ಹಾಸನ: ಬಿಜೆಪಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಪ್ರತಿನಿತ್ಯ ಮಸೀದಿ, ದೇವಸ್ಥಾನ, ಪಠ್ಯಪುಸ್ತಕ, ಆಜಾನ್ ಮತ್ತಿತರ ಭಾವಾನಾತ್ಮಕ ವಿಷಯವನ್ನು ಪ್ರಸ್ತಾಪ ಮಾಡುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ಟೀಕಿಸಿದರು. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಕಾಂಗ್ರೆಸ್ ಅಭರ್ಥಿ ಮಧು ಜಿ. ಮಾದೇಗೌಡ ಅವರ ಪರವಾಗಿ ನಗರದ ವಕೀಲರ ಸಂಘ, ರಾಜೀವ್ ಎಂಜಿನಿಯರಿಂಗ್ ಕಾಲೇಜು ಹಾಗೂ ಹಾಸನ ಮೆಡಿಕಲ್ ಕಾಲೇಜು ಸೇರಿದಂತೆ ವಿವಿಧೆಡೆ ಮತಯಾಚನೆ ಮಾಡಿದ ನಂತರ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಎಸ್‌ಡಿಪಿಐ, ಶ್ರೀರಾಮಸೇನೆ, ಭಜರಂಗದಳ ಮೂಲಕ ರಾಜ್ಯದಲ್ಲಿ ಶಾಂತಿಭಂಗ ತರುವ ಕೆಲಸ ಮಾಡುತ್ತಿವೆ. ಮಸೀದಿ ಒಳಗೆ ದೇವಸ್ಥಾನದ ವಿಚಾರ ತಂದು ಬಿಜೆಪಿ ತಂತ್ರಗಾರಿಕೆ ಮಾಡುತ್ತಿದೆ. ಇದರಿಂದ ನಮಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ | ನಮ್ಮದು ಡಿ.ಕೆ. ಶಿವಕುಮಾರ್ ಕುಟುಂಬ ಕೆಟ್ಟೋಯ್ತ?: ಆರೋಪಕ್ಕೆ ಅಶ್ವತ್ಥನಾರಾಯಣ ಆಕ್ರೋಶ
ಪದವೀಧರ ಕ್ಷೇತ್ರದ ಚುನಾವಣೆಯನ್ನು ಬಿಜೆಪಿ ಪಕ್ಷ ಬಹಳ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಸರ್ಕಾರದ ಅನೇಕ ಸಚಿವರು ಶಾಸಕರು ತಮ್ಮ ಪ್ರಭಾವ ಬಳಸಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಜಯಭೇರಿ ಬಾರಿಸುವ ಉದ್ದೇಶದಿಂದ ಮತದಾರರಿಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಸರಕಾರವು ಪಿಐಸ್‌ಐ ಹಗಣರ ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿದೆ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿರುವುದನ್ನು ಅರಿತುಕೊಂಡು ಪದವೀಧರ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದರು.
ಸರ್ಕಾರದ ಅಸ್ತಿತ್ವ ಉಳಿಸಿಕೊಳ್ಳಲು, ತಮ್ಮ ಕುರ್ಚಿ ಭದ್ರಪಡಿಸಿಕೊಳಲು ಸರ್ಕಾರದ ಆಡಳಿತ ವ್ಯವಸ್ಥೆ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ನಡುವಿನ ವೈಯಕ್ತಿಕ ಮಾತುಕತೆ ವಿಚಾರ ಪದವೀಧರ ಕ್ಷೇತ್ರದ ಮತದಾರರ ಮೇಲೆ ಪ್ರಭಾವ ಬೀರುವುದಿಲ್ಲ. ಬಹಿರಂಗವಾಗಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದು ಮತ ಕೇಳಲಾಗಿದೆ.
ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಲು ಸಿದ್ದರಾಮಯ್ಯ ಕೋರಿದ್ದಾರೆ. ಮಧು ಮಾದೇಗೌಡ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸುಮಾರು 30 ಶಿಕ್ಷಣ ಸಂಸ್ಥೆ ಸ್ಥಾಪಿಸಿ 20 ಸಾವಿರ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಪದವೀಧರ ಮತದಾರರು ರಾಷ್ಟ್ರದ ಪರಿಸ್ಥಿತಿ ರಾಜ್ಯದ ಪರಿಸ್ಥಿತಿ ನೋಡುತ್ತಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿಲ್ಲ. ಜಾತ್ಯತೀತ ನಿಲುವು ಉಳಿಸಿಕೊಳ್ಳಲು ಕಾಂಗ್ರೆಸ್ ಕಳೆದ 3 ವರ್ಷಗಳಿಂದ ಜೆಡಿಎಸ್ ಪಕ್ಷ ಮಾಡಿದ ಅವಮಾನ ಸಹಿಸಿಕೊಂಡಿದೆ. ರಾಜ್ಯ ಸರ್ಕಾರದ ಬಜೆಟ್ ಮೇಲೆ ಜಿಲ್ಲೆಯ ಪ್ರಮುಖ ಇಲಾಖೆಗಳಲ್ಲಿ ಯಾವುದೇ ಆಕ್ಷನ್ ಪ್ಲಾನ್ ಆಗಿರುವುದಿಲ್ಲ.
ಯಾವುದೇ ಆಕ್ಷನ್ ಪ್ಲಾನ್ ಮಾಡದೆ ಬಿಜೆಪಿಯವರು ಕೆಲಸ ಮಾಡುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಪಕ್ಷ ಸಂಘಟನೆ, ಅವರ ಚಲನವಲನ, ಜನಪರ ಕೆಲಸ ಮಾಡುವವರನ್ನು ನೋಡಿ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಲಾಗುವುದು. ಮುಂದಿನ ಚುನಾವಣೆಯಲ್ಲಿ ಹಾಸನ ಜಿಲ್ಲೆಯ 7 ಸ್ಥಾನವನ್ನೂ ಜಯಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ತೀವ್ರ ನಿರಾಸೆ; ಬಿಜೆಪಿ ಅಭ್ಯರ್ಥಿ ಬೆಂಬಲಿಸುತ್ತೇನೆಂದು ಪ್ರಿಯಾಂಕಾ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ನಾಯಕ