್
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿ, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.@BSBommai
— B.S.Yediyurappa (@BSYBJP) October 16, 2023
ಇದನ್ನೂ ಓದಿ | Fact Check Cell : ಸರ್ಕಾರದ ಫ್ಯಾಕ್ಟ್ ಚೆಕ್ ಪ್ರಯತ್ನಕ್ಕೆ ಹಿನ್ನಡೆ; ಮಾನ್ಯತೆ ಪಡೆದ ಚೆಕರ್ಸ್ ನಿರಾಸಕ್ತಿ, ಯಾಕೆ?
ಶೀಘ್ರ ಗುಣಮುಖರಾಗಲು ಡಿಸಿಎಂ ಡಿಕೆಶಿ ಹಾರೈಕೆ
ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜು ಬೊಮ್ಮಾಯಿ ಅವರು ಶೀಘ್ರ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜು ಬೊಮ್ಮಾಯಿ ಅವರು ಶೀಘ್ರ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.
— DK Shivakumar (@DKShivakumar) October 17, 2023