Site icon Vistara News

Independence day 2023 : ಸರ್ವರಿಗೂ ನ್ಯಾಯ, ರಾಜ್ಯದ ಅಭ್ಯುದಯ; ಸಿಎಂ ಸಿದ್ದರಾಮಯ್ಯ ಭಾಷಣದ TOP 14 ವಿಶೇಷ

ಬೆಂಗಳೂರು: ಬೆಂಗಳೂರಿನ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ (Independence day 2023) ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳಿಂದ ಆಗಿರುವ ಕ್ರಾಂತಿಯನ್ನು ಬಣ್ಣಿಸಿದರು. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಹಲವು ಕಂಪನಿಗಳು ನೆಲೆಯೂರಲು ಮುಂದಾಗಿರುವ ಸಂಗತಿ ತೆರೆದಿಟ್ಟರು. ಅಭಿವೃದ್ಧಿಯನ್ನು ರಾಜ್ಯದ ಎಲ್ಲ ಭಾಗಗಳಿಗೆ ವಿಸ್ತರಿಸುವ ಕ್ರಮಗಳನ್ನು ಚರ್ಚಿಸಿದರು. ಹೀಗೆ ಸುಮಾರು 14 ವಿಚಾರಗಳನ್ನು ಪ್ರಮುಖವಾಗಿ ಉಲ್ಲೇಖಿಸಿದರು.

ಇವುಗಳೇ ನೋಡಿ ಆ 14 ಅಂಶಗಳು

  1. ನಾವು ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ. ಅದಕ್ಕಾಗಿಯೆ ನಾವು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.
  2. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ
    50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ.
  3. 200 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿಯಡಿ 2 ಕೋಟಿ ಗ್ರಾಹಕರಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ.
  4. ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 27ರಂದು ಚಾಲನೆ ನೀಡಲಾಗುತ್ತಿದೆ. ಮಹಿಳೆಯರ ಖಾತೆಗೆ ಮಾಸಿಕ 2000 ರೂ.ಗಳನ್ನು ವರ್ಗಾಯಿಸುವ ಈ ಯೋಜನೆಯಡಿ ಈಗಾಗಲೆ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆ.
  5. ನಮ್ಮ ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳ ಬದುಕಿನಲ್ಲಿ ಸಾಕಷ್ಟು ಬದಲಾವಣೆ ಬರಲಿದೆ. ಜಾತಿ, ಮತ, ವರ್ಗ, ವರ್ಣ ಭೇದವಿಲ್ಲದೆ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.
  6. ಗ್ಯಾರಂಟಿ ಯೋಜನೆಗಳ ಜೊತೆಗೆ ಕಳೆದ ಕೆಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.
  7. ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಡಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ.
  8. ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುವ ಸುಮಾರು 70 ರಿಂದ 80 ಲಕ್ಷ ಅಸಂಘಟಿತ ಅದರಲ್ಲೂ ವಿಶೇಷವಾಗಿ ಸಾರಿಗೆ ವಲಯದ ಕಾರ್ಮಿಕರಿಗೆ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಉದ್ದೇಶಿಸಲಾಗಿದೆ.
  9. ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದೆ.
  10. ಕಳೆದ ಎರಡು ತಿಂಗಳಲ್ಲಿ ಫಾಕ್ಸ್‍ಕಾನ್, ಇಂಟರ್‍ನ್ಯಾಷನಲ್ ಬ್ಯಾಟರಿ ಕಂಪೆನಿ, ಟಾಟಾ ಟೆಕ್ನಾಲಜೀಸ್ ಮತ್ತಿತರ ಕಂಪೆನಿಗಳಿಂದ ಗಣನೀಯ ಪ್ರಮಾಣದ ಹೂಡಿಕೆ ಆಕರ್ಷಿಸಲಾಗಿದೆ. ಹೂಡಿಕೆ ಆಕರ್ಷಣೆಯಲ್ಲಿ ಮುನ್ನಡೆ ಸಾಧಿಸುವ ನಿಟ್ಟಿನಲ್ಲಿ ಏರೋಸ್ಪೇಸ್ ಮತ್ತು ರಕ್ಷಣೆ, ಆಟೊಮೊಬೈಲ್, ವಿದ್ಯುತ್ ವಾಹನಗಳು (EV), ಇಲೆಕ್ಟ್ರಾನಿಕ್ಸ್ ಮತ್ತು ಉತ್ಪಾದನಾ ವಲಯ, ಸ್ಟಾರ್ಟಪ್‍ಗಳು, ವಿವಿಧ ಸಂಘಟನೆಗಳು, ಮೂಲ ಸೌಕರ್ಯ ಅಭಿವೃದ್ಧಿ ವಲಯದ ಸಂಸ್ಥೆಗಳೊಂದಿಗೆ ನಿರಂತರ ಸಂವಾದ ನಡೆಸುತ್ತಿದ್ದೇವೆ.
  11. ಜಿಡಿಪಿ ವೇಗವರ್ಧನೆಗೆ ಸಂಬಂಧಿಸಿದಂತೆ ಏರೋಸ್ಪೇಸ್ ಮತ್ತು ಡಿಫೆನ್ಸ್, ಎಲೆಕ್ಟ್ರಾನಿಕ್ ಬಿಡಿಭಾಗಗಳು, ಕೋರ್ ಕೈಗಾರಿಕೆಗಳು ಮತ್ತು ವೇರ್ ಹೌಸಿಂಗ್ ಮತ್ತು ಲಾಜಿಸ್ಟಿಕ್ಸ್ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
  12. ನಾವೀನ್ಯತೆಯಲ್ಲಿ ಇದೀಗ ಬೆಳಕು ಕಾಣುತ್ತಿರುವ Future Mobility, Green Hydrogen, Drones, Industrial Robots, Semiconductors ಉತ್ಪಾದನೆ,AR/ VR, Med tech ಮತ್ತು Space tech ಮೊದಲಾದ ಉದ್ಯಮಗಳಿಗೆ ಆದ್ಯತೆ ನೀಡಲಾಗುವುದು.
  13. ಬೆಂಗಳೂರಿನಿಂದ ಹೊರಗೆ ಹೆಚ್ಚು ಉದ್ಯೋಗಾವಕಾಶ ಸೃಜಿಸುವ ಮೂಲಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮತ್ತು ಸುಸ್ಥಿರ ಬದುಕು ರೂಪಿಸಲು ಸರ್ಕಾರವು ಮಿಲಿಯನ್ ಪ್ಲಸ್ ನಗರಗಳೆಂದು ಗುರುತಿಸಲಾದ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮತ್ತು ಬಳ್ಳಾರಿ ನಗರಗಳ ಉಪನಗರಗಳಾಗಿ ಕೈಗಾರಿಕಾ ಟೌನ್‍ಶಿಪ್‍ಗಳÀನ್ನು ಅಭಿವೃದ್ಧಿಪಡಿಸಲಿದೆ. ಕೈಗಾರಿಕೆಗಳ ಸ್ಥಾಪನೆಯನ್ನು ಕೇಂದ್ರವಾಗಿಸಿಕೊಂಡ ಈ ಉಪನಗರಗಳು ಸುಸ್ಥಿರತೆಯನ್ನು ಹೊಂದಿದ್ದು, ನಾಗರಿಕ ಸೌಲಭ್ಯಗಳು, ಶಾಲೆ, ಆರೋಗ್ಯ ಸೇವಾ ಸೌಲಭ್ಯಗಳನ್ನು ಸ್ಥಳೀಯವಾಗಿಯೇ ಒದಗಿಸಲಾಗುವುದು.
  14. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು-ಸುದ್ದಿ ಹರಡುವ, ಸಾಮರಸ್ಯ ಕದಡುವ ಯತ್ನ ಮತ್ತು ‘ಮತೀಯ ಗೂಂಡಾಗಿರಿ ಅಥವಾ ನೈತಿಕ ಪೊಲೀಸ್ ಗಿರಿʼ ಹೆಸರಿನಲ್ಲಿ ನಡೆಯುವ ಅನೈತಿಕ ದಬ್ಬಾಳಿಕೆಯನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ.
ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ

ಇದನ್ನೂ ಓದಿ: Independence day 2023 : ಅಭಿವೃದ್ಧಿಗೆ ಕರ್ನಾಟಕ ಮಾದರಿ; ಗ್ಯಾರಂಟಿ ಸಮರ್ಥನೆ ಮಾಡಿದ ಸಿದ್ದರಾಮಯ್ಯ

Exit mobile version