Site icon Vistara News

Cash for Posting: ಆಡಳಿತದಲ್ಲಿ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ಎಂದ ಎಚ್‌.ಡಿ. ಕುಮಾರಸ್ವಾಮಿ

HD Kumaraswamy and Dr Yathindra siddaramaiah

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಹಣ ಪಡೆಯುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಅವರ ಕೈವಾಡ ಇದರಲ್ಲಿದೆ ಇದೆಯೇ (Cash for Posting) ಎಂದು ಪರೋಕ್ಷವಾಗಿ ಪ್ರಶ್ನಿಸಿದ್ದಾರೆ.

ರಾಜ್ಯ ಹೆದ್ದಾರಿ ಯೋಜನಾ ಘಟಕದಲ್ಲಿನ ಒಂದೇ ಲೆಕ್ಕಾಧಿಕಾರಿ ಹುದ್ದೆಗೆ ಸಿಎಂ ಸಿದ್ದರಾಮಯ್ಯ ನಾಲ್ಕು ಶಿಫಾರಸು ಪತ್ರ ನೀಡಿರುವ ಕುರಿತು ಡಿಜಿಟಲ್‌ ಮಾಧ್ಯಮ ಸಂಸ್ಥೆಯೊಂದು ಮಾಡಿರುವ ವರದಿಗೆ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, “ಪಂಚಗ್ಯಾರಂಟಿಗಳ ಕಾಂಗ್ರೆಸ್‌ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ” ಎಂದಿದ್ದಾರೆ.

“ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ ಕರ್ನಾಟಕ ಮುಖ್ಯಮಂತ್ರಿಯೋ ಅಥವಾ ಅಥವಾ Corruption of Karnataka ವೋ??” ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೆಸರನ್ನು ಪರೋಕ್ಷವಾಗಿ ಪ್ರಸ್ತಾಪಿಸಿರುವ ಎಚ್‌.ಡಿ. ಕುಮಾರಸ್ವಾಮಿ, “4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ: Karnataka Govt: ಸರ್ಕಾರ ಬಂದು 20 ದಿನ ಆಗಿಲ್ಲ; 45% ಕಮಿಷನ್ ತೊಗೊಳ್ಳೋದು ಹೇಗೆ ಎಂದ ಸಚಿವ ವೆಂಕಟೇಶ್‌

“ಈ ಕಾಂಗ್ರೆಸ್‌ ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರ್ಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರ್ಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ” ಎಂದಿದ್ದಾರೆ.

ಪ್ರತಿಪಕ್ಷ ನಾಯಕ ಎಚ್‌ಡಿಕೆ!
ಈ ಹಿಂದೆ ಇದ್ದ ಬಿಜೆಪಿ ಸರ್ಕಾರ 40% ಲಂಚ ಪಡೆಯುತ್ತಿತ್ತು ಎಂದು ರಾಜ್ಯ ಗುತ್ತಿಗೆದಾರರ ಸಂಘ ಆರೋಪಿಸಿತ್ತು. ಇದನ್ನೆ ಕಾಂಗ್ರೆಸ್‌ ಚುನಾವಣಾ ವಿಚಾರವಾಗಿ ಬಳಸಿಕೊಂಡಿತ್ತು. ಇತ್ತೀಚೆಗೆ ಈ ಬಗ್ಗೆ ಮಾತನಾಡಿದ್ದ ಎಚ್‌.ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ಸರ್ಕಾರವು 40%+5% ಸೇರಿ 45% ಭ್ರಷ್ಟಾಚಾರ ಮಾಡುತ್ತಿದೆ ಎಂದು ಆರೋಪ ಮಾಡಿದ್ದರು. ಈಗ ಮತ್ತೊಮ್ಮೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಪ್ರತಿಪಕ್ಷ ಬಿಜೆಪಿಯಲ್ಲಿ ಇನ್ನೂ ನಾಯಕರನ್ನು ನಿರ್ಧಾರ ಮಾಡದೇ ಇರುವ ಗೊಂದಲದ ನಡುವೆಯೇ ಸರ್ಕಾರದ ವಿರುದ್ಧ ಗುಡುಗುತ್ತ ಎಚ್‌.ಡಿ. ಕುಮಾರಸ್ವಾಮಿಯವರೇ ಪ್ರತಿಪಕ್ಷ ನಾಯಕನಾಗಿದ್ದಾರೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿವೆ.

Exit mobile version