Site icon Vistara News

HD Kumaraswamy: ಶಾಲೆಗಳಲ್ಲಿ ಸ್ವಚ್ಛತೆ ಸಮಸ್ಯೆಗೆ ಸರ್ಕಾರವೇ ಹೊಣೆ, ಶಿಕ್ಷಕರಿಗ್ಯಾಕೆ ಶಿಕ್ಷೆ: ಎಚ್‌ಡಿಕೆ ಕಿಡಿ

HD Kumaraswamy

ಬೆಂಗಳೂರು: ಸರ್ಕಾರಿ ಶಾಲೆಗಳ ಸ್ವಚ್ಛತೆಯೂ ಸೇರಿ ನಿರ್ವಹಣೆ ನೀಡಲಾಗುವ ಅನುದಾನವನ್ನು ಈ ವರ್ಷ ಕೊಟ್ಟಿಲ್ಲ. ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ಸೂಕ್ಷ್ಮ ಮನಸ್ಸಿನಿಂದ ವರ್ತಿಸಬೇಕಿತ್ತು. ‘ಆಚಾರ್ಯದೇವೋ ಭವ’ ಎನ್ನುವ ಭಾರತೀಯ ಪರಂಪರೆಯನ್ನು ಅವರೊಮ್ಮೆ ನೆನಪು ಮಾಡಿಕೊಳ್ಳಬೇಕಿತ್ತು. ಆದಾಗ್ಯೂ, ಎರಡೂ ಶಾಲೆಗಳಲ್ಲಿ ನಡೆದ ಘಟನೆಗಳಲ್ಲಿ ಕೇವಲ ಶಿಕ್ಷಕರು, ಪ್ರಾಂಶುಪಾಲರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಸರ್ಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ (HD Kumaraswamy) ಟೀಕಿಸಿದ್ದಾರೆ.

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಶಾಲೆಗಳಲ್ಲಿ ಸ್ವಚ್ಛತೆ ಮತ್ತು ನಿರ್ವಹಣೆಗೆ ಸರ್ಕಾರ ಸರಿಯಾದ ರೀತಿಯಲ್ಲಿ ಹಣ ನೀಡುತ್ತಿಲ್ಲ. ಆದರೆ, ಶಿಕ್ಷಕರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಂದ್ರಹಳ್ಳಿ ಸರ್ಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದು, ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ನಮ್ಮ ವ್ಯವಸ್ಥೆ, ಮನಸ್ಸುಗಳು ಎಷ್ಟು ಮಲೀನವಾಗಿವೆ ಎನ್ನುವುದಕ್ಕೆ ಎರಡೂ ಘಟನೆಗಳು ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಅತ್ಯಲ್ಪ ಹಣದಲ್ಲಿ ಶಿಕ್ಷಕರು ಏನು ಮಾಡುವರು?

ಸರ್ಕಾರಿ ಶಾಲೆ ಒಂದರ ಸ್ವಚ್ಛತೆ, ಸಂಪೂರ್ಣ ನಿರ್ವಹಣೆ ಸೇರಿ ಸಾದಿಲ್ವಾರು ವೆಚ್ಚಗಳಿಗೆ ಕೊಡುತ್ತಿರುವ ಹಣವೆಷ್ಟು? ಈ ಹಣ ನಿಯಮಿತವಾಗಿ ಬಿಡುಗಡೆ ಆಗುತ್ತಿಲ್ಲ. ನನಗೆ ಬಂದಿರುವ ಮಾಹಿತಿ ಪ್ರಕಾರ ಪ್ರಸಕ್ತ ವರ್ಷ ಈ ಅನುದಾನವನ್ನೇ ಕೊಟ್ಟಿಲ್ಲ. ಕೊಡುವ ಅತ್ಯಲ್ಪ ಹಣದಲ್ಲಿ ಶಿಕ್ಷಕರು ಏನು ಮಾಡಿಯಾರು? ಈ ಬಗ್ಗೆ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಇದನ್ನೂ ಓದಿ | Toilet Cleaning: ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಈ ಎರಡೂ ಪ್ರಕರಣಗಳಲ್ಲಿ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾದವರು ಈ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು. ಆದರೆ, ಶಿಕ್ಷಕರನ್ನಷ್ಟೇ ಬಲಿಪಶುಗಳನ್ನಾಗಿ ಮಾಡುವ ಕೆಲಸ ಆಗುತ್ತಿದೆ. ಹಾಗೆಯೇ, ಬೋಧಕರು, ಶಾಲಾ ಸಿಬ್ಬಂದಿ ಕೂಡ ಇಂಥ ಘಟನೆಗಳಿಗೆ ಅವಕಾಶ ಕೊಡಬಾರದು ಎಂದು ಶಿಕ್ಷಕರಿಗೂ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್; ಅಂದ್ರಹಳ್ಳಿ ಶಾಲೆ ಮುಖ್ಯಶಿಕ್ಷಕಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣದಲ್ಲಿ (Toilet Cleaning) ಅಂದ್ರಹಳ್ಳಿ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ಲಕ್ಷ್ಮೀದೇವಮ್ಮ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ (Toilet Cleaning) ಮಾಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಶುಕ್ರವಾರ ಅಮಾನತು ಮಾಡಲಾಗಿತ್ತು.

ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಆರೋಪದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಹೀಗಾಗಿ ಅವರನ್ನು ಪೊಲೀಸರು ಬಂಧಿಸಿ ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಕೋರ್ಟ್‌ ವಿಚಾರಣೆ ನಡೆಸಿ‌ ಮುಖ್ಯಶಿಕ್ಷಕಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದೆ.

ಬಂಧನಕ್ಕೂ ಮೊದಲು ಮಾತನಾಡಿದ್ದ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರು, ನಾನು ಈ ಶಾಲೆಯಲ್ಲಿ ಇರಬಾರದೆಂದು ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ವಿದ್ಯಾರ್ಥಿಗಳಿಂದ ನಾನು ಟಾಯ್ಲೆಟ್ ಕ್ಲೀನ್ ಮಾಡಿಸಿಲ್ಲ. ನಾನು ರಜೆಯ ಮೇಲೆ ಹೋದಾಗ ಕ್ಲೀನ್ ಮಾಡಿಸಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ | Poster War : ಹಿಂದುಗಳಿಗೆ ಶೂನ್ಯ, ಮುಸ್ಲಿಮರಿಗೆ ಬಂಪರ್‌; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪೋಸ್ಟರ್‌

ಏನಿದು ಪ್ರಕರಣ?

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಛ ಮಾಡಿಸಿದ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿತ್ತು, ಈ ಶಾಲೆಯಲ್ಲಿ ಒಟ್ಟು 600 ಜನ ಮಕ್ಕಳಿದ್ದಾರೆ. ಅಲ್ಲದೆ, ಇಲ್ಲಿ ಮಕ್ಕಳೇ ಶೌಚಾಲಯವನ್ನು ಕ್ಲೀನ್ ಮಾಡಬೇಕು. ಜತೆಗೆ ಶಿಕ್ಷಕರು ಊಟ ಮಾಡುವ ತಟ್ಟೆ ಕೂಡ ತೊಳೆಯಬೇಕು ಎಂಬ ಅಲಿಖಿತ ಕಾನೂನನ್ನು ಜಾರಿ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ. ಹೀಗಾಗಿ ಶಿಕ್ಷಕರ ವಿರುದ್ಧ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version