ಕಾರವಾರ: ಪೀಠೋಪಕರಣ ತಯಾರಿಕಾ ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಳಿಗೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.
ತಾಲ್ಲೂಕಿನ ಅಂಬೇವಾಡಿಯ ಕೈಗಾರಿಕಾ ಪ್ರದೇಶದಲ್ಲಿರುವ ಪೀಠೋಪಕರಣ ತಯಾರಿಕಾ ಮಳಿಗೆ ಉದಯ ನಾಯ್ಕ ಎಂಬುವವರಿಗೆ ಸೇರಿದ್ದಾಗಿದೆ. ಶುಕ್ರವಾರ ಬೆಳಗಿನ ಜಾವ ಪೀಠೋಪಕರಣ ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ದೊಡ್ಡ ಪ್ರಮಾಣದಲ್ಲಿ ವ್ಯಾಪಿಸಿದ ಬಳಿಕ ಅಗ್ನಿ ಅವಘಡ ಬೆಳಕಿಗೆ ಬಂದಿದೆ.
ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು ಈ ವೇಳೆಗಾಗಲೇ ಪೀಠೋಪಕರಣ ಮಳಿಗೆಯ ಅಕ್ಕಪಕ್ಕದ ಮಳಿಗೆಗಳಿಗೂ ಬೆಂಕಿ ವ್ಯಾಪಿಸಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಬೆಂಕಿಯ ತೀವ್ರತೆಗೆ ಮಳಿಗೆಯಲ್ಲಿದ್ದ ಬಹುತೇಕ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ.
ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು ಈ ಸಂಬಂಧ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.