ಮಂಡ್ಯ: ಕಬ್ಬು ರೈತರ ಸಮಸ್ಯೆಗೆ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ, ಮಂಡ್ಯದಲ್ಲಿಂದು ರೈತರಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು ಮತ್ತು ಹಾಲಿನ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. 100 ದಿನಗಳಿಂದ ಪ್ರತಿಭಟನಾ ಧರಣಿ ಮತ್ತು 7 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸಿದರೂ ಸರ್ಕಾರ ಸ್ಪಂದಿಸಿಲ್ಲ ಎಂದು ಆಕ್ರೋಶಗೊಂಡಿರುವ ರೈತರು ಜಿಲ್ಲಾಧಿಕಾರಿ ಕಚೇರಿಗೆ ದಿಗ್ಬಂಧನ ಹಾಕಿ ಹೋರಾಟ ನಡೆಸಲು ಮುಂದಾಗಿದ್ದಾರೆ.
ಎತ್ತಿನ ಗಾಡಿ, ಟ್ರ್ಯಾಕ್ಟರ್ ಮತ್ತು ಜಾನುವಾರುಗಳೊಂದಿಗೆ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು, ಬೆಳಿಗ್ಗೆ 11 ಗಂಟೆಗೆ ಧರಣಿ ಸ್ಥಳದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಲು ರೈತರು ನಿರ್ಧರಿಸಿದ್ದಾರೆ. ಸಾವಿರಾರು ರೈತರು ಇಂದಿನ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.