ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಶುಕ್ರವಾರ ಭಾರಿ ಮಳೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲೂ (Bengaluru Rain) ವಿವಿಧೆಡೆ ಹೆಚ್ಚಿನ ಮಳೆಯಾಗಿದ್ದು, ಬಿಸಿಲಿನ ಬೇಗೆ ಮಧ್ಯೆ ವರುಣ ತಂಪೆರೆದಿದ್ದಾನೆ. ಮೆಜೆಸ್ಟಿಕ್, ಟೌನ್ ಹಾಲ್, ಶಾಂತಿನಗರ, ಬಸವನಗುಡಿ, ಜಯನಗರ ಭಾಗದಲ್ಲಿ ಬಿರುಸಿನ ಮಳೆಯಾಯಿತು. ಹೀಗಾಗಿ ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು. ಇದರಿಂದ ವಾಹನ ಸವಾರರು ಪರದಾಡಬೇಕಾಯಿತು.
ಇನ್ನು ಕೆಲಸ ಕಾರ್ಯ ಮುಗಿಸಿಕೊಂಡು ಮನೆಗಳಿಗೆ ತೆರಳುತ್ತಿದ್ದ ಜನರು ಮಳೆಯಿಂದ ಹೈರಾಣಾದರು. ಮಳೆಯಿಂದ ತಪ್ಪಿಸಿಕೊಳ್ಳಲು ಬೈಕ್ ಸವಾರರು ಬಸ್ ತಂಗುದಾಣ, ಕಟ್ಟಡಗಳ ಬಳಿ ಆಶ್ರಯ ಪಡೆದರು. ಕೆ.ಆರ್.ಮಾರ್ಕೆಟ್‌ನ ಟೌನ್ ಹಾಲ್ ಮುಂಭಾಗ ದೊಡ್ಡ ಪ್ರಮಾಣದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಕಿಲೋ ಮೀಟರ್‌ಗಟ್ಟಲೇ ವಾಹನಗಳು ನಿಂತಿದ್ದರಿಂದ ಸವಾರರು ಪರದಾಡಿದರು.
ಚಿಕ್ಕಮಗಳೂರು, ಧಾರವಾಡ ಸೇರಿ ಹಲವೆಡೆ ಭಾರಿ ಮಳೆ, 22 ಜಿಲ್ಲೆಗಳಲ್ಲಿ ಹೈ ಅಲರ್ಟ್
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು, ಧಾರವಾಡ, ವಿಜಯಪುರ, ಬಾಗೇಪಲ್ಲಿ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದಲ್ಲಿ ಶನಿವಾರ ಮತ್ತು ಭಾನುವಾರವೂ ಗುಡುಗು ಸಹಿತ ಮಳೆಯಾಗುವ (Karnataka Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ | Karnataka Elections 2023 : ನಮ್ಮಲ್ಲಿ ಸಿಕ್ಕಾಪಟ್ಟೆ ಲೀಡರ್‌ಗಳಿದ್ದಾರೆ, ನಾನು ಯಾರಿಗೂ ಪ್ರತಿಸ್ಪರ್ಧಿ ಅಲ್ಲ ಎಂದ ಬಿ.ಎಲ್. ಸಂತೋಷ್
ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಉಕ್ಕಿದ ಹಳ್ಳಗಳು
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಒಂದು ಗಂಟೆಗಿಂದಲೂ ಹೆಚ್ಚು ಕಾಲ ವರ್ಷಧಾರೆ ಹರಿಯಿತು. ಚಿಕ್ಕಮಗಳೂರು ತಾಲೂಕಿನ ನಲ್ಲೂರು, ತೇಗೂರು, ಮುಳ್ಳಯ್ಯನಗಿರಿ, ಚಿಕ್ಕಮಗಳೂರು ನಗರದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಳೆಯ ಆರ್ಭಟಕ್ಕೆ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ರೈತರ ಜಮೀನು ಜಲಾವೃತವಾಗಿದ್ದು, ಚಿಕ್ಕಮಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಧಾರವಾಡ, ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ
ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮಳೆ ಅಬ್ಬರಿಸಿದೆ. ಧಾರವಾಡದ ವಿದ್ಯಾಕಾಶಿಯಲ್ಲಿ ಆಲಿಕಲ್ಲು ಮಳೆ ಆಗಿದೆ. ಗಾಳಿ ಸಹಿತ ಗುಡುಗು ಸಿಡಿಲಿನಿಂದ ಕುಡಿದ ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಗುಡುಗು ಮಿಂಚು ಬಿರುಗಾಳಿ ಸಮೇತ ಆಗಿದೆ.
ಚಿಕ್ಕಮಗಳೂರು ತಾಲೂಕಿನ ನಲ್ಲೂರು, ತೇಗೂರು, ಮುಳ್ಳಯ್ಯನಗಿರಿ, ಚಿಕ್ಕಮಗಳೂರು ನಗರದಲ್ಲಿ ಮಳೆ ಅಬ್ಬರಿಸಿದೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿದಿದೆ. ಮಳೆಯ ಆರ್ಭಟಕ್ಕೆ ರೈತರ ಜಮೀನು ಜಲಾವೃತವಾಗಿತ್ತು. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದು, ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಮಳೆ ಮುನ್ಸೂಚನೆ?
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್ ಸೇರಿದಂತೆ ಕೊಪ್ಪಳ ಜಿಲ್ಲೆಯಲ್ಲಿ ಮುಂದಿನ 48 ಗಂಟೆವರೆಗೆ ಗುಡುಗು, ಮಿಂಚಿನ (Latest Rain Alert) ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ, ಹಾಸನ, ಕೊಡಗು,ಮಂಡ್ಯ, ಮೈಸೂರು ಸೇರಿದಂತೆ ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ | Malleswaram Blast: ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣ; ಇಬ್ಬರಿಗೆ 7 ವರ್ಷ ಜೈಲು
ಜತೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಭಾಗದಲ್ಲೂ ಮಳೆಯಾಗಲಿದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ
ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗಲಿದೆ. ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.