ಮೈಸೂರು: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯುವುದಿಲ್ಲ ಎಂದು ಬಿಜೆಪಿ ನಾಯಕರು ಬಿಡಿ, ಕಾಂಗ್ರೆಸ್ (Congress) ನಾಯಕರೇ ಹೇಳುತ್ತಿದ್ದಾರೆ. ಆ ಮೂಲಕ ಸಿದ್ದರಾಮಯ್ಯನವರ ಸಿಎಂ ಕುರ್ಚಿ ಅಲುಗಾಡುತ್ತಿದೆ ಎಂಬುದಾಗಿ ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಿಎಂ ಸ್ಥಾನದ ಕುರಿತು ಮಾತನಾಡಿದ್ದಾರೆ. “ನಾನು ಮುಖ್ಯಮಂತ್ರಿಯಾಗಿ ಉಳಿಯಬೇಕು ಎಂದರೆ ವರುಣಾ (Varuna) ಕ್ಷೇತ್ರದಲ್ಲಿ 60 ಸಾವಿರ ಲೀಡ್‌ನಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು” ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ವರುಣಾ ಕ್ಷೇತ್ರದ ಬಿಳಿಗೆರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೋ ಬೇಡವೋ? ನಾನು ಸಿಎಂ ಸ್ಥಾನದಲ್ಲಿ ಮುಂದುವರಿಯಬೇಕು ಎಂದರೆ ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಟ್ಟು ಸುನೀಲ್ ಬೋಸ್ ಅವರನ್ನು ಗೆಲ್ಲಿಸಿ. ವರುಣಾ ನನ್ನ ಅದೃಷ್ಟದ ಕ್ಷೇತ್ರ. ಇಲ್ಲಿಂದ ಗೆದ್ದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಈಗಲೂ ವರುಣಾ ಕ್ಷೇತ್ರದಲ್ಲಿ ಸುನೀಲ್ ಬೋಸ್ ಅವರನ್ನು 60 ಸಾವಿರ ಲೀಡ್ ಕೊಟ್ಟು ಗೆಲ್ಲಿಸಿ. ಆಗ ನನ್ನನ್ನು ಯಾರೂ ಮುಟ್ಟಲು ಆಗುವುದಿಲ್ಲ” ಎಂಬುದಾಗಿ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಅಲುಗಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕರು, ನಾಯಕರೇ ಹೇಳಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಡಿಮೆ ಸ್ಥಾನ ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ಪ್ರಸಂಗ ಬರಬಹುದು” ಎಂದು ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಕೆಲ ದಿನಗಳ ಹಿಂದಷ್ಟೇ ಹೇಳಿದ್ದರು. ಬಿಜೆಪಿ ನಾಯಕರು ಕೂಡ ಇದನ್ನೇ ಹೇಳುತ್ತಿದ್ದಾರೆ. 2023ರಲ್ಲಿ ನರೇಂದ್ರ ಮೋದಿ ಅವರು ಕೂಡ ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದೆ ಎಂದು ಹೇಳಿದ್ದರು.
ಇದನ್ನೂ ಓದಿ: Lok Sabha Election 2024: ಸಿದ್ದರಾಮಯ್ಯ ಅವರೇ ನಿಮಗೆ ಇಷ್ಟೊಂದು ಅಹಂ ಬಂತಾ? ಸಿಎಂಗೆ ಎಚ್‌ಡಿಡಿ ಸ್ಟ್ರಾಂಗ್ ಡೋಸ್!
ವರುಣಾ ಕ್ಷೇತ್ರಕ್ಕೆ ತೆರಳುವ ಮೊದಲು ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. “ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಬಿಜೆಪಿ ಹೇಳುತ್ತಿದೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ. ಬಿಜೆಪಿಯದ್ದು ಅಭಿವೃದ್ಧಿ ಶೂನ್ಯ ಸಾಧನೆ. ಮೋದಿಯವರ ಸುಳ್ಳಿನ ಪಿಕ್ಚರ್ ಇನ್ನೂ ಬಾಕಿ ಇದೆ. ಸುಳ್ಳಿನ ಕನಸುಗಳನ್ನು ಬಿತ್ತುತ್ತಾ ಬಂದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ 20 ಸೀಟುಗಳನ್ನು ಗೆದ್ದೇ ಗೆಲ್ಲುತ್ತದೆ. ಸೋಲುವ ಭಯಕ್ಕೆ ಒಳಗಾಗಿರುವ ಬಿಜೆಪಿಯವರು ಕರ್ನಾಟಕದಲ್ಲಿ ಬಿಜೆಪಿ 28 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ