Site icon Vistara News

Vinay Kulkarni: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗೆ ಮತ್ತೆ ಅನುಮತಿ ನಿರಾಕರಿಸಿದ ಹೈಕೋರ್ಟ್

MLA Vinay Kulkarni

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡರ ಕೊಲೆ ಪ್ರಕರಣದಲ್ಲಿ ಆರೋಪಿಯಾದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ಹೈಕೋರ್ಟ್‌ ಮತ್ತೊಮ್ಮೆ ಅನುಮತಿ ನಿರಾಕರಿಸಿದೆ. ಧಾರವಾಡ ಪ್ರವೇಶಕ್ಕಿರುವ ನಿಷೇಧವನ್ನು ತೆರವು ಮಾಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾ ಮಾಡಿದೆ.

ಶಾಸಕನಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಲು ಅವಕಾಶ ನೀಡಬೇಕು ಎಂದು ವಿನಯ್‌ ಕುಲಕರ್ಣಿ ಕೋರಿದ್ದರು. ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿರಲಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಮತ್ತೊಮ್ಮೆ ಶಾಸಕರಿಗೆ ಹಿನ್ನಡೆಯಾಗಿದೆ.

ಯೋಗೀಶಗೌಡ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಅವರ ಮೇಲೆ ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪವಿದ್ದು, ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಸಿಬಿಐ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದ್ದರು. ಹೀಗಾಗಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಇದನ್ನೂ ಓದಿ | Cauvery Dispute: ಮೈಸೂರಿನಲ್ಲಿ ಸಚಿವ ಡಾ.ಮಹದೇವಪ್ಪ ಕಾರಿಗೆ ಮುತ್ತಿಗೆ ಹಾಕಿ ರೈತರ ಆಕ್ರೋಶ

ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡ ಅವರನ್ನು 2016ರ ಜೂನ್‌ 15ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಅಲ್ಲದೆ, ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಕೋರ್ಟ್ ಎಚ್ಚರಿಕೆ ನೀಡಿತ್ತು.

Exit mobile version