ಹಾಸನ: ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ-ಜಿಡಿಪಿ ಬೆಳವಣಿಗೆ (Economy GDP growth) ಆಗುತ್ತದೆ. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ನಾಡಿನ ಜನತೆಗೆ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು (Congress Guarantee) ಮತ್ತೊಮ್ಮೆ ಸಮರ್ಥನೆ ಮಾಡಿಕೊಂಡಿದ್ದಾರೆ.
ಹಿಂದುಳಿದ ವರ್ಗಗಳ ಒಕ್ಕೂಟದ ವಿದ್ಯಾರ್ಥಿನಿಲಯ ಮತ್ತು ಸಮುದಾಯ ಭವನದ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಮಾಜಿಕ, ಆರ್ಥಿಕ ಅಸಮಾನತೆ ತೊಡೆದು ಹಾಕಿದಾಗ ಮಾತ್ರ ವರ್ಗರಹಿತ, ಜಾತಿ ರಹಿತ ಸಮಾಜ ನಿರ್ಮಾಣ ಸಾಧ್ಯ. ಕಾಂಗ್ರೆಸ್ ಸರ್ಕಾರ ಸಮಾಜದ ಅಸಮಾನತೆ ಅಳಿಸಿ ಎಲ್ಲ ವರ್ಗದವರೂ ಮುಖ್ಯವಾಹಿನಿಗೆ ಬರುವ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ನಾನು ಮುಖ್ಯಮಂತ್ರಿಯಾದಿ ದಲಿತರು, ಹಿಂದುಳಿದ ವರ್ಗದವರು ಮತ್ತು ಎಲ್ಲ ಜಾತಿಯ ಬಡವರಿಗೂ ಶಕ್ತಿ ತುಂಬುವ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ನೀಡಿದ್ದೇವೆ ಎಂದರು.
ಇದನ್ನೂ ಓದಿ: Exam Cheating : ಆರ್.ಡಿ. ಪಾಟೀಲ್ ಪರಾರಿ: ಸರ್ಕಾರದ ವಿರುದ್ಧ ತಿರುಗಿಬಿದ್ದ ಬಿಜೆಪಿ; ಅರೆಸ್ಟ್ ಮಾಡ್ತೇವೆ ಎಂದ ಕಾಂಗ್ರೆಸ್
ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ. ಸರ್ವರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಈ ಆಶಯಕ್ಕೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಒಂದು ಕೋಟಿ ವರೆಗಿನ ಕಾಮಗಾರಿಗಳಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕೊಡುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ. ಜತೆಗೆ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರು ಮತ್ತು ಅಶಕ್ತರಿಗೆ ಆರ್ಥಿಕ ಶಕ್ತಿ ತುಂಬುತ್ತಿದೆ. ಇದರಿಂದ ರಾಜ್ಯದ ಆರ್ಥಿಕತೆಯೂ ಬೆಳವಣಿಗೆಯಾಗುತ್ತಿದೆ ಎಂದರು.
ಹಾಸನದ ಹಿಂದುಳಿದ ವರ್ಗಗಳ ಸಮುದಾಯ ಭವನಕ್ಕೆ ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಇದನ್ನೂ ಓದಿ: PM Narendra Modi : ಮೋದಿ ಪರ ನಿಂತ ಅಹಿಂಸಾ ಚೇತನ್! ಸಂತೋಷ್ ಲಾಡ್‌ಗೆ ಅಜ್ಞಾನಿ ಸಚಿವರೇ ಎಂದು ವ್ಯಂಗ್ಯ
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಶಾಸಕರಾದ ಶಿವಲಿಂಗೇಗೌಡ, ಸ್ವರೂಪ್ ಪ್ರಕಾಶ್, ಮಾಜಿ ಸಚಿವರಾದ ಬಿ.ಶಿವರಾಂ, ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ಶೆಟ್ಟಿ, ಉಪಾಧ್ಯಕ್ಷ ಲಕ್ಷ್ಮಣ್ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.