ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ (Karnataka Rain) ಆಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ. ವಿದರ್ಭದಿಂದ ದಕ್ಷಿಣ ತಮಿಳುನಾಡಿನವರೆಗೆ ಟ್ರಫ್ ಮುಂದುವರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಬಹುದು ಎಂದು ಅಂದಾಜಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಬುಧವಾರ ರಾತ್ರಿಯಿಂದಲೇ ಭಾರಿ ಮಳೆಯಾಗುವ ಸಂಭವ ಹೆಚ್ಚಿದೆ. ಗುರುವಾರದಿಂದ (ಜೂನ್ 1) ಜೂನ್ 4ರ ವರೆಗೆ ಬಹುತೇಕ ಕಡೆ ಜೋರು ಮಳೆಯಾಗುವ ಸಾಧ್ಯತೆ ಇದೆ. ಆದರೆ, ಜೂನ್ 2 ಮತ್ತು 3ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: Narendra Modi: ರಾಜಸ್ಥಾನದಲ್ಲೂ ಕಾಂಗ್ರೆಸ್ ಗ್ಯಾರಂಟಿಗೆ ಕುಟುಕಿದ ಮೋದಿ, ವಿಧಾನಸಭೆ ಚುನಾವಣೆಗೆ ರಣಕಹಳೆ
ಕರಾವಳಿ ಭಾಗವಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯ ಕೆಲವು ಕಡೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಕೆಲ ಕಡೆ ಮಾತ್ರ ಮಳೆ ಸುರಿಯಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ಮತ್ತು ಗುರುವಾರ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಗುಡುಗು ಸಹಿತ ಭಾರಿ ಮಳೆ
ಜೂನ್ 2ರವರೆಗೆ ಅಂದರೆ ಶುಕ್ರವಾರದ ವರೆಗೆ ದಕ್ಷಿಣ ಒಳನಾಡಿನ ಹಲವು ಕಡೆ, ಕರಾವಳಿಯ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಗಾಳಿ ವೇಗದಲ್ಲಿ ಹೆಚ್ಚಳ
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ. ವೇಗವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗರಿಷ್ಠ ಉಷ್ಣಾಂಶದ ಮುನ್ಸೂಚನೆ
ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್‌ವರೆಗೂ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಆದರೆ, ಮೀನುಗಾರರಿಗೆ ಯಾವುದೇ ಎಚ್ಚರಿಕೆಯನ್ನು ನೀಡಲಾಗಿಲ್ಲ.
ಬೆಂಗಳೂರಿನಲ್ಲಿ ಹೇಗಿರಲಿದೆ?
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರದವರೆಗೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಸಲ ಭಾರಿ ಬಿರುಗಾಳಿ ಸಹಿತ ಗುಡುಗಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ:Puneeth Rajkumar: ಮಾತು ಉಳಿಸಿಕೊಂಡ ಪ್ರಕಾಶ್ ರೈ, ಯಶ್; ಅಪ್ಪು ಹೆಸರಲ್ಲಿ ಆರು ಆಂಬ್ಯುಲೆನ್ಸ್ ಕೊಡುಗೆ
ರಾಯಚೂರಲ್ಲಿ ಸುರಿದ ಮಳೆ
ರಾಯಚೂರಿನಲ್ಲಿ ಬುಧವಾರ ಸಂಜೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ. ಸತತ ಎರಡು ಗಂಟೆಗಳ ಕಾಲ ಮಳೆ ಸುರಿದಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆಗೆ ನೀರು ನುಗ್ಗಿದೆ. ಮಳೆ ನೀರಿನಿಂದ ಲಕ್ಷಾಂತರ ರೂಪಾಯಿ ಭತ್ತದ ಬೆಳೆ ಒದ್ದೆಯಾಗಿದೆ. ವಿವಿಧೆಡೆಯಿಂದ ರೈತರು ಮಾರಾಟಕ್ಕೆ ತಂದಿದ್ದ ಭತ್ತದ ಬೆಳೆ ನಾಶವಾಗಿದೆ.
ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿವೆ. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮಳೆಯಿಂದ ನಗರದ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ.