ಹಾಸನ: ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ನಿರಾಕ್ಷೇಪಣಾ ಪತ್ರ ನೀಡಿದ ಹಾಸನ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಕೆ. ಹರೀಶ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ (Hassan News ) ಚನ್ನರಾಯಪಟ್ಟಣ ತಾಲೂಕು ಶ್ರವಣಬೆಳಗೊಳ ಹೋಬಳಿ ದಡಿಘಟ್ಟ ಗ್ರಾಮದ ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಎನ್‌ಒಸಿ ನೀಡಿದ ಹಿನ್ನೆಲೆಯಲ್ಲಿ ಡಿಸಿಎಫ್‌ರನ್ನು ಅಮಾನತು ಮಾಡಿ ಅರಣ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೀತಾ ಎಂ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ದಡಿಘಟ್ಟ ಗ್ರಾಮದ ಸರ್ವೆ ನಂ. 224ರಲ್ಲಿ 50.30 ಹೆಕ್ಟೇರ್ ಗೋಮಾಳವನ್ನು ಪರಿಭಾವಿತ ಅರಣ್ಯ (ಡೀಮ್ಡ್ ಫಾರೆಸ್ಟ್) ಎಂದು 2014ರಲ್ಲಿಯೇ ಅನುಮೋದನೆ ಮಾಡಲಾಗಿತ್ತು. ಆದರೆ, ಈ ಪೈಕಿ 21 ಎಕರೆ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಮಾರ್ಚ್ 31ರಂದು ನಿರಾಕ್ಷೇಪಣಾ ಪತ್ರವನ್ನು ನೀಡುವ ಮೂಲಕ ಅರಣ್ಯ (ಸಂರಕ್ಷಣಾ) ಕಾಯ್ದೆ 1980 ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿತ್ತು. ಹೀಗಾಗಿ ಹಾಸನ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಹರೀಶ್ ಸೇವೆಯಿಂದ ಅಮಾನತುಗೊಂಡಿದ್ದಾರೆ.
ಇದನ್ನೂ ಓದಿ | BBMP Election: 3 ವರ್ಷದ ನಂತರ ಬೆಂಗಳೂರಿಗರಿಗೆ ಸಿಗಲಿದ್ದಾರೆ ಜನಪ್ರತಿನಿಧಿಗಳು: ಬಿಬಿಎಂಪಿ ಚುನಾವಣೆ ಫಿಕ್ಸ್!
ಪ್ರಕರಣದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದರು. ಹೀಗಾಗಿ ಅರಣ್ಯ ಇಲಾಖೆ ಮಧ್ಯಂತರ ತನಿಖಾ ವರದಿ ಪಡೆದು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನು ಅಮಾನತು ಮಾಡಿದೆ.