ಬೆಂಗಳೂರು: ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ 14,282 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ (Guarantee Schemes) ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈ ಬಗ್ಗೆ ವಿಸ್ತೃತ ವರದಿಯನ್ನು 7 ದಿನಗಳೊಳಗೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಸೂಚಿಸಿದೆ.
ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಹಣ ಅನ್ಯ ಉದ್ದೇಶಗಳಿಗೆ ಬಳಕೆಯಾದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಜಂಟಿ ಕಾರ್ಯದರ್ಶಿ ರಾಜೀವ್ ಕುಮಾರ್ ತಿವಾರಿ ಅವರು ಪತ್ರ ಬರೆದಿದ್ದಾರೆ.
ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವು ಸಂವಿಧಾನದ 338ನೇ ವಿಧಿಯಡಿ ಪರಿಶಿಷ್ಟ ಜಾತಿಗಳ (SC) ಹಿತಾಸಕ್ತಿಗಳನ್ನು ಕಾಪಾಡಲು ಸ್ಥಾಪನೆಯಾಗಿರುವ ಸಾಂವಿಧಾನಿಕ ಸಂಸ್ಥೆಯಾಗಿದೆ ಎಂದು ಹೇಳಿರುವ ರಾಜೀವ್ ಕುಮಾರ್ ತಿವಾರಿ ಅವರು, ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಅನುದಾನದ ಮಹತ್ವದ ಬಗ್ಗೆ ಒತ್ತಿ ಹೇಳಿದ್ದಾರೆ. ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಹಣ ಅನ್ಯ ಉದ್ದೇಶಗಳಿಗೆ ಬಳಕೆಯಾಗಿರುವ ಬಗ್ಗೆ ಏಳು ದಿನಗಳ ಒಳಗೆ ಸಂಪೂರ್ಣ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
ಗ್ಯಾರಂಟಿಗಳಿಗೆ 14,282 ಕೋಟಿ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ಬಳಕೆ
2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂಪಾಯಿ ಅನುದಾನದಲ್ಲಿ 14,282 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ. ಪರಿಶಿಷ್ಟ ಜಾತಿ, ಬುಡಕಟ್ಟು ಸಮುದಾಯದವರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಉಚಿತ ಯೋಜನೆಗಳಿಗೆ ರಾಜ್ಯ ಸರ್ಕಾರ ವರ್ಗಾಯಿಸಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.
ನಿರುದ್ಯೋಗ ಯುವಕ-ಯುವತಿಯರಿಗೆ ಹಣಕಾಸು ನೆರವು ಒದಗಿಸುವ ಯುವ ನಿಧಿ ಯೋಜನೆಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿಯ ಸುಮಾರು 75 ಕೋಟಿ ರೂಪಾಯಿಗಳನ್ನು ಬಳಸಿಕೊಂಡಿದೆ. ಇನ್ನು, ಅನ್ನಭಾಗ್ಯ ಯೋಜನೆಗೆ 104 ಕೋಟಿ ರೂಪಾಯಿಯನ್ನು ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನದಿಂದಲೇ ಬಳಸಿಕೊಂಡಿದೆ.
DK Shivakumar: ರಾಮನಗರ ಜಿಲ್ಲೆ ಹೆಸರು ಬದಲಾವಣೆ; ಡಿಕೆಶಿ- ಎಚ್‌ಡಿಕೆ ನಡುವೆ ಮತ್ತೊಂದು ಮಹಾಸಮರಕ್ಕೆ ಮುನ್ನುಡಿ!
ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನದ 14,282 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿದೆ. ಮೂಲಗಳ ಪ್ರಕಾರ, ಎಸ್‌ಸಿ, ಎಸ್‌ಟಿ ಸಮುದಾಯದ ವರ್ಗಗಳ ಗ್ಯಾರಂಟಿ ಫಲಾನುಭವಿಗಳಿಗೆ ಮಾತ್ರ ಹಣ ಮೀಸಲಿರಿಸಲಾಗಿದೆ ಎಂದು ತಿಳಿದುಬಂದಿದೆ.