ಹುಬ್ಬಳ್ಳಿ: ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಜಾರಿ ನಿರ್ದೇಶನಾಲಯದ ಮೂಲಕ ವಿಚಾರಣೆ ನಡೆಸಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುವ ಅಗತ್ಯವಿಲ್ಲ. ಸುಳ್ಳು ಮೊಕದ್ದಮೆ ಹೂಡಿ ಕಾಂಗ್ರೆಸ್ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.
ಸೇನಾ ನೇಮಕಾತಿಯ ಹೊಸ ಯೋಜನೆ ‘ಅಗ್ನಿಪಥ’ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವುದನ್ನು ಪ್ರಸ್ತಾಪಿಸಿದ ಅವರು, ಈ ಹೋರಾಟಕ್ಕೆ ರೈತ ಸಂಘಟನೆಗಳು ಧುಮುಕಿವೆ. ದೇಶದ ಯುವಕರು ಆಕ್ರೋಶಗೊಂಡಿದ್ದಾರೆ. ಹಿಂದಿನ ಪದ್ಧತಿಯನ್ನೇ ಮುಂದುವರಿಸಬೇಕು. ರಕ್ಷಣಾ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಬಿಜೆಪಿ ಕೇಸರೀಕರಣ ಮಾಡಲು ಹೊರಟಿದೆ. ಆ ಮೂಲಕ ಅಶಾಂತಿ ಸೃಷ್ಟಿಸಲು ಹೊರಟಿದ್ದಾರೆ ಎಂದು ಕಿಡಿ ಕಾರಿದರು.
ವಿವಾದ ಸೃಷ್ಟಿಸುವಲ್ಲಿ ಬಿಜೆಪಿಗರು ನಿಸ್ಸೀಮರು. ರಾಜ್ಯದಲ್ಲಿರುವುದು ಆರ್‌ಎಸ್‌ಎಸ್ ಪ್ರಾಯೋಜಿತ ಸರ್ಕಾರ, ಹೀಗಾಗಿ ಅವರು ಪೊಲೀಸ್ ಠಾಣೆಗೂ ಮುತ್ತಿಗೆ ಹಾಕಿ ಗಲಾಟೆ ಮಾಡುತ್ತಾರೆ. ಅದೇ ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡಿದರೆ ಕೇಸ್ ಹಾಕಿ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ | Congress protest | ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ ಬಿಜೆಪಿ ನಾಯಕರು: ಸಿದ್ದರಾಮಯ್ಯ ಸಿಡಿಮಿಡಿ