ಆನೇಕಲ್: ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ (Attibele Fire Accident) ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಸಂತೋಷ್ ಎಂಬ ಮತ್ತೊಬ್ಬ ವ್ಯಕ್ತಿಯ ಶವ ಪತ್ತೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ, ಪಟಾಕಿ ಸಂಗ್ರಹಿಸಲು ಗೋದಾಮು ಮಾಲೀಕರ ಬಳಿ ಪರವಾನಗಿಯೇ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಗೋದಾಮು ಹೊತ್ತಿ ಉರಿದ ವಿಡಿಯೊ
ಪಟಾಕಿಯನ್ನು ಬೇರೆಡೆಗೆ ರವಾನಿಸುವ ಪ್ರೊಸೆಸಿಂಗ್ ಯುನಿಟ್‌ಗೆ ಮಾತ್ರ ಪರವಾನಗಿ ನೀಡಲಾಗಿದೆ. ಆದರೆ, ಪರವಾನಗಿಯೇ ಇಲ್ಲದೆ ಅಕ್ರಮವಾಗಿ ಭಾರಿ ಪ್ರಮಾಣದಲ್ಲಿ ಮಾಲೀಕ ಪಟಾಕಿ ಸಂಗ್ರಹಿಸಿದ್ದಾರೆ. ಹಾಗಾಗಿ, ಪಟಾಕಿ ಗೋದಾಮು ಮಾಲೀಕರ ವಿರುದ್ಧ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮವಾಗಿ ಪಟಾಕಿ ಸಂಗ್ರಹಿಸದಿದ್ದರೆ ದುರಂತವೇ ಸಂಭವಿಸುತ್ತಿರಲಿಲ್ಲ. ಆದರೆ, ಪರವಾನಗಿಯೇ ಇಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ಸಂಗ್ರಹಿಸಿದ್ದು, ದುರಂತವು 14 ಜನರ ಸಾವಿಗೆ ಕಾರಣವಾಗಿದೆ. ಸುಮಾರು 5 ಕೋಟಿ ರೂ. ಬೆಲೆಬಾಳುವ ಪಟಾಕಿಗಳನ್ನು ಮಾಲೀಕ ನವೀನ್ ಸಂಗ್ರಹಿಸಿದ್ದರು ಎಂದು ತಿಳಿದುಬಂದಿದೆ.
ಮೃತರಲ್ಲಿ ಏಳು ಜನ ಒಂದೇ ಗ್ರಾಮದವರು
ಅಗ್ನಿ ಅವಘಡದಲ್ಲಿ ಸಜೀವವಾಗಿ ದಹನಗೊಂಡ 14 ಜನರ ಪೈಕಿ ಏಳು ಮಂದಿ ಒಂದೇ ಗ್ರಾಮದವರು ಎಂದು ತಿಳಿದುಬಂದಿದೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಟಿ ಅಮ್ಮಾಪೇಟೆ ಎಂಬ ಗ್ರಾಮದ ಗಿರಿ, ಆದಿಕೇಶವನ್, ವಿಜಯ್ ರಾಘವನ್, ಇಲಂಬರದಿ, ಆಕಾಶ, ವೇಡಪನ್ ಸಚಿನ್ ಸೇರಿ ಏಳು ಯುವಕರು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ರಾತ್ರಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಭಾನುವಾರ (ಅಕ್ಟೋಬರ್ 8) ಬೆಳಗ್ಗೆ 10 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Fire Accident: ಅತ್ತಿಬೆಲೆ ಪಟಾಕಿ ಅಂಗಡಿ ಅಗ್ನಿ ದುರಂತ; ಸಾವಿನ ಸಂಖ್ಯೆ 13ಕ್ಕೇರಿಕೆ, ತಲಾ 5 ಲಕ್ಷ ಪರಿಹಾರ ಘೋಷಣೆ
ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿದೆ. ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 6 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನವೀನ್ ಎಂಬುವವರ ಪಟಾಕಿ ಮಳಿಗೆ ಇದಾಗಿದ್ದು, ಪಟಾಕಿ ಬಾಕ್ಸ್‌ಗಳನ್ನು ತಂದು ಲಾರಿಯಿಂದ ಅನ್‌ಲೋಡ್ ಮಾಡುವಾಗ ಈ ಅವಘಡ ಸಂಭವಿಸಿದೆ.