Site icon Vistara News

Hookah Ban: ರಾಜ್ಯ ಸರ್ಕಾರದ ಹುಕ್ಕಾ ಬಾರ್‌ ನಿಷೇಧ ಆದೇಶ ಎತ್ತಿಹಿಡಿದ ಹೈಕೋರ್ಟ್

Hookah Ban

ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧ (ban hookah bars) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹುಕ್ಕಾ ನಿಷೇಧ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹುಕ್ಕಾ ಸೇವನೆ, ಸಂಗ್ರಹ, ಮಾರಾಟವನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು. ಆದರೆ, ಇದನ್ನು ಪ್ರಶ್ನಿಸಿ ಹಲವರು ಹೈಕೋರ್ಟ್‌ ರಿಟ್ ‌ಸಲ್ಲಿಸಿದ್ದರು. ಆದರೆ, ಇದೀಗ ರಿಟ್ ಅರ್ಜಿಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಸೋಮವಾರ ವಜಾಗೊಳಿಸಿದೆ.

ಬೆಂಗಳೂರಿನ ಆರ್‌. ಭರತ್‌ ಮತ್ತಿತರರು ಸಲ್ಲಿಸಿದ ಅರ್ಜಿ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಇಂದು ಆದೇಶ ಪ್ರಕಟಿಸಿದೆ. ಈ ಬಗ್ಗೆ ಮಾರ್ಚ್‌ 11ರಂದು ನ್ಯಾಯಾಲಯವು ವಿಸ್ತೃತವಾಗಿ ವಾದ ಆಲಿಸಿ, ಆದೇಶ ಕಾಯ್ದಿರಿಸಿತ್ತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ.ಸುಮನ್‌ ಅವರು, ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ, ವಹಿವಾಟು, ಉತ್ಪಾದನೆ, ಪೂರೈಕೆ ಮತ್ತು ಹಂಚಿಕೆ ಕಾಯ್ದೆ 2003 (ಸಿಒಟಿಪಿಎ) ಕೇಂದ್ರ ಸರ್ಕಾರದ ಕಾನೂನಾಗಿದ್ದು, ಇಲ್ಲಿ ಹುಕ್ಕಾ ನಿಷೇಧಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಆಹಾರ ಪೂರೈಸದ ನಿರ್ದಿಷ್ಟ ಸ್ಥಳಗಳಲ್ಲಿ ಹುಕ್ಕಾ ಸೇದಲು ಅವಕಾಶವಿದೆ ಎಂದು ವಾದಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರು, ಸಿಒಟಿಪಿಎ ಸಿಗರೇಟುಗಳಿಗೆ ಸಂಬಂಧಿಸಿದ್ದು, ಹುಕ್ಕಾಗೂ ಇದಕ್ಕೂ ಸಂಬಂಧವಿಲ್ಲ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಹುಕ್ಕಾಗೆ ನಿಷೇಧ ವಿಧಿಸಲು ಸರ್ಕಾರಕ್ಕೆ ಅಧಿಕಾರವಿದೆ. ಸಂವಿಧಾನದ 47ನೇ ವಿಧಿಯ ಅನ್ವಯ ಸಾರ್ವಜನಿಕ ಆರೋಗ್ಯ ಸುಧಾರಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳುವ ಹೊಣೆಗಾರಿಕೆ ಹೊಂದಿದೆ ಎಂದಿದ್ದರು.

ಇದನ್ನೂ ಓದಿ | Hookah Bar : ಹುಕ್ಕಾ, ಹುಕ್ಕಾಬಾರ್‌ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ? ತೀರ್ಪು ಕಾಯ್ದಿರಿಸಿದ ಕೋರ್ಟ್‌

ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಹುಕ್ಕಾ ನಿಷೇಧಿಸಲಾಗಿದೆ. ಹುಕ್ಕಾ ನಿಷೇಧ ಕುರಿತಾದ ಅಧಿಸೂಚನೆಯ ಜೊತೆಗೆ ಮಸೂದೆಯನ್ನೂ ಸದನದಲ್ಲಿ ಮಂಡಿಸಲಾಗಿದೆ. ಹುಕ್ಕಾ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹಾಗೆಂದು ನಾವು ಸಿಗರೇಟು ಬಳಕೆಗೆ ಆದ್ಯತೆ ನೀಡುತ್ತಿಲ್ಲ ಎಂದು ಹೇಳಿದ್ದರು. ವಾದ-ಪ್ರತಿವಾದ ಅಲಿಸಿ ಅಂತಿಮವಾಗಿ ರಿಟ್ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ್ದು, ಹುಕ್ಕಾ ನಿಷೇಧದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.

ಸರ್ಕಾರ ಹುಕ್ಕಾ ಬಾರ್‌ ನಿಷೇಧಿಸಿದ್ದು ಯಾಕೆ?

ಹುಕ್ಕಾ, ತಂಬಾಕು ಅಥವಾ ನಿಕೋಟಿನ್‌ ಒಳಗೊಂಡ ನಿಕೋಟಿನ್‌ ರಹಿತ, ತಂಬಾಕು ರಹಿತ, ಸ್ವಾದಭರಿತ, ಸ್ವಾದರಹಿತ ಹುಕ್ಕಾ ಮೊಲಾಸಸ್‌ ಇದೇ ಮಾದರಿಯ ಇನ್ನಿತರ ಹೆಸರುಗಳಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ, ವ್ಯಾಪಾರವನ್ನು ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದವರ ವಿರುದ್ಧ ಸಿಒಟಿಪಿಎ, ಮಕ್ಕಳ ಆರೈಕೆ ಮತ್ತು ರಕ್ಷಣೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಗಳು, ಭಾರತೀಯ ದಂಡ ಸಂಹಿತೆ ಹಾಗೂ ಅಗ್ನಿ ನಿಯಂತ್ರಣ ಹಾಗೂ ಅಗ್ನಿಸುರಕ್ಷತೆ ಕಾಯಿದೆ ಪ್ರಕಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಫೆಬ್ರವರಿ 7ರಂದು ಅಧಿಸೂಚನೆ ಹೊರಡಿಸಿತ್ತು.

Exit mobile version