ಬೆಂಗಳೂರು: ಮಾರ್ಚ್ 27ರಿಂದ ಆರಂಭವಾಗಲಿರುವ ಐದು ಮತ್ತು ಎಂಟನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು (Public Exam) ಮುಂದೂಡಬೇಕು ಎಂಬ ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ ತಾನು ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಮಾ. 27ರಿಂದ ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಪರೀಕ್ಷೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡುವಂತೆ ಖಾಸಗಿ ಶಾಲೆಗಳ ಸಂಘ (ಕುಸ್ಮಾ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ನ್ಯಾ.ನರೇಂದರ್ ಹಾಗೂ ಅಶೋಕ್ ಕಿಣಗಿ ಅವರ ವಿಭಾಗೀಯ ಪೀಠದಿಂದ ಆದೇಶ ನೀಡಲಾಗಿದೆ.
ರಾಜ್ಯ ಸರ್ಕಾರ 2022-23ನೇ ಸಾಲಿನಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಮೌಲ್ಯಾಂಕನ (ಬೋರ್ಡ್) ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಏಕ ಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿತು. ಆಗ ಏಕಸದಸ್ಯ ಪೀಠವು ಪರೀಕ್ಷೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿತು.
ತಕ್ಷಣವೇ ರಾಜ್ಯದ ಶಿಕ್ಷಣ ಇಲಾಖೆ ವತಿಯಿಂದ ಹೈಕೋರ್ಟ್‌ನ ದ್ವಿಸದಸ್ಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿತು. ಎರಡೂ ಕಡೆಯವರ ವಾದ ಮಾತ್ರವಲ್ಲ, ಪರೀಕ್ಷೆಗಳು ಹೇಗೆ ನಡೆಯುತ್ತವೆ ಎಂಬಿತ್ಯಾದಿ ಅಂಶಗಳನ್ನು ಕೇಳಿಸಿಕೊಂಡ ಹೈಕೋರ್ಟ್ ಪರೀಕ್ಷೆ ನಡೆಸಲು ಷರತ್ತುಬದ್ಧ ಅನುಮತಿಯನ್ನು ನೀಡಿತು.
ಒಂದು ಹಂತದಲ್ಲಿ ಮಾರ್ಚ್ 13ರಂದು ನಡೆಯಬೇಕಾಗಿದ್ದ ಪರೀಕ್ಷೆಯನ್ನು ರದ್ದುಪಡಿಸಿದ್ದ ಹೈಕೋರ್ಟ್ ಮಾರ್ಚ್ 14ರಂದು ತೀರ್ಪು ನೀಡಿ ಪರೀಕ್ಷೆಗೆ ಅನುಮತಿ ನೀಡಿತು. ಜತೆಗೆ ಮಾರ್ಚ್ 27ರಿಂದಲೇ ಪರೀಕ್ಷೆಯನ್ನು ಮರುನಿಗದಿ ಮಾಡಲು ಸೂಚಿಸಿತು. ಜತೆಗೆ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಬಾರದು, ಯಾರನ್ನೂ ಅನುತ್ತೀರ್ಣಗೊಳಿಸಬಾರದು ಮತ್ತು ಫಲಿತಾಂಶವನ್ನು ಶಾಲಾ ಮಟ್ಟದಲ್ಲಿ ಮಾತ್ರ ಪ್ರಕಟಿಸಬೇಕು ಎಂಬ ಷರತ್ತುಗಳನ್ನು ವಿಧಿಸಿತು. ಇದಕ್ಕೆ ರಾಜ್ಯ ಸರ್ಕಾರವೂ ಒಪ್ಪಿ ಮಾರ್ಚ್ 27ರಿಂದ ಆರಂಭವಾಗುವಂತೆ ಹೊಸ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.
ಪಬ್ಲಿಕ್ ಪರೀಕ್ಷೆಯನ್ನೇ ನಡೆಸುವ ಸರ್ಕಾರದ ನಿರ್ಧಾರ ಮತ್ತು ಅದಕ್ಕೆ ಅನುಮತಿಸಿದ ಹೈಕೋರ್ಟ್ ಗ್ರೀನ್ ಸಿಗ್ನಲನ್ನು ಪ್ರಶ್ನಿಸಿ ರಾಜ್ಯದ ಅನುದಾನಹಿತ ಖಾಸಗಿ ಶಾಲೆಗಳ ಸಂಘದ ವತಿಯಿಂದ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಮಾರ್ಚ್ 27ಕ್ಕೆ ನಿಗದಿಪಡಿಸಿತ್ತು.
ಇತ್ತ ಖಾಸಗಿ ಶಾಲೆಗಳ ಒಕ್ಕೂಟ ಪರೀಕ್ಷೆಯನ್ನು ಒಂದು ವಾರ ಕಾಲ ಮುಂದೂಡಲು ಮನವಿ ಮಾಡಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಆದರೆ, ಹೈಕೋರ್ಟ್ ಪರೀಕ್ಷೆ ಮುಂದೂಡಲು ನಿರಾಕರಿಸಿದೆ. ಇದರಿಂದಾಗಿ ಪರೀಕ್ಷೆ ಯಥಾವತ್ತಾಗಿ ಮಾರ್ಚ್ 27ರಿಂದ ಆರಂಭವಾಗಲಿದೆ.