ಬೆಂಗಳೂರು : ರಾಷ್ಟ್ರಪತಿ ಚುನಾವಣಾ ಕಣ ರಂಗೇರಿದ್ದು, ಈ ಬಾರಿ ವಿರೋಧ ಪಕ್ಷಗಳು ಒಮ್ಮತದಿಂದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ನಿಲ್ಲಿಸಲು ನಿರ್ಧರಿಸಿವೆ. ಇದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಬುಧವಾರ) ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಕರೆದಿದ್ದು, ಒಮ್ಮತದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಕುರಿತಾಗಿ ಎಲ್ಲಾ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.
ಸಿಎಂ ಮಮತಾ ಬ್ಯಾನರ್ಜಿ ಕರೆದಿರುವ ಸಭೆಯಲ್ಲಿ ಕರ್ನಾಟಕದಿಂದ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆಯೇ ದೆಹಲಿಗೆ ತೆರಳಲಿರುವ ಕುಮಾರಸ್ವಾಮಿ ಮಹತ್ವದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಒಮ್ಮತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಕುರಿತು ಚರ್ಚೆ ನಡೆಸಲಿದ್ದು, ಇದೇ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನೇ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸುವ ಕುರಿತು ಚರ್ಚೆ ಮಾಡುವ ಸಾಧ್ಯತೆ ಇದೆ.
ಇದನ್ನು ಓದಿ| ರಾಷ್ಟ್ರಪತಿ ಚುನಾವಣೆ; ಮಮತಾ ಬ್ಯಾನರ್ಜಿ ಕರೆದ ಸಭೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಒಪ್ಪಿಗೆ
ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಎನ್‌ಡಿಎ ಒಕ್ಕೂಟದಿಂದ ಇನ್ನು ಅಭ್ಯರ್ಥಿಯನ್ನ ಘೋಷಣೆ ಮಾಡಲಾಗಿಲ್ಲ. ಹೀಗಾಗಿ ಈ ಬಾರಿ ಹೇಗಾದರೂ ಮಾಡಿ ವಿರೋಧ ಪಕ್ಷಗಳು ಒಮ್ಮತದಿಂದ ಒಬ್ಬ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಮೂಲಕ ಬಿಜೆಪಿಗೆ ಟಕ್ಕರ್ ಕೊಡಬೇಕು ಎಂದು ಮಮತಾ ಬ್ಯಾನರ್ಜಿ ಪ್ಲಾನ್ ಮಾಡಿಕೊಂಡಿದ್ದಾರೆ.
ಇಂದು ನಡೆಯುವ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸುರ್ಜೇವಾಲಾ, ಎನ್‌ಸಿಪಿ ನಾಯಕ ಶರದ್ ಪವಾರ್, ಡಿಎಂಕೆ ನಾಯಕ ಟಿ.ಆರ್ ಬಾಲು ಮತ್ತು ತಿರುಚಿ ಸಿವಾ, ಸೇರಿದಂತೆ ೧೬ ಪಕ್ಷಗಳು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.