ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನನ್ನು (Prajwal Revanna Case) ಕೊನೆಗೂ ಬಂಧಿಸಲಾಗಿದೆ. ಅಶ್ಲೀಲ ವಿಡಿಯೊಗಳು ವೈರಲ್ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ, ಶುಕ್ರವಾರ (ಮೇ 31) ಭಾರತಕ್ಕೆ ಲುಫ್ತಾನ್ಸಾ ವಿಮಾನಯಾನ ಸಂಸ್ಥೆಯ ಎಲ್‌ಎಚ್764 ವಿಮಾನದಲ್ಲಿ ಆಗಮಿಸಿದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದರು.
ಜರ್ಮನಿಯ ಮ್ಯೂನಿಕ್‌ನಿಂದ ಲುಫ್ತಾನ್ಸಾ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಇಮಿಗ್ರೇಷನ್ ಪ್ರಜ್ವಲ್ ರೇವಣ್ಣನನ್ನು ವಿಚಾರಣೆ ನಡೆಸಿದರು. ಇದಾದ ಬಳಿಕ ವಿಮಾನ ನಿಲ್ದಾಣದ ಸಿಬ್ಬಂದಿಯು ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ, ಪ್ರಜ್ವಲ್ ರೇವಣ್ಣ ತಂದೆ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ರೇವಣ್ಣ ಕಾಮಕೇಳಿಯ ಸಾವಿರಾರು ವಿಡಿಯೊಗಳು ಪೆನ್‌ಡ್ರೈವ್ ಮೂಲಕ ಲಭ್ಯವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಅವರು ವಿದೇಶಕ್ಕೆ ಹಾರಿದ್ದರು. ಇದಾದ ಬಳಿಕ ಅವರ ಬಂಧನಕ್ಕಾಗಿ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿತ್ತು. ಅಲ್ಲದೆ, ಎಸ್‌ಐಟಿ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ರೇವಣ್ಣ, ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯ ಕೇಳಿದ್ದರು. ಆದರೆ, ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಪೊಲೀಸರು ಬಂಧಿಸುತ್ತಲೇ ಪ್ರಜ್ವಲ್ ಕೂಡ ಬೆಂಗಳೂರಿಗೆ ಆಗಮಿಸಲು ತೀರ್ಮಾನಿಸಿದರು ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ ಕಾರಣ ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಇಮಿಗ್ರೇಷನ್ ಅಧಿಕಾರಿಗಳು ಸಂಸದನ ಪಾಸ್‌ಪೋರ್ಟ್‌ಗೆ ಶೀಲ್ ಹಾಕಿದರು. ಪ್ರಜ್ವಲ್ ರೇವಣ್ಣನನ್ನು ಬಂಧಿಸಿರುವ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಲಿದ್ದಾರೆ. ಅಲ್ಲಿನ ಪ್ರಕ್ರಿಯೆ ಮುಗಿಸಿ ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಬಂಧಿಸಿದ 24 ಗಂಟೆಯೊಳಗೆ ಎಸ್‌ಐಟಿ ಅಧಿಕಾರಿಗಳು ಸಂಸದನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ಗೆ ವೋಟ್ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್; ಬಿಜೆಪಿಯಿಂದ ಫುಲ್ ಕ್ಲಾಸ್!