ಹುಬ್ಬಳ್ಳಿ: ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು (S Jaishankar) ಫೆ.28ರಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಪುಸ್ತಕವನ್ನು ಜೈಶಂಕರ್ ಅವರು ಬಿಡುಗಡೆಗೊಳಿಸಲಿದ್ದಾರೆ.
ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ ಫೆ.28ರಂದು ಸಂಜೆ 4.30ಕ್ಕೆ ಪುಸ್ತಕ ಬಿಡುಗಡೆ ಸಮಾರಂಭ ಜರುಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಸಂಸದ ಪ್ರಲ್ಹಾದ್ ಜೋಶಿ ಅವರ 16 ವರ್ಷದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಸಂಪೂರ್ಣ ಮಾಹಿತಿ ಒಳಗೊಂಡ ಪುಸ್ತಕ ಇದಾಗಿದೆ. ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕಾಗಿ ಕೈಗೊಂಡ ಚಟುವಟಿಕೆಗಳನ್ನು ಈ ಪುಸ್ತಕ ವಿಸ್ತಾರವಾಗಿ ಒಳಗೊಂಡಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ದೇವಸ್ಥಾನಗಳ ಹುಂಡಿಗೆ ಕನ್ನ ಹಾಕೋ ಕನ್ನರಾಮಯ್ಯ: ಪ್ರಲ್ಹಾದ್ ಜೋಶಿ ಕಿಡಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಹಿಂದು ದೇವಸ್ಥಾನಗಳ ಹುಂಡಿಗೆ ಕನ್ನ ಹಾಕೋ ಕನ್ನರಾಮಯ್ಯ ಆಗಿದ್ದಾರೆ. ಕಾಂಗ್ರೆಸ್ ಘೋಷಿಸಿದ ಬೋಗಸ್ ಗ್ಯಾರಂಟಿಗಳನ್ನು ನಿರ್ವಹಿಸಲು ಸಾಧ್ಯವಾಗದೇ, ದೇವಸ್ಥಾನಗಳ ಹುಂಡಿಗೆ ಕನ್ನ ಹಾಕುವ ಕೃತ್ಯ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವಾಪರ ತಯಾರಿ ಮಾಡದೆ ಘೋಷಿಸಿದ ಗ್ಯಾರಂಟಿಗಳು ಎಲ್ಲಾ ಬೋಗಸ್ ಆಗಿವೆ. ಅವನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಇಂಥದ್ದನ್ನೆಲ್ಲ ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ಕಿಡಿಕಾರಿದರು.
ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸುವಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಿತಿಮೀರಿದೆ. ಇದನ್ನು ನಾವಲ್ಲ, ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ | PM Narendra Modi: ಮೋದಿ ಚಿಂತೆ ಮಾಡುವವರಲ್ಲ, ಚಿಂತನೆ ಮಾಡುವ ಪ್ರಧಾನಿ: ಪ್ರಲ್ಹಾದ್ ಜೋಶಿ
ಸಿಎಂ ಸಿದ್ದರಾಮಯ್ಯ, ಸುಳ್ಳುರಾಮಯ್ಯ ಆದರು, ಸಾಲರಾಮಯ್ಯ ಆದರು, ಈಗ ಹಿಂದು ದೇಗುಲಗಳ ಹುಂಡಿಗಳಿಗೆ ಕನ್ನ ಹಾಕುವಂಥ ಕನ್ನರಾಮಯ್ಯ ಆಗಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಇದನ್ನೆಲ್ಲ ಡೈವರ್ಟ್ ಮಾಡಲು ಏನು ಬೇಕೋ ಅದನ್ನು ಮಾಡುತ್ತಿದ್ದಾರೆ ಎಂದು ಸಚಿವರು ವಾಗ್ದಾಳಿ ನಡೆಸಿದರು.