Site icon Vistara News

Gruha Lakshmi: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟನೆ

Gruha Lakshmi

Gruha Lakshmi

ಬೆಳಗಾವಿ: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ (Gruha Lakshmi)ಯ ಹಣ ಯಜಮಾನಿಯ ಖಾತೆಗೆ ಇಂದು ಅಥವಾ ನಾಳೆ ಕ್ರೆಡಿಟ್‌ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಭರವಸೆ ನೀಡಿದ್ದಾರೆ.

ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ʼʼಮೇ, ಜೂನ್‌ ತಿಂಗಳ ಹಣ ಹಾಕಿದ್ದೇವೆ. ಇಂದು ಅಥವಾ ನಾಳೆ ಜಮೆ ಆಗಲಿದೆʼʼ ಎಂದು ವಿವರಿಸಿದ್ದಾರೆ.

ಯೋಜನೆಯನ್ನು ನಿಲ್ಲಿಸುವುದಿಲ್ಲ

ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸ್ಪಷ್ಟವಾಗಿ ನಿರಾಕರಿಸಿದ ಅವರು, ʼʼರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಯೋಜನೆ ನಿಲ್ಲುವುದಿಲ್ಲ. ಐದು ವರ್ಷಗಳವರೆಗೂ ಇದು ಮುಂದುವರಿಯಲಿದೆ. ಬಿಜೆಪಿಯವರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆʼʼ ಎಂದು ಹೇಳಿದ್ದಾರೆ.

ಆಧಾರ್‌ ಸೀಡಿಂಗ್

ಇನ್ನೂ ಸಾಕಷ್ಟು ಫಲಾನುಭವಿಗಳು ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದರು ಕೂಡ ಆಧಾರ್‌ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆ ನಿಲ್ಲಲ್ಲ ಎಂದ ಸಿದ್ದರಾಮಯ್ಯ

ಇತ್ತೀಚೆಗೆ ಮೈಸೂರಿನಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿಗಳೂ (Congress Guarantee) ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಗ್ಯಾರಂಟಿಗಳನ್ನು ಮರು ಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ನಗರದ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: Congress Guarantee Scheme: ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ

ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂಬ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ. ಆದರೆ ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದಿದ್ದರು.

ದೇವೇಗೌಡರ ಕುಟುಂಬವನ್ನು ನಾಶ ಮಾಡುವುದರಲ್ಲಿ ಯಶಸ್ಸು ಕಂಡಿರುವ ಕಾಂಗ್ರೆಸ್ ಈಗ ಯಡಿಯೂರಪ್ಪ ಅವರನ್ನು ನಾಶ ಮಾಡಲು ಹೊರಟಿದೆ ಎಂಬ ಎಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ಕಾನೂನು ಹೇಳಿದಂತೆ ನಡೆದುಕೊಳ್ಳುತ್ತೇವೆ ಹಾಗೂ ಕಾನೂನನ್ನು ಪಾಲಿಸುತ್ತೇವೆ ಎಂದು ತಿಳಿಸಿದ್ದರು.

Exit mobile version