ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಬಾಬಾಬುಡನ್ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಎಂಟು ಸದಸ್ಯರ ಆಡಳಿತ ಮಂಡಳಿಯನ್ನು ರಚಿಸಲಾಗಿದೆ. ಇದರಲ್ಲಿ ಒಬ್ಬ ಮುಸ್ಲಿಂ ಸದಸ್ಯರೂ ಇದ್ದಾರೆ. ಈ ಆಡಳಿತ ಮಂಡಳಿಗೆ ಅರ್ಚಕರನ್ನು ನೇಮಿಸುವ ಅಧಿಕಾರವನ್ನು ನೀಡಲಾಗಿದೆ.
ಮೂರು ದಶಕಗಳಿಂದ ವಿವಾದಿತ ಸ್ಥಳವಾಗಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಆಡಳಿತ ಮಂಡಳಿಯ ನೇಮಕ ಎನ್ನುವುದು ಮಹತ್ವದ ಬೆಳವಣಿಗೆ ಆಗಿದೆ.
ಬಾಬಾಬುಡನ್ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಪೀಠ ಮುಸ್ಲಿಮರಿಗೆ ಸೇರಿದ್ದೇ, ಹಿಂದೂಗಳಿಗೆ ಸೇರಿದ್ದೇ ಎನ್ನುವುದು ಹಿಂದಿನಿಂದಲೂ ವಿವಾದಕ್ಕೆ ಕಾರಣವಾಗಿದೆ. ಸರಕಾರಿ ದಾಖಲೆಗಳಲ್ಲಿ ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎಂದು ಹೇಳಲಾಗಿದೆ. ಈ ಸ್ಥಳವನ್ನು ಬಾಬಾ ಬುಡನ್ ಗಿರಿ ಎಂದು ಕೆಲವರು ಕರೆದರೆ, ಇನ್ನು ಕೆಲವರು ಇನಾಂ ದತ್ತಾತ್ರೇಯ ಪೀಠ ಎನ್ನುತ್ತಾರೆ. ಒಂದು ಕಾಲದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ತಾಣವಾಗಿ ಇದು ಗುರುತಿಸಲ್ಪಟ್ಟಿತ್ತು. ಆದರೆ, ಬಳಿಕ ವಿವಾದ ಹುಟ್ಟಿಕೊಂಡಿತು.
ದತ್ತಪೀಠಕ್ಕೆ ಹಿಂದೂ ಮತ್ತು ಮುಸ್ಲಿಮರು ನೂರಾರು ವರ್ಷಗಳಿಂದ ನಡೆದುಕೊಳ್ಳುತ್ತಿದ್ದರು. ಆದರೆ, ಬಿಜೆಪಿ 1998ರಲ್ಲಿ ದತ್ತ ಮಾಲಾ ಅಭಿಯಾನ ಆರಂಭಿಸಿದ ನಂತರ ಕ್ಷೇತ್ರವು ದೇಶವ್ಯಾಪಿ ಗಮನ ಸೆಳೆಯಿತು. ಸಂಘ ಪರಿವಾರದ ಪ್ರಯತ್ನಗಳಿಗೆ ಪ್ರತಿಯಾಗಿ ಕೋಮು ಸೌಹಾರ್ದ ವೇದಿಕೆಯೂ ಚಿಕ್ಕಮಗಳೂರಿನಲ್ಲಿ ಸಮಾವೇಶಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆಯುತ್ತಿತ್ತು. ಕ್ಷೇತ್ರದಲ್ಲಿದ್ದ ಮುಜಾವವರು ಎರಡೂ ಪದ್ಧತಿಗಳ ಪ್ರಕಾರ ಪೂಜೆ ಮಾಡಿಕೊಡುತ್ತಿದ್ದಾರೆ.
ಸರಕಾರ ಮೊದಲೇ ತೀರ್ಮಾನಿಸಿತ್ತು
ರಾಜ್ಯ ಸರಕಾರವು ೨೦೨೨ರ ಜುಲೈ ೧೯ರಂದು ಸಂಪುಟದ ಉಪಸಮಿತಿ ಶಿಫಾರಸಿನಂತೆ ಒಂದು ಮಹತ್ವದ ಕ್ರಮವನ್ನು ಪ್ರಕಟಿಸಿತ್ತು. ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಮುಜಾವರ್ ಜತೆ ಆಗಮ ಗೊತ್ತಿರುವ ಹಿಂದೂ ಅರ್ಚಕರನ್ನು ನೇಮಿಸಲು ಸರ್ಕಾರ ತೀರ್ಮಾನಿಸಿತ್ತು. ಈ ಸಂಬಂಧ ಕಳೆದ ಆಗಸ್ಟ್ 19ರಂದು ಸುತ್ತೋಲೆ ಹೊರಡಿಸಿದ್ದ ಸರ್ಕಾರವು, ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಪ್ರತಿನಿಧಿಗಳು ಇರುವ ವ್ಯವಸ್ಥಾಪನಾ ಸಮಿತಿ ರಚಿಸಬೇಕು. ಅರ್ಚಕ ಮತ್ತು ಮುಜಾವರ್ ಅವರನ್ನು ಈ ವ್ಯವಸ್ಥಾಪನಾ ಸಮಿತಿಯಿಂದಲೇ ನೇಮಿಸಬೇಕು ಎಂದು ಹೇಳಿತ್ತು. ಇದನ್ನು ಪ್ರಶ್ನಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಮೇಲ್ಮನವಿ ಸಲ್ಲಿಸಿದ್ದರು. ಬಳಿಕ ಹೈಕೋರ್ಟ್ ಯಥಾಸ್ಥಿತಿಗೆ ಸೂಚನೆ ನೀಡಿತ್ತು.