Site icon Vistara News

DK Shivakumar: ಚುನಾವಣೆ ಹೊತ್ತಲ್ಲೇ ಸಂಕಷ್ಟ; ಡಿ.ಕೆ. ಶಿವಕುಮಾರ್‌ ವಿರುದ್ಧ ಎಫ್‌ಐಆರ್!

DK Shivakumar

Don't know how long I will be in the post; Says DK Shivakumar

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕರ್ನಾಟಕದಲ್ಲಿ ಶತಾಯ ಗತಾಯ ಕಾಂಗ್ರೆಸ್‌ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು ಎಂಬ ದೃಷ್ಟಿಯಿಂದ ಇನ್ನಿಲ್ಲದ ಪ್ರಚಾರದಲ್ಲಿ ನಿರತರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. ಬಿಜೆಪಿ ನಾಯಕರ ಕುರಿತು ಸುಳ್ಳು ಮಾಹಿತಿ ಇರುವ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿರುವ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ನಾಯಕರು, ಸಂಸದರು, ಶಾಸಕರ ವಿರುದ್ಧ ಪೋಸ್ಟ್‌ ಹಾಕಿದ ಆರೋಪದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಬಿಜೆಪಿ ನಾಯಕರ ಕೈಗೆ ಸ್ಲೇಟ್‌ ಕೊಟ್ಟು, ಸುಳ್ಳು ಬರಹದ ಪೋಸ್ಟ್‌ ಹಾಕಿದ ಹಿನ್ನೆಲೆಯಲ್ಲಿ ಯೋಗೇಂದ್ರ ಹೊಡಾಘಟ್ಟ ಎಂಬುವರು ಪಿಸಿಆರ್‌ ದಾಖಲಿಸಿದ್ದರು. ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈಗ ನ್ಯಾಯಾಲಯವು ಡಿ.ಕೆ.ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶಿಸಿದೆ.

ಡಿ.ಕೆ.ಶಿವಕುಮಾರ್‌ ಹಾಗೂ ಬಿ.ಆರ್.ನಾಯ್ಡು ಅವರ ವಿರುದ್ಧ ಕೇಸ್‌ ದಾಖಲಿಸಬೇಕು ಎಂಬುದಾಗಿ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶಿಸಿದೆ. ಕೋರ್ಟ್‌ ಆದೇಶದಂತೆ ಡಿ.ಕೆ.ಶಿವಕುಮಾರ್‌ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) 153(A), 504, 506 ಹಾಗೂ 464 ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್; ಪಾಕ್‌ ಪರ ಘೋಷಣೆ ಕೇಸ್‌ ವಿವಾದಿತ ನಾಸಿರ್‌ ಹುಸೇನ್‌ಗೂ ಸ್ಥಾನ!

ಕೆಲ ವಾರಗಳ ಹಿಂದಷ್ಟೇ ರಿಲೀಫ್‌ ಸಿಕ್ಕಿತ್ತು

ಕೆಲ ವಾರಗಳ ಹಿಂದಷ್ಟೇ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧ‌ಪಟ್ಟಂತೆ ಇಡಿ ದಾಖಲು ಮಾಡಿದ್ದ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್‌ ಅವರಿಗೆ ಸುಪ್ರೀಂ ಕೋರ್ಟ್​ ರಿಲೀಫ್‌ ನೀಡಿತ್ತು. ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು 120B ಅಡಿ ದಾಖಲು ಮಾಡಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ ರದ್ದುಗೊಳಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿತ್ತು.

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ನವ ದೆಹಲಿಯಲ್ಲಿ ಬಂಧಿಸಿ ತಿಹಾರ್‌ ಜೈಲಿಗೆ ಕಳಿಸಿತ್ತು. ತನಿಖೆ ಪೂರ್ಣಗೊಳಿಸಿರುವ ಇ.ಡಿ ಜೂನ್‌ ಕೊನೆಯ ವಾರದಲ್ಲಿ ದೋಷಾರೋಪ ಪಟ್ಟಿಯನ್ನು ದೆಹಲಿಯಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ದೆಹಲಿಯ ಸಫ್ಧರ್‌ಜಂಗ್ ಅಪಾರ್ಟ್‌ಮೆಂಟ್‌ನಲಿ ಸಿಕ್ಕ 6.61 ಕೋಟಿ ರೂ. ಡಿ.ಕೆ.ಶಿವಕುಮಾರ್ ಅವರದ್ದೇ ಎಂದು ವಿಚಾರಣೆ ವೇಳೆ ಆರೋಪಿ ಆಂಜನೇಯ ಬಾಯಿ ಬಿಟ್ಟಿದ್ದರು. ಡಿ.ಕೆ. ಶಿವಕುಮಾರ್‌ ಅವರ ಅಕ್ರಮ ಹಣದ ವ್ಯವಹಾರವನ್ನು ರಾಜೇಂದ್ರ ಹಾಗೂ ಆಂಜನೇಯ ನೋಡಿಕೊಳ್ಳುತ್ತಿದ್ದರು. ಸುರೇಶ್ ಶರ್ಮಾ ಅವರ ಫ್ಲಾಟ್‌ ಅನ್ನು ಡಿ.ಕೆ.ಶಿವಕುಮಾರ್ ಹಾಗೂ ಸುನಿಲ್ ಶರ್ಮಾ ಹಾಗೂ ಡಿಕೆಶಿ ಅಕ್ರಮ ಹಣ ಸಂಗ್ರಹಣೆ ಬಳಸುತ್ತಿದ್ದರು. ಡಿಕೆಶಿ ಸೂಚನೆ ಮೇರೆಗೆ 1 ಕೋಟಿ ರೂ., 2 ಕೋಟಿ ರೂ., 1.5 ಕೋಟಿ ರೂ. ಹೀಗೆ ಹಲವು ಬಾರಿ ಸಾಗಾಟ ಮಾಡಲಾಗಿದೆ. ಏನೇ ಸಮಸ್ಯೆ ಬಂದರೂ ನಾನು ನೋಡಿಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಆಂಜನೇಯಗೆ ಹೇಳಿದ್ದು, ಇದಕ್ಕಾಗಿ ಬೆಂಗಳೂರಿನಲ್ಲಿ ಜಾಗ ಕೊಡುವ ಭರವಸೆ ನೀಡಿದ್ದಾರೆ ಎಂಬ ಮಹತ್ವದ ಅಂಶಗಳು ಇ.ಡಿ. ಚಾರ್ಜ್‌ಶೀಟ್‌ನಲ್ಲಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version