Site icon Vistara News

‌Fire Accident: 13 ಮಂದಿಯನ್ನು ಬಲಿ ಪಡೆದ ಅತ್ತಿಬೆಲೆ ಪಟಾಕಿ ಅಂಗಡಿ ಅಗ್ನಿ ದುರಂತ

Fire breaks out at fireworks shop

ಆನೇಕಲ್‌: ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ (Fire Accident) 13 ಮಂದಿ ಮೃತಪಟ್ಟಿದ್ದಾರೆ. ಶನಿವಾರ ಮಧ್ಯಾಹ್ನ ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ 6 ಮಂದಿ ಗಂಭೀರವಾಗಿ ಗಾಯಗೊಂಡು, ಹಲವರು ನಾಪತ್ತೆಯಾಗಿದ್ದರು. ಆದರೆ, ನಾಪತ್ತೆಯಾಗಿದ್ದ 13 ಕಾರ್ಮಿಕರು ಸಜೀವ ದಹನವಾಗಿದ್ದು, ಮೃತದೇಹಗಳನ್ನು ಹೊರಗೆ ತೆಗೆಯಲಾಗುತ್ತಿದೆ.

ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿದೆ. ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 6 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನವೀನ್ ಎಂಬುವವರ ಪಟಾಕಿ ಮಳಿಗೆ ಇದಾಗಿದ್ದು, ಪಟಾಕಿ ಬಾಕ್ಸ್‌ಗಳನ್ನು ತಂದು ಲಾರಿಯಿಂದ ಅನ್‌ಲೋಡ್‌ ಮಾಡುವಾಗ ಈ ಅವಘಡ ಸಂಭವಿಸಿದೆ.

ಮಳಿಗೆ ಪಕ್ಕದಲ್ಲಿಯೇ ಇದ್ದ ಗೋದಾಮಿಗೂ ಬೆಂಕಿ ತಗುಲಿದೆ. ಅಕ್ಕ-ಪಕ್ಕದಲ್ಲಿದ್ದ ನಾಲ್ಕೈದು ಅಂಗಡಿಗಳು, ಒಂದು ಕ್ಯಾಂಟರ್ ಸೇರಿದಂತೆ ನಾಲ್ಕೈದು ವಾಹನಗಳು ಸುಟ್ಟು ಭಸ್ಮವಾಗಿವೆ. ಹೆದ್ದಾರಿ ಪಕ್ಕದಲ್ಲಿಯೇ ಪಟಾಕಿ ಮಳಿಗೆ ಇರುವುದರಿಂದ ನೂರಾರು ಜನರು ಜಮಾಯಿಸಿದ್ದರು. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅತ್ತಿಬೆಲೆಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

ಪಟಾಕಿ ಮಳಿಗೆಯಲ್ಲಿ ಬೆಂಕಿ ತೀವ್ರತೆ ಹೆಚ್ಚಾಗುತ್ತಿದ್ದು, ಸಹಾಯಕ್ಕೆ ತಮಿಳುನಾಡು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಒಟ್ಟಾರೆ ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಸ್ಥಳೀಯ ತಹಸೀಲ್ದಾರ್ ಶಿವಪ್ಪ ಲಮಾಣಿ, ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ನಾಗೇಶ್ ಭೇಟಿ ನೀಡಿದ್ದಾರೆ. ಘಟನೆ ಕುರಿತು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version