ಚಿಕ್ಕೋಡಿ: ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಒಗ್ಗಟ್ಟಿನ ಮಂತ್ರ ಪಠಿಸಿದ್ದ ಕಾಂಗ್ರೆಸ್ ನಾಯಕರ ಮಧ್ಯೆಯೇ ಈಗ ಭಿನ್ನಾಭಿಪ್ರಾಯಗಳು ಮೂಡಿವೆ. ಅದರಲ್ಲೂ, ಮುಖ್ಯಮಂತ್ರಿ ಬದಲಾವಣೆ ವಿಚಾರವು ಮುನ್ನೆಲೆಗೆ ಬಂದಿದ್ದು, ಸ್ವಾಮೀಜಿಗಳು ಕೂಡ ಇದರ ಚರ್ಚೆಗೆ ಪದಾರ್ಪಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ‘2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ’ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳುವ ಮೂಲಕ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ (DK Shivakumar) ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, “2028ರಲ್ಲಿ ನಾನು ಕೂಡ ಸಿಎಂ ಆಗುತ್ತೇನೆ. ಆಗಿನ ಚುನಾವಣೆ ಫಲಿತಾಂಶದ ಬಳಿಕದ ಪರಿಸ್ಥಿತಿ ನೋಡಿಕೊಂಡು ಸಿಎಂ ಸ್ಥಾನಕ್ಕೆ ಹಕ್ಕು ಚಲಾವಣೆ ಮಾಡುತ್ತೇನೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದುಹೋಗಿದೆ. ಸಿಎಂ ಬದಲಾವಣೆ ವಿಚಾರವು ಹೈಕಮಾಂಡ್ ತೀರ್ಮಾನವಾಗಿದೆ. ಡಿಸಿಎಂಗಳ ವಿಚಾರವೂ ಚುನಾವಣೆಗೆ ಮೊದಲು ಕೇಳಿಬಂದಿತ್ತು. ಈಗ ಮಾಡಬೇಕಾ, ಬೇಡವಾ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ” ಎಂದು ಹೇಳಿದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರವೂ ತೀವ್ರವಾಗಿ ಮುನ್ನೆಲೆಗೆ ಬಂದಿದೆ. ಆಯಾ ಸಮುದಾಯಗಳ ಸ್ವಾಮೀಜಿಗಳು ನಾಯಕರ ಹೆಸರನ್ನು ಸೂಚಿಸಿ, ಇವರನ್ನೇ ಸಿಎಂ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಸಚಿವರು ಕೂಡ ಇದನ್ನೇ ಚರ್ಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್ ಜಾರಕಿಹೊಳಿ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಚಂದ್ರಶೇಖರ ಸ್ವಾಮೀಜಿ ಹೇಳಿದ್ದಿಷ್ಟು
ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಕೆಲ ದಿನಗಳ ಹಿಂದೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಬ್ಯಾಟಿಂಗ್ ಮಾಡಿದ್ದರು. “ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು” ಹೇಳಿದ್ದರು.
ಲಿಂಗಾಯತ ಸಿಎಂ ಕೂಗು
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರುಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಆಗ್ರಹಿಸಿದ್ದಾರೆ. “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಹಾಗಾಗಿ, ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಸಿಎಂ ಸ್ಥಾನ ಕೊಟ್ಟರೂ ತಪ್ಪಿಲ್ಲ. ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯವು ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿಯಾಗುತ್ತದೆ. ಸಿಎಂ ಸ್ಥಾನ ಅಲ್ಲದಿದ್ದರೂ ಡಿಸಿಎಂ ಸ್ಥಾನವನ್ನಾದರೂ ಕೊಡಬೇಕು” ಎಂದು ಹೇಳಿದರು.
ಇದನ್ನೂ ಓದಿ: Karnataka CM Row: ‘ಗೌಡ’ ಸಿಎಂ ಆಯ್ತು, ಈಗ ‘ಲಿಂಗಾಯತ’ ಸಿಎಂ ಕೂಗು; ರಂಭಾಪುರಿ ಶ್ರೀ ಹೇಳಿದ ಹೆಸರಿದು!