Site icon Vistara News

Vijayamma: ಮಾಜಿ ಸ್ಪೀಕರ್ ಕೆ.ಆರ್‌.ರಮೇಶ್​ ಕುಮಾರ್‌ಗೆ ಪತ್ನಿ ವಿಯೋಗ

Former Speaker KR Ramesh Kumar's wife Vijayamma passes away

#image_title

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ಕ್ಷೇತ್ರ ಶಾಸಕ, ಮಾಜಿ ಸ್ಪೀಕರ್ ಕೆ.ಆರ್‌. ರಮೇಶ್​ ಕುಮಾರ್​ ಅವರ ಪತ್ನಿ ವಿಜಯಮ್ಮ (69) ಅನಾರೋಗ್ಯದಿಂದ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ (Vijayamma) ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ 2 ದಿನಗಳ ಹಿಂದೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಮೃತಪಟ್ಟರು.

ಮೃತರು ಪತಿ, ಪುತ್ರಿ, ಪುತ್ರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ರಮೇಶ್‌ ಕುಮಾರ್‌ ಅವರ ಪತ್ನಿ ವಿಜಯಮ್ಮ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ವಿವಿಧ ಪಕ್ಷಗಳ ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿ, ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕರು ಹಾಗೂ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮನವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ರಮೇಶ್ ಕುಮಾರ್ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನಿಡಲಿ ಎಂದು ಪ್ರಾರ್ಥಿಸುತ್ತೇನೆ‌ ಎಂದು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ, ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Exit mobile version