ಬೆಂಗಳೂರು: ಬಿಬಿಎಂಪಿ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಇತ್ತೀಚೆಗೆ ಡಿಸಿಎಂ ಹಾಗೂ ಬೆಂಗಳೂರು ನಗರ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದರ ಬೆನ್ನಲ್ಲೇ 2019-20ರಿಂದ 2022-23ರವರೆಗಿನ ನಡೆದ ಕಾಮಗಾರಿಗಳ ಅಕ್ರಮಗಳ ತನಿಖೆಗೆ ಪ್ರತ್ಯೇಕ 4 ತನಿಖಾ ಸಮಿತಿ ರಚಿಸಿ ನಗರಾಭಿವೃದ್ಧಿ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಿದೆ.
ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆ, ನಿರ್ದಿಷ್ಟ ಗುತ್ತಿಗೆದಾರರನ್ನು ಬಿಟ್ಟು ನಕಲಿ ಗುತ್ತಿಗೆದಾರರಿಗೆ ಹಣ ಪಾವತಿ ಆರೋಪ, ನಕಲಿ ಬಿಲ್ ಸೃಷ್ಟಿ, ಕಾಮಗಾರಿ ನಡೆಸದೆಯೇ ಬಿಲ್ ಪಾವತಿ, ಗುಣಮಟ್ಟ ಕಾಪಾಡದಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಅಕ್ರಮಗಳ ತನಿಖೆಗೆ ಪ್ರತ್ಯೇಕ ತನಿಖಾ ಸಮಿತಿ ರಚನೆ ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು, ತಜ್ಞರು ಒಳಗೊಂಡಂತೆ 4 ತನಿಖಾ ಸಮಿತಿ ರಚಿಸಲಾಗಿದೆ.
ಇದನ್ನೂ ಓದಿ | Upper Bhadra project : ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಅಲ್ವಂತೆ!; ಕೇಂದ್ರದ ಮೇಲೆ ಡಿ.ಕೆ. ಶಿವಕುಮಾರ್ ಕೆಂಡಾಮಂಡಲ
2019-20ರಿಂದ 2022-23ರವರೆಗೆ ಪ್ರಮುಖವಾಗಿ ಘನತ್ಯಾಜ್ಯ ನಿರ್ವಹಣೆ, ರಸ್ತೆ ಅಭಿವೃದ್ಧಿ ಕಾಮಗಾರಿಗಳು, ಓಎಫ್‌ಸಿ ಕೇಬಲ್ ಅಳವಡಿಕೆ, ಬೃಹತ್ ನೀರಿನ ಕಾಲುವೆ, ಕೆರೆ ಅಭಿವೃದ್ಧಿ ಕಾಮಗಾರಿ, ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳಲ್ಲಿ ನಡೆದ ಅಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಅಕ್ರಮಗಳ ತನಿಖೆಗೆ ಆದೇಶ ಹೊರಡಿಸಿದ್ದು, ಅಗತ್ಯ ಬಿದ್ದರೆ ತಜ್ಞರ ಮೂಲಕ ಗುಣಮಟ್ಟದ ಪರೀಕ್ಷೆಗೂ ಸೂಚನೆ ನೀಡಲಾಗಿದೆ.
ತನಿಖಾ ಸಮಿತಿಗಳು
1. ಘನಾತ್ಯಾಜ್ಯ ನಿರ್ವಹಣೆ ಕಾಮಗಾರಿ ತನಿಖಾ ಸಮಿತಿ
ಉಜ್ವಲ್ ಕುಮಾರ್ ಘೋಷ್ ನೇತೃತ್ವದ ನಾಲ್ವರು ಸದಸ್ಯರ ಸಮಿತಿ
2.ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಒಎಫ್‌ಸಿ ಕೇಬಲ್ ಅಳವಡಿಕೆಯ ಅಕ್ರಮ ತನಿಖಾ ಸಮಿತಿ
ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದ 6 ಸದಸ್ಯರ ಸಮಿತಿ
3.ಬೃಹತ್ ನೀರುಗಾಲುವೆ, ಸ್ವಾಧೀನಾನುಭವ (ಒಸಿ) ನೀಡುವ ಅಕ್ರಮದ ತನಿಖಾ ಸಮಿತಿ
ಪಿ.ಸಿ. ಜಾಫರ್ ನೇತೃತ್ವದ ನಾಲ್ವರು ಸದಸ್ಯರ ಸಮಿತಿ
4.ಕೆರೆ ಅಭಿವೃದ್ಧಿ, ಸ್ಮಾರ್ಟ್ ಸಿಟಿ ಹಾಗೂ ವಾರ್ಡ್ ಮಟ್ಟದ ಕಾಮಗಾರಿಗಳ ತನಿಖಾ ಸಮಿತಿ
ಡಾ.ವಿಶಾಲ್ ನೇತೃತ್ವದ 6 ಸದಸ್ಯರ ಸಮಿತಿ