ಬೆಂಗಳೂರು: ಸೇವಾ ನಿರತ ಪದವೀಧರ ಶಿಕ್ಷಕರನ್ನು ಪರೀಕ್ಷೆ ನಡೆಸದೇ 6 ರಿಂದ 8 ನೇ ತರಗತಿ ಶಿಕ್ಷಕರನ್ನಾಗಿ ನಿಯುಕ್ತಿಗೊಳಿಸುವ (graduate teacher promotion) ಪ್ರಸ್ತಾಪದ ಕುರಿತು ಶುಕ್ರವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಚರ್ಚೆಯಾಗುವ ನಿರೀಕ್ಷೆಗಳಿವೆ.
ಕಳೆದ ಸಚಿವ ಸಂಪುಟದ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿತ್ತಾದರೂ ಮಾಹಿತಿಯ ಕೊರತೆಯಿಂದಾಗಿ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿರಲಿಲ್ಲ. ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಮತ್ತೆ ಚರ್ಚೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಶಿಕ್ಷಣ ಇಲಾಖೆಯು ಅಗತ್ಯ ಮಾಹಿತಿಯನ್ನು ಕ್ಯಾಬಿನೆಟ್ ಶಾಖೆಗೆ ತಲುಪಿಸಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ʻವಿಸ್ತಾರ ನ್ಯೂಸ್ʼಗೆ ತಿಳಿಸಿದ್ದಾರೆ.
2017ರಲ್ಲಿ ತಿದ್ದುಪಡಿ ಮಾಡಿರುವ ಪ್ರಾಥಮಿಕ ಶಾಲಾ ಶೀಕ್ಷಕರ ವೃಂದ ಮತ್ತು ನೇಮಕಾತಿ ನಿಯಮದಿಂದ ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ (graduate teacher promotion) ಆಗಿರುವ ಅನ್ಯಾಯವನ್ನು ಸರಿಪಡಿಸಲು ಮತ್ತೊಂದು ತಿದ್ದುಪಡಿ ಮಾಡುವ ಪ್ರಸ್ತಾಪ ಇದಾಗಿದೆ. ಇದಕ್ಕೆ ಈಗಾಗಲೇ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿರುವುದರಿಂದ ಈ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡುವುದರಲ್ಲಿ ಅನುಮಾನವಿಲ್ಲ. ಕಳೆದ ಸಚಿವ ಸಂಪುಟದ ಸಭೆಯಲ್ಲಿಯೇ ಈ ಬಗ್ಗೆ ಚರ್ಚೆಯಾಗಿತ್ತಾದರೂ ಕೆಲವು ಅವಶ್ಯ ಮಾಹಿತಿಯನ್ನು ಶಿಕ್ಷಣ ಇಲಾಖೆ ಒದಗಿಸದೇ ಇರುವುದರಿಂದ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿರಲಿಲ್ಲ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಇತ್ತೀಚೆಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಾಕ್ಷ ಶಂಭುಲಿಂಗನಗೌಡ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ನೇತೃತ್ವದ ನಿಯೋಗವು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ, ʻʻಸಚಿವ ಸಂಪುಟ ಸಭೆಯು ಬಯಸಿದ್ದ ಅಗತ್ಯ ಮಾಹಿತಿಯನ್ನು ಕ್ರೋಡೀಕರಿಸಿದ್ದು, ಕ್ಯಾಬಿನೆಟ್ ಶಾಖೆಗೆ ಸಲ್ಲಿಕೆಯಾಗಿದೆ. ಹೀಗಾಗಿ ಮುಂದಿನ ಸಚಿವ ಸಂಪುಟದ ಸಭೆಯಲ್ಲಿಯೇ ಈ ಪ್ರಾಸ್ತಾಪ ಮತ್ತೆ ಚರ್ಚೆಗೆ ಬರುವಂತೆ ನೋಡಿಕೊಳ್ಳಲಾಗುತ್ತದೆʼʼ ಎಂಬ ಭರವಸೆ ನೀಡಿದ್ದರು.
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಪ್ರಸ್ತಾಪವನ್ನು ಸಂಪುಟದ ಮುಂದೆ ಮಂಡಿಸಲಿದ್ದಾರೆ. ಈ ಕುರಿತ ಸಭೆಯ ನಿರ್ಧಾರಕ್ಕಾಗಿ ಕಳೆದ ಇಪ್ಪತ್ತು, ಇಪ್ಪತ್ತೈದು ವರ್ಷಗಳಿಂದ ಶಾಲೆಗಳಲ್ಲಿ ಬೋಧಿಸುತ್ತಿರುವ ಸುಮಾರು 75 ಸಾವಿರಕ್ಕೂ ಹೆಚ್ಚು ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಕಾತುರದಿಂದ ಎದುರು ನೋಡುತ್ತಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಸೇವಾ ನಿರತ ಪದವೀಧರ ಶಿಕ್ಷಕರ ಪರವಾಗಿ ಈ ಬಡ್ತಿಗಾಗಿ ಹೋರಾಟ ನಡೆಸಿಕೊಂಡು ಬಂದಿದೆ.
ಈಗಾಗಲೇ ಈ ತಿದ್ದುಪಡಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಆರ್ಥಿಕ ಇಲಾಖೆಯೂ ಸಮ್ಮತಿ ಸೂಚಿಸಿವೆ.
ಇದನ್ನೂ ಓದಿ : ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ; ಆದರೆ ಸಿಗದ ಸಮ್ಮತಿ