ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಗೆ ಚರ್ಚೆಗೆ ಮತ್ತೆ ಚಾಲನೆ ಸಿಕ್ಕಿದ್ದು, ಚುನಾವಣೆಗೂ ಮುನ್ನ ಬಸವರಾಜ ಬೊಮ್ಮಾಯಿ ಬದಲಾವಣೆ ಬಗ್ಗೆ ಪಕ್ಷದ ವಲಯದಲ್ಲಿ ಮಾತುಕತೆ ನಡೆಯುತ್ತಿದೆ. ಈ ನಡುವೆ ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಆಗುವುದಿಲ್ಲ ಎಂದಿದ್ದಾರೆ. ಆದರೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸ್ಥಾನ ಬದಲಾಗಬಹುದು ಎಂದಿದ್ದಾರೆ.
ಕಾಂಗ್ರೆಸ್ ಟ್ವೀಟ್ ಮೂಲಕ ಮಂಗಳವಾರ ಈ ಕುರಿತು ಪ್ರಸ್ತಾಪಿಸಿದ ನಂತರ ಮತ್ತಷ್ಟು ತೀವ್ರವಾಗಿರುವ ವಿವಾದಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಕಾಂಗ್ರೆಸ್ ಟ್ವೀಟ್ ಮಾಡುವವರೆಗೆ ಬಿಜೆಪಿಯ ನಾಯಕರು, ಪದಾಧಿಕಾರಿಗಳು, ಸಚಿವರು ಸಿಎಂ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ನೀಡುತ್ತಿರಲಿಲ್ಲ. ಸಿಎಂ ಬೊಮ್ಮಾಯಿ ಅವರನ್ನು ಬಲವಾಗಿ ಸಮರ್ಥಿಸಿಕೊಳ್ಳುತ್ತಲೂ ಇರಲಿಲ್ಲ. ಒಂದಿಬ್ಬರು ಸಚಿವರು ಮಾತ್ರವೇ ಇದಕ್ಕೆ ಅಪಮಾನವಾಗಿದ್ದರು. ಆದರೆ ಕಾಂಗ್ರೆಸ್ ಟ್ವೀಟ್ ನಂತರ ಅನೇಕ ಬಿಜೆಪಿ ನಾಯಕರು ಸಿಎಂ ಬದಲಾವಣೆ ಕುರಿತು ಹೇಳಿಕೆ ನೀಡಲು ಆರಂಭಿಸಿದರು.
ಇದನ್ನೂ ಓದಿ | ಮುಖ್ಯಮಂತ್ರಿ ಬದಲಾವಣೆ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ
ಮೊದಲಿಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ ಬೊಮ್ಮಾಯಿ ಅವರನ್ನು ಬೆಂಬಲಿಸಿದ್ದರು. ಸಿಎಂ ಬದಲಾವಣೆ ಆಗುವುದಿಲ್ಲ ಎಂದಿದ್ದರು. ನಂತರ ಭೈರತಿ ಬಸವರಾಜ, ಸಿ.ಟಿ. ರವಿ ಸೇರಿ ಅನೇಕರು ಬೊಮ್ಮಾಯಿ ಅವರನ್ನು ಬೆಂಬಲಿಸಿದ್ದರು. ಇದೆಲ್ಲದರ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಕುಟುಂಬ ಸಮೇತ ಯಡಿಯೂರಪ್ಪ ಅವರು ಮಂತ್ರಾಲಯಕ್ಕೆ ಹೊರಟಿದ್ದಾರೆ. ಅದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕಾಂಗ್ರೆಸ್ ಟ್ವೀಟ್‌ನಲ್ಲಿ ಸತ್ಯಾಂಶ ಇಲ್ಲ. ಕೇವಲ ಏಳೆಂಟು ತಿಂಗಳೂ ಚುನಾವಣೆಗೆ ಇರುವಾಗ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮುಂದುವರಿಯಲಿದ್ದಾರೆ. ಮಾಧ್ಯಮಗಳಲ್ಲಿ ಅನಗತ್ಯವಾಗಿ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ.
ಇತ್ತೀಚೆಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರ ಕುರಿತು ಉತ್ತರಿಸಿದ ಯಡಿಯೂರಪ್ಪ, ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಮಾಡಿದ್ದೇನೆ. ಆದರೆ ಯಾವ ಸಂದರ್ಭದಲ್ಲೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಮಾಡಿಲ್ಲ. ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಕುರಿತು ಪ್ರತಿಕ್ರಿಯಿಸಿ, ರಾಜ್ಯಾಧ್ಯಕ್ಷರ ಸ್ಥಾನವನ್ನು, ಅವಧಿ ಮುಗಿದ ನಂತರ ಸಹಜವಾಗಿ ಬದಲಾವಣೆ ಮಾಡುತ್ತಾರೆ. ಈ ಸ್ಥಾನಕೆಕ ಯಾರನ್ನು ಆಯ್ಕೆ ಮಾಡಬೇಕು ಎನ್ನುವುದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದಿದ್ದಾರೆ.
ಅಲ್ಲಿಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿ.ಎಸ್. ಯಡಿಯೂರಪ್ಪ ಅಭಯ ನೀಡಿದ್ದಾರೆ. ಆದರೆ ನಳಿನ್ ಕುಮಾರ್ ಕಟೀಲ್ ಬದಲಾವಣೆಯ ಮುನ್ಸೂಚನೆಯನ್ನು ನೀಡಿದ್ದಾರೆ.
ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರ ಬಂಡಾಯದ ಮೂಲ ಏನು? ಹಿಂದು ಮುಖಂಡರು-ಚಿಂತಕರು ಏನೆನ್ನುತ್ತಾರೆ?