ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ನಗರ ಪ್ರದೇಶದಲ್ಲಿ ಭಿಕ್ಷಾಟನೆ ಹೆಚ್ಚಿದ್ದು, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂಟು ದಿಕ್ಕುಗಳಿಗೂ ಎಸಿಪಿಗಳನ್ನು ನೇಮಕ ಮಾಡಲಾಗಿದ್ದು, ಈಗಾಗಲೇ ಕಾರ್ಯಾಚರಣೆ ಮೂಲಕ ಹಲವರನ್ನು ರಕ್ಷಣೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೋಮವಾರ ವಿಧಾನಸೌಧಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವದ್ವಯರು, ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳು ಹಾಗೂ ತಾಯಂದಿರನ್ನು ರಕ್ಷಿಸಲು ಮತ್ತು ಭಿಕ್ಷಾಟನೆಯನ್ನು ನಿಯಂತ್ರಿಸುವ ಸಂಬಂಧ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಒಟ್ಟು 5 ಸಭೆಗಳನ್ನು ಮಾಡಿದಂತಾಗಿದೆ. ಭಿಕ್ಷಾಟನೆಯಲ್ಲಿ ರಕ್ಷಿಸಲ್ಪಟ್ಟ ಮಕ್ಕಳು ಹಾಗೂ ತಾಯಂದಿರಿಗೆ ಸೂಕ್ತ ಹಾಗೂ ನಿರ್ದಿಷ್ಟ ಪ್ರದೇಶದಲ್ಲಿ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಇದನ್ನೂ ಓದಿ | Viral Video: ಪತ್ನಿಗಾಗಿ 90 ಸಾವಿರ ರೂ. ಮೌಲ್ಯದ ಹೊಸ ಸ್ಕೂಟರ್ ಖರೀದಿಸಿದ ಭಿಕ್ಷುಕ
ಮಕ್ಕಳಿಗೆ ನೀಡಲಾಗುತ್ತಿದೆ ಮತ್ತು ಬರುವ ಔಷಧಿ!
ನಗರ ಪ್ರದೇಶದಲ್ಲಿ ಹಲವು ರೀತಿಯ ಭಿಕ್ಷಾಟನೆ ಮಾಡುವವರು ಕಾಣಸಿಗುತ್ತಿದ್ದಾರೆ. ವಯೋಸಹಜ, ಮಾನಸಿಕ ಅಸ್ವಸ್ಥರು, ತೃತೀಯ ಲಿಂಗಿಗಳು ಹಾಗೂ ಮಕ್ಕಳು ಭಿಕ್ಷಾಟನೆಯಲ್ಲಿ ನಿರತರಾಗಿರುವುದು ಹೆಚ್ಚಾಗಿ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಕಂಡು ಬರುತ್ತಿದೆ. ಭಿಕ್ಷಾಟನೆ ಹೆಸರಿನಲ್ಲಿ ವಿವಿಧ ಕಾನೂನು ಬಾಹಿರ ಕೃತ್ಯಗಳು ನಡೆಯುವುದನ್ನು ಇಲಾಖೆ ಗುರುತಿಸಿದೆ. ವಿಶೇಷವಾಗಿ ಮಕ್ಕಳಿಗೆ ನಿಷೇಧಿತ ಮತ್ತು ಬರುವ ಮದ್ದು ನೀಡಿ ಭಿಕ್ಷಾಟನೆಗೆ ಬಳಸಿಕೊಳ್ಳುವುದು, ಅಂಗವಿಕಲರನ್ನಾಗಿ ಮಾಡಿ ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬೆಂಗಳೂರಿನಲ್ಲಿ 50ರಿಂದ 70ಕಡೆಗಳಲ್ಲಿ ಭಿಕ್ಷಾಟನೆ ವ್ಯಾಪಕವಾಗಿರುವುದನ್ನು ಗುರುತಿಸಲಾಗಿದೆ. ಈಗಾಗಲೇ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಭಿಕ್ಷಾಟನೆಯಲ್ಲಿ ತೊಡಗಿದ್ದ 101 ಮಕ್ಕಳನ್ನು ವಶಕ್ಕೆ ಪಡೆದಿದ್ದು ಅವರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಅಲ್ಲದೆ ಕಾನೂನು ಸೇವಾ ಪ್ರಾಧಿಕಾರದಿಂದ 720 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ವರದಿ ನೀಡಲಾಗಿದೆ. ಈ ಎಲ್ಲ ಮಾಹಿತಿಯನ್ನಾಧರಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ಕೋಟಾ ತಿಳಿಸಿದರು.
ಬೆಂಗಳೂರಿನಲ್ಲಿ ಭಿಕ್ಷಾಟನೆ ಸಂಬಂಧ ವ್ಯಾಪಕವಾಗಿರುವುದನ್ನು ಗಮನಿಸಲಾಗಿದ್ದು ಭಿಕ್ಷಾಟನೆ ನಿಯಂತ್ರಣಕ್ಕೆ ನಿರ್ಧಾಕ್ಷಿಣ್ಯವಾಗಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಈಗಾಗಲೇ ಬೆಂಗಳೂರಿನ ಎಂಟು ಪೊಲೀಸ್ ವಿಭಾಗಗಳಲ್ಲಿ ಎಸಿಪಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ಈ ಬಗ್ಗೆ ಕಾರ್ಯಯೋಜನೆಯನ್ನು ಸಿದ್ಧಪಡಿಸಲಾಗಿದೆ. ಮಕ್ಕಳನ್ನು ಭಿಕ್ಷಾಟನೆಗಾಗಿ ಬೀದಿಗೆ ಬಿಡುವವರ ವಿರುದ್ಧವೂ ಕೇಸು ದಾಖಲಿಸಲಾಗುವುದು ಎಂದರು.
ಅಲ್ಲದೆ ವಶಕ್ಕೆ ಪಡೆದ ಮಕ್ಕಳು ಹಾಗೂ ತಾಯಿಯರಿಗೆ ಪುನರ್ವಸತಿ ಕಲ್ಪಿಸಲು ಇಲಾಖೆಯಿಂದ ಪ್ರತ್ಯೇಕವಾಗಿ ಕಟ್ಟಡವೊಂದನ್ನು ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ ಎಂದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಈಗಾಗಲೇ ‘ಈ ಗುರುತು’ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು, ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ 1098ಗೆ ಕರೆ ಮಾಡಿ ಮಾಹಿತಿ ನೀಡಬೇಕು. 31 ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿಗಳ ಮಟ್ಟದ ಸಮಿತಿ ಇದೆ. ಭಿಕ್ಷಾಟನೆ ನಿಷೇಧ ಇಡೀ ರಾಜ್ಯಕ್ಕೆ ಅನ್ವಯ ಆಗಲಿದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ತಾಯಿ, ಮಕ್ಕಳನ್ನು ರಕ್ಷಣೆ ಮಾಡುವ ಕೆಲಸ ಆಗಲಿದೆ ಎಂದು ವಿವರಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಇತರ ಅಧಿಕಾರಿಗಳೂ ಉಪಸ್ಥಿತರಿದ್ದರು.
ಇದನ್ನೂ ಓದಿ | ಹೈಕೋರ್ಟ್ ತೀರ್ಪು ಉಲ್ಲಂಘಿಸುವವರಿಗೆ ಸಂವಿಧಾನದ ಮೇಲಿನ ಬದ್ಧತೆ ಪ್ರಶ್ನಾರ್ಹ: ಸಚಿವ ಪೂಜಾರಿ ಹೇಳಿಕೆ