Site icon Vistara News

Karnataka Budget 2024: ತೀರ್ಥ ಯಾತ್ರಿಕರಿಗೆ ವಸತಿ, ಅರ್ಚಕರ ಖಾತೆಗೆ ನೇರ ಹಣ; ಸಿದ್ದು ಘೋಷಣೆ

Siddaramaiah

Funds Allocation To Religion In Karnataka Budget 2024

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ (Karnataka Budget 2024) ಅನುದಾನ ಘೋಷಣೆ ಮಾಡಿದ್ದಾರೆ. ಪುಣ್ಯ ಕ್ಷೇತ್ರಗಳಲ್ಲಿ ವಸತಿ ಸಂಕೀರ್ಣಗಳ ನಿರ್ಮಾಣ, ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ಬ್ರಿಡ್ಜ್‌ ಕಂ ಬ್ಯಾರೇಜ್‌ (Bridge Cum Barriage) ನಿರ್ಮಾಣ ಸೇರಿ ಹಲವು ಘೋಷಣೆ ಮಾಡಿದ್ದಾರೆ. “ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 158 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು” ಎಂದು ಸಿದ್ದರಾಮಯ್ಯ (Siddaramaiah) ತಿಳಿಸಿದರು.

“ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ. ತಿರುಮಲದಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

“ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲಾಗುವುದು. ಯಾವುದೇ ಆದಾಯವಿಲ್ಲದ 34,165 ʻಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ ವಿಷನ್‌ ಗ್ರೂಪ್ ರಚಿಸಲಾಗುವುದು” ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

ಅರ್ಚಕರ ಖಾತೆಗೆ ನೇರವಾಗಿ ಹಣ ಜಮಾ

ದೇವಾಲಯದ ಅರ್ಚಕರಿಗೆ ನೇರವಾಗಿ ಅವರ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಕೂಡ ಸಿದ್ದರಾಮಯ್ಯ ತಿಳಿಸಿದರು. “ಇನಾಂ/ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version