ಚೆನ್ನೈ: ಬಾಂಬೆಯಲ್ಲಿರುವ ಐಐಟಿ ಕ್ಯಾಂಪಸ್‌ನ ಹಾಸ್ಟೆಲ್‌ನ ಏಳನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಮದ್ರಾಸ್ ಐಐಟಿಯಲ್ಲಿ (IIT Madras) ಕರ್ನಾಟಕದ ವಿದ್ಯಾರ್ಥಿಯು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹಾಗಾಗಿ, ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ.
ಮದ್ರಾಸ್ ಐಐಟಿಯಲ್ಲಿ ದ್ವಿತೀಯ ವರ್ಷದ ಬಿಟೆಕ್ ಓದುತ್ತಿರುವ ೨೧ ವರ್ಷದ ವಿವೇಶ್, ಹೆಚ್ಚಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವಿವೇಶ್‌ನನ್ನು ಕಂಡ ವಿದ್ಯಾರ್ಥಿಗಳು ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿವೇಶ್ ಅಪಾಯದಿಂದ ಪಾರಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದುಬಂದಿಲ್ಲ.
ನೇಣು ಬಿಗಿದುಕೊಂಡು ಮತ್ತೊಬ್ಬ ಆತ್ಮಹತ್ಯೆ
ಇದೇ ಸಂಸ್ಥೆಯಲ್ಲಿ ಸ್ನಾತಕೋತ್ತರ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಯು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಲೆಕ್ಟ್ರಾನಿಕ್ ಎಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿಯು ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.