ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆ.17ರಂದು ನಮ್ಮ ಅಭಿಮಾನದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ನೌಕರರಿಗೆ (Government Employees) ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ತಿಳಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನಕ್ಕೆ ಸುಮಾರು 50 ಸಾವಿರಕ್ಕೂ ಹೆಚ್ಚು ನೌಕರರು ಜಿಲ್ಲಾ, ತಾಲೂಗಳಿಂದ ಭಾಗವಹಿಸಲಿದ್ದು, ಸರ್ಕಾರದಿಂದ ಆ.17 ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಹಾಗೂ ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಮರುಸ್ಥಾಪಿಸುವಲ್ಲಿ ರಾಷ್ಟ್ರಮಟ್ಟದ ಬೆಳವಣಿಗೆ ಕುರಿತು ಬಿ.ಪಿ.ರಾವತ್ ಅವರು ಉಪನ್ಯಾಸ ನೀಡಲಿದ್ದಾರೆ. ಪಿಎಸ್‌ಟಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಿ&ಆರ್ ನಿಯಮಗಳಲ್ಲಿನ ಸಮಸ್ಯೆಗಳ ಕುರಿತು ಸರ್ಕಾರದ ಉಪಕಾರ್ಯದರ್ಶಿ ದೇವರಾಜು ಅವರಿಂದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರದಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ಖಜಾಂಚಿ ಸಿದ್ದರಾಮಣ್ಣ, ಹಿರಿಯ ಉಪಾಧ್ಯಕ್ಷ ಎಂ.ವಿ.ರುದ್ರಪ್ಪ, ಎಸ್.ಬಸವರಾಜ್, ಉಪಾಧ್ಯಕ್ಷ ಸಿದ್ದೇಶ್, ಮಾಲತೇಶ್, ಕಾರ್ಯದರ್ಶಿ ಸದಾನಂದ, ಕ್ರೀಡಾ ಕಾರ್ಯದರ್ಶಿ ಚೇತನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ
ಆ.17ರಂದು ವಿಶೇಷ ಸಾಂದರ್ಭಿಕ ರಜೆ
ರಾಜ್ಯ ಸರ್ಕಾರಿ ನೌಕರರಿಗೆ (Government Employees) ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ನಗರದ ಅರಮನೆ ಆವರಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗಲೆಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು (Special casual leave) ರಾಜ್ಯ ಸರ್ಕಾರ ಮಂಜೂರು ಮಾಡಿದೆ.
ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಅಭಿನಂದನೆ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?
ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು. ಈ ಷರತ್ತಿಗೊಳಪಟ್ಟು ಬೆಂಗಳೂರು ನಗರ ಜಿಲ್ಲೆಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಅಧಿಕಾರಿ, ನೌಕರರಿಗೆ ಆ.17ರಂದು ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.