ಬೆಂಗಳೂರು: ಬೆಂಗಳೂರಿನ ರಸ್ತೆಗಳಲ್ಲಿ ಬಿಡಾಡಿ ದನಗಳಿಂದಾಗಿ (stray Cattle) ವಾಹನ ಸವಾರರು ಹೈರಾಣಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪಶುಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆಯಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಬಿಡಾಡಿ ದನಗಳನ್ನು ನಿಯಂತ್ರಿಸುವ ಸಲುವಾಗಿ ಅವುಗಳನ್ನು ರಕ್ಷಣೆ ಮಾಡಿ ಸಮೀಪದ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಿಗೆ ತಂದು ಬಿಡುವಂತೆ ಬಿಬಿಎಂಪಿ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಮಸ್ಯೆಗಳನ್ನು ದಾಖಲಿಸಲು ದೂರವಾಣಿ ಸಂಖ್ಯೆಯನ್ನು ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಹೋಬಳಿ ಕೇಂದ್ರಗಳು, ಗ್ರಾಮ ಪಂಚಾಯತ್ ಪ್ರದೇಶ ಸೇರಿದಂತೆ ಪ್ರಮುಖ ಪಟ್ಟಣಗಳ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳು ನಿತ್ಯ ಕಂಡು ಬರುತ್ತಿರುವುದರಿಂದ ಸುಗಮ ಸಂಚಾರಕ್ಕೆ ಅನಾನುಕೂಲವಾಗುತ್ತಿದೆ ಎಂದು ಸಾಕಷ್ಟು ದೂರುಗಳು ಬರುತ್ತಿರುವುದರಿಂದ ಬಿಡಾಡಿ ದನಗಳಿಗೆ ಕಡಿವಾಣ ಹಾಕಲು ಸ್ಥಳೀಯ ಸಂಸ್ಥೆಗಳು ಮುಂದಾಗಬೇಕಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 74000ಕ್ಕೂ ಹೆಚ್ಚು ಬಿಡಾಡಿ ದನಗಳಿವೆ ಎಂದು ನಗರಾಭಿವೃದ್ಧಿ ಇಲಾಖೆ ಮಾಹಿತಿ ನೀಡಿದ್ದು, ರಸ್ತೆ ಮೇಲೆ ದನಗಳನ್ನು ಬಿಡುವ ಮಾಲೀಕರನ್ನು ಗುರುತಿಸಿ ಎಚ್ಚರಿಕೆ ನೀಡಲಾಗಿದೆಯಾದರೂ ಬಿಡಾಡಿ ದನಗಳು ಮತ್ತು ಎಮ್ಮೆಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕ ಪರಿಸರದಲ್ಲಿ ಅಲೆದಾಡುತ್ತಿವೆ ಎಂದು ತಿಳಿದುಬಂದಿದೆ. ಜಾನುವಾರುಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದಾಗಿರುತ್ತದೆ ಎಂದು ಪ್ರಭು ಬಿ.ಚವ್ಹಾಣ್ ವಿವರಿಸಿದ್ದಾರೆ.
ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳ ಮಾಲೀಕರು ಎಮ್ಮೆ, ಹಸುಗಳ ಹಾಲು ಹಿಂಡಿಕೊಂಡು ಬೀದಿಗೆ ಅಟ್ಟುವ ಪ್ರವೃತ್ತಿ ಮತ್ತೆ ಹೆಚ್ಚುತ್ತಿರುವುದನ್ನು ತಡೆಗಟ್ಟಲು ಹಾಗೂ ಸಂಭವಿಸುವ ಅಪಘಾತಗಳಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಗಾಯಗಳಾಗಿ ಮೃತಪಡುವುದನ್ನು ತಡೆಗಟ್ಟಲು ಬಿಡಾಡಿ ದನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಪ್ರಭು ಚವ್ಹಾಣ್ ಸ್ವಷ್ಟಪಡಿಸಿದ್ದಾರೆ.
ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ರಸ್ತೆ ಮೇಲೆ ದನಗಳು ಕಂಡು ಬಂದರೆ ತಕ್ಷಣ ಸಮೀಪದ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗೆ ಸ್ಥಳೀಯ ಸಂಸ್ಥೆಗಳು ತಂದು ಬಿಡಬೇಕು ಎಂದು ಸೂಚನೆ ನೀಡಲಾಗಿದೆ. ಈ ಮೂಲಕ ರಸ್ತೆ ಮಧ್ಯೆ ನಿಲ್ಲುವ ಅಥವಾ ರಸ್ತೆ ಬದಿ ಮೇಯುತ್ತಾ ಅಪಘಾತಕ್ಕೀಡಾಗಿ ಸಾವನ್ನಪ್ಪುವ ರಾಸುಗಳನ್ನು ರಕ್ಷಣೆ ಮಾಡಿ, ಅವುಗಳ ಪಾಲನೆ, ಪೋಷಣೆ ಮಾಡುವುದು ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ, ಸಾರ್ವಜನಿಕರನ್ನು ರಕ್ಷಣೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಸಹಾಯವಾಣಿಗೆ ಕರೆ ಮಾಡಿ
ಸಾರ್ವಜನಿಕ ರಸ್ತೆಗಳಲ್ಲಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಬಿಡಾಡಿ ದನಗಳು ಕಂಡು ಬಂದರೆ ಕೂಡಲೇ ಸಾರ್ವಜನಿಕರು ಪ್ರಾಣಿ ಕಲ್ಯಾಣ ಸಹಾಯವಾಣಿ ಸಂಖ್ಯೆ 8277100200 ಅಥವಾ ಸ್ಥಳೀಯ ಸಂಸ್ಥೆಗಳ ಸಹಾಯವಾಣಿಗಳಿಗೆ ಕರೆ ಮಾಡಿ, ಈ ಬಗ್ಗೆ ದೂರು ನೀಡಿದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಬಿಡಾಡಿ ದನಗಳನ್ನು ಸಮೀಪದ ಗೋಶಾಲೆಗಳಿಗೆ ತಂದುಬಿಡುವ ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕರು ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ತಂದುಬಿಡುವಂತೆ ಸಚಿವ ಪ್ರಭು ಚವ್ಹಾಣ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ | Cow Attack | ಬೀದಿ ದನ ಇರಿದು ಮಹಿಳೆ ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ
ನೋಂದಣಿಗೆ ಕ್ರಮ:
ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಿಗೆ ತಂದು ಬಿಡುವ ಬಿಡಾಡಿ ದನಗಳ ಆರೈಕೆ, ಪಾಲನೆ ಮತ್ತು ಪೋಷಣೆ ಜತೆಗೆ ಪ್ರತಿಯೊಂದನ್ನು ಆನ್.ಲೈನ್ ಪೋರ್ಟಲ್.ನಲ್ಲಿ ನೋಂದಣಿ ಮಾಡಬೇಕು ಎಂದು ಸಚಿವ ಪ್ರಭು ಚವ್ಹಾಣ್ ಅವರು ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.