ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಹೆಣ್ಣುಮಕ್ಕಳು ಉಚಿತವಾಗಿ ಪ್ರಯಾಣಿಸಲು ‘ಶಕ್ತಿ ಯೋಜನೆ’ (Shakti Scheme) ಜಾರಿಗೆ ತಂದು ಹೊಸ ಕ್ರಾಂತಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗ ಬಜೆಟ್‌ನಲ್ಲೂ (Karnataka Budget 2024) ಹಲವು ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲೂ, ಸಾರಿಗೆ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಳವಡಿಕೆಗೆ ಸಿದ್ದರಾಮಯ್ಯ ಅವರು ಒತ್ತು ನೀಡಿದ್ದಾರೆ. ಹಾಗಾದರೆ, ಸಾರಿಗೆ ಕ್ಷೇತ್ರಕ್ಕೆ ಸಿದ್ದರಾಮಯ್ಯ ನೀಡಿದ ಕೊಡುಗೆಗಳು ಏನು? ಇಲ್ಲಿವೆ ಪ್ರಮುಖಾಂಶಗಳು.
ಉಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ ಅಂದಾಜು 36 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ಹಾಗೂ ದೇವನಹಳ್ಳಿ ಮತ್ತು ತುಮಕೂರಿನಲ್ಲಿ ಒಟ್ಟು 10 ಕೋಟಿ ರೂ.ಗಳ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್‌ಗಳನ್ನು ನಿರ್ಮಿಸಲಾಗುವುದು. ಅರ್ಹತಾ ಪತ್ರ ನವೀಕರಣಕ್ಕೆ ಬರುವಂತಹ ಎಲ್ಲ ಸಾರಿಗೆ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು 32 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ವಯಂಚಾಲಿತ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.
ಸಾರಿಗೆ ಇಲಾಖೆಯಲ್ಲಿ ನೋಂದಣಿಯಾಗಿರುವ ಎಲ್ಲಾ ವಾಹನಗಳ ದಾಖಲಾತಿಗಳ ಡಿಜಿಟಲೀಕರಣಕ್ಕಾಗಿ ಒಂದು ಯೋಜನೆಯನ್ನು ಜಾರಿಗೊಳಿಸಲಾಗುವುದು. 2024-25ನೇ ಸಾಲಿನಲ್ಲಿ ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ, ಬೆಳಗಾವಿ, ಮಂಗಳೂರು ಹಾಗೂ ಭಾಲ್ಕಿಯ ಕಚೇರಿಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು.
ಶಕ್ತಿ ಯೋಜನೆಗೆ 3 ಸಾವಿರ ಕೋಟಿ ರೂ.
ಶಕ್ತಿ ಯೋಜನೆಯು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳೊಳಗಾಗಿ ಜಾರಿಗೊಳಿಸಿದ ಮೊದಲ ಗ್ಯಾರಂಟಿ ಯೋಜನೆಯಾಗಿದೆ. ಈ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ಈವರೆಗೆ 155 ಕೋಟಿಗೂ ಹೆಚ್ಚು ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದು, 3000 ಕೋಟಿ ರೂ. ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ: Karnataka Budget 2024: 30 ಲಕ್ಷ ಉದ್ಯೋಗ, ಇ-ಆಫೀಸ್, ರಸ್ತೆ; ಗ್ರಾಮೀಣಾಭಿವೃದ್ಧಿಗೆ ಸಿಕ್ಕಿದ್ದೇನು?
ಈ ಯೋಜನೆಯ ಮೂಲಕ ಮಹಿಳಾ ಸಬಲೀಕರಣ ಹಾಗೂ ಸ್ವಾತಂತ್ರ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದೇವೆ. ಹೆಣ್ಣು ಮಕ್ಕಳ ಶಿಕ್ಷಣ, ಉತ್ತಮ ಉದ್ಯೋಗಾವಕಾಶ ಪಡೆಯಲು, ಆರ್ಥಿಕ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚಾಗಿ ಭಾಗವಹಿಸಲು ಹಾಗೂ ಪ್ರವಾಸ ಕೈಗೊಳ್ಳಲು ಮಹಿಳೆಯರು ಈ ಅವಕಾಶದ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಯೋಜನೆಗೆ ದೊರೆತ ಅಭೂತಪೂರ್ವ ಸ್ಪಂದನೆ ಇದರ ಯಶಸ್ವಿ ಅನುಷ್ಠಾನಕ್ಕೆ ನಿದರ್ಶನವಾಗಿದೆ ಎಂದು ಹೇಳಿದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ