ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ದ್ವೇಷ ಭಾಷಣ ಹಾಗೂ ಕೋಮು ಪ್ರಚೋದನೆ ನೀಡಿದ ಆರೋಪದಲ್ಲಿ ಬೆಂಗಳೂರಿನ ಮಲ್ಲೇಶ್ವರ ಕ್ಷೇತ್ರದ ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಟಿಪ್ಪುವನ್ನು ಉರಿಗೌಡ ಹಾಗೂ ನಂಜೇಗೌಡ ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅದೇ ರೀತಿ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜಾ ಅವರು, ಸಿದ್ದರಾಮಯ್ಯ 24 ಹಿಂದು ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ ಎಂದು ವಿವಾದಿತ ಹೇಳಿಕೆ ನೀಡಿದ್ದರು. ಹೀಗಾಗಿ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ ಹಾಗೂ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ | Karnataka Politics: ಕಾಂಗ್ರೆಸ್‌ನಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮೈಸೂರಿನಲ್ಲಿ ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್
ಮೈಸೂರು: ಟಿಪ್ಪುಸುಲ್ತಾನನನ್ನು ಉರಿಗೌಡ ಹಾಗೂ ನಂಜೇಗೌಡ ಹೊಡೆದು ಹಾಕಿದ ರೀತಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂಬ ಹೇಳಿಕೆ ನೀಡಿದ್ದ ಶಾಸಕ ಅಶ್ವತ್ಥನಾರಾಯಣ ವಿರುದ್ಧ ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಫೆಬ್ರವರಿ 17 ರಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೇತೃತ್ವದ ನಿಯೋಗ ಅಶ್ವತ್ಥನಾರಾಯಣ್ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ದೂರು ನೀಡಿತ್ತು. ಆದರೆ, ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ಬುಧವಾರ ದೇವರಾಜ ಪೊಲೀಸ್ ಠಾಣೆಗೆ ಆಗಮಿಸಿ ಒತ್ತಾಯಿಸಿದ್ದರಿಂದ ಮಾಜಿ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 506, 153 ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್
ಮಂಗಳೂರು: ಸಿಎಂ ಸಿದ್ದರಾಮಯ್ಯ, 24 ಹಿಂದು ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಮು ಪ್ರಚೋದನೆ ಹಾಗೂ ದ್ವೇಷ ಭಾಷಣ ಮಾಡಿದ್ದಾರೆ ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ.ಪೂಜಾರಿ ನೀಡಿದ ದೂರಿನ ಅನ್ವಯ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬೆಳ್ತಂಗಡಿ ಕಿನ್ಯಮ್ಮ ಸಭಾಭವನದಲ್ಲಿ ಆಯೋಜಿಸಿದ್ದ ಬಿಜೆಪಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಹರೀಶ್ ಪೂಂಜಾ ಕೊಲೆ ಆರೋಪ ಮಾಡಿದ್ದರು. ಹೀಗಾಗಿ ಕಲಂ 153, 153ಎ, 505ಐಪಿಸಿ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುಳುವಿನಲ್ಲಿ ಭಾಷಣ ಮಾಡುವಾಗ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇದನ್ನೂ ಓದಿ | Lokayukta Raid: 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್ಐ
ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಕೆಲವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ ಎಂದು ಸತ್ಯಜಿತ್ ಸುರತ್ಕಲ್ ಎಂಬ ಮುಖಂಡನ ವಿರುದ್ಧ ಆರೋಪಿಸಿದ್ದ ಶಾಸಕ ಹರೀಶ್ ಪೂಂಜಾ, “24 ಹಿಂದು ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟು ಕೇಳಿದ್ದೀರಿ” “ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟು ಕೇಳಿದ್ದೀರಿ”, ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನರು ಕೇಳುತ್ತಿರುವುದಾಗಿ ಶಾಸಕ ಕಿಡಿಕಾರಿದ್ದರು. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನಲ್ಲಿ ದೂರು ದಾಖಲು
ಸಿಎಂ ಸಿದ್ದರಾಮಯ್ಯ, 24 ಹಿಂದು ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಡಿಜಿಪಿ ಅಲೋಕ್ ಮೋಹನ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ದೂರು ಸಲ್ಲಿಸಿದ್ದಾರೆ.