ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜನವರಿ 31 ಮತ್ತು ಫೆಬ್ರವರಿ 1 ರಂದು ಜಿಲ್ಲೆಯ ಮೇಕೆದಾಟು ಹಾಗೂ ಸಂಗಮ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಿ ಕನಕಪುರ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ವಿಧಿಸಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವಿರಲಿದೆ.
ಜಿಲ್ಲೆಯ ಕನಕಪುರ ತಾಲೂಕು ಉಯ್ಯಂಬಳ್ಳಿ ಹೋಬಳಿಯಲ್ಲಿ ಸಂಗಮ ವನ್ಯಜೀವಿ ವಲಯದ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಪ್ರದೇಶದಲ್ಲಿ ಅಣೆಕಟ್ಟು ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಕನ್ನಡ ಪರ ಹೋರಾಟಗಾರರು ಫೆ.1 ರಂದು ಪ್ರತಿಭಟನೆ ನಡೆಸಲಿದ್ದಾರೆ. ಇದಕ್ಕಾಗಿ ಜ.31 ರಂದೇ ಹೋರಾಟಗಾರರು ಟ್ರ್ಯಾಕ್ಟರ್, ಜೆಸಿಬಿ ಹಾಗೂ ಇತರ ವಾಹನಗಳಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಎರಡೂ ದಿನ ಈ ಭಾಗದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.
ಇದನ್ನೂ ಓದಿ | ಡಿಕೆಶಿ ಸಹೋದರಿಯ ಪತಿ, ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿ.ಪಿ.ಶರತ್ ಚಂದ್ರ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ
ಇದೇ ವೇಳೆ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನಾಕಾರರೇ ಸಾಂಕೇತಿಕವಾಗಿ ಭೂಮಿಪೂಜೆ ಮಾಡುವ ಹಿನ್ನೆಲೆಯಲ್ಲಿ 800 ರಿಂದ 1000 ಹೋರಾಟಗಾರರು ಭಾಗವಹಿಸುವ ಸಾಧ್ಯತೆ ಇದೆ. ಹೀಗಾಗಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕನಕಪುರ ತಾಲೂಕು ಆಡಳಿತ 144 ಸೆಕ್ಷನ್ ಜಾರಿ ಮಾಡಿದೆ.