ಬೆಂಗಳೂರು: ”ಭೂ-ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆಯು ರಾಜ್ಯದ ಪಶ್ಚಿಮ ಘಟ್ಟಗಳ ವ್ಯಾಪ್ತಿಗೆ ಒಳಪಡುವ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿನ 250 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳನ್ನು ಗುರುತಿಸಿದೆ. ಈ ಪ್ರದೇಶಗಳಲ್ಲಿ ಭೂ-ಕುಸಿತ ತಡೆಗಟ್ಟಲು ಭೂ-ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಮತ್ತು National Institute of Rock Mechanics (NIRM) ಸಹಯೋಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದ್ದಾರೆ (Independence Day 2024).
ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಅವರು ಈ ವಿಚಾರವನ್ನು ಪ್ರಸ್ತಾವಿಸಿದರು. ʼʼಮಾನವ-ವನ್ಯ ಪ್ರಾಣಿ ಸಂಘರ್ಷ ನಾವು ಎದುರಿಸುವ ಪ್ರಮುಖ ಸವಾಲಾಗಿದೆ. ಇದನ್ನು ಸಮರ್ಥವಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಮ್ಮ ಸರ್ಕಾರ 120 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡುತ್ತಿದೆ. ಇದರೊಂದಿಗೆ 7 ಆನೆ ಟಾಸ್ಕ್ ಫೋರ್ಸ್ ಹಾಗೂ 2 ಚಿರತೆ ಟಾಸ್ಕ್ ಫೋರ್ಸ್ ರಚಿಸಲಾಗಿದೆʼʼ ಎಂದು ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಒತ್ತು
ʼʼಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಡಿ ಹೋಬಳಿಗೊಂದು ವಸತಿ ಶಾಲೆ ಪ್ರಾರಂಭಿಸುವ ಗುರಿಯನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ 20 ಹೊಸ ವಸತಿ ಶಾಲೆಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯದವರಲ್ಲಿ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು ಪೂರಕವಾಗಿ ಹೊಸದಾಗಿ ಒಟ್ಟು 295 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆʼʼ ಎಂದಿದ್ದಾರೆ.
ʼʼಪರಿಶಿಷ್ಟ ಪಂಗಡದ ಅತಿ ಹಿಂದುಳಿದ 23 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಶೇ. 20ರಷ್ಟು ಮೀಸಲಾತಿ ಹಾಗೂ ನೇರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 25ರಿಂದ 40ಕ್ಕೆ ಹೆಚ್ಚಿಸಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಬಾಡಿಗೆ ಕಟ್ಟಡದಲ್ಲಿರುವ 30 ವಿದ್ಯಾರ್ಥಿ ನಿಲಯಗಳ ಸ್ವಂತ ಕಟ್ಟಡ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಅಲ್ಪಸಂಖ್ಯಾತ ಸಮುದಾಯಗಳ ಶೈಕ್ಷಣಿಕ ಅಭಿವೃದ್ಧಿಗಾಗಿ 100 ಹೊಸ ಮೌಲಾನಾ ಆಜಾದ್ ಶಾಲೆಗಳ ಪ್ರಾರಂಭಿಸಲಾಗಿದೆ ಹಾಗೂ 50 ಸಂಖ್ಯಾ ಬಲವುಳ್ಳ 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಸ್ವಂತ ಕಟ್ಟಡ ಹೊಂದಿರುವ
25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗಿದೆʼʼ ಎಂದು ಸಿಎಂ ಹೇಳಿದ್ದಾರೆ.
ʼʼಮಧ್ಯಾಹ್ನದ ಉಪಾಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಸಹಯೋಗದೊಂದಿಗೆ ಮೊಟ್ಟೆ ಅಥವಾ ಚಿಕ್ಕಿ ಮತ್ತು ಬಾಳೆಹಣ್ಣಿನ ವಿತರಣೆಯನ್ನು ವಾರದಲ್ಲಿ ಎರಡು ದಿನಗಳಿಂದ ಆರು ದಿನಗಳಿಗೆ ಹೆಚ್ಚಿಸಲಾಗಿದೆ ಹಾಗೂ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಭಾಗಿತ್ವದಲ್ಲಿ ವಾರದಲ್ಲಿ 3 ದಿನ ರಾಗಿ ಮಾಲ್ಟನ್ನು ನೀಡಲಾಗುತ್ತಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 11,494 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಬಾಕಿ ಇರುವ ಹುದ್ದೆಗಳನ್ನೂ ಹಂತ ಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆ ಪ್ರಾರಂಭಿಸುತ್ತೇವೆʼʼ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ʼʼಮುಕ್ತ, ನಿರ್ಭೀತ ಸಮಾಜದ ನಿರ್ಮಾಣ ಹಾಗೂ ವೈಜ್ಞಾನಿಕ ತಳಹದಿಯ ಮೇಲೆ ಉನ್ನತ ಶಿಕ್ಷಣ ವ್ಯವಸ್ಥೆ ರೂಪಿಸಲು ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲಾಗುತ್ತಿದೆ. ಇದಕ್ಕಾಗಿ ಸರ್ಕಾರವು ರಚಿಸಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಆಧಾರದಲ್ಲಿ ಪದವಿ ಶಿಕ್ಷಣದ ಅವಧಿ ಹಾಗೂ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆʼʼ ಎಂದೂ ತಿಳಿಸಿದ್ದಾರೆ.
ವಸತಿ ಯೋಜನೆಗಳ ಮೂಲಕ ಸ್ವಂತ ಸೂರಿನ ಕನಸು ನನಸು
ʼʼನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ವಿವಿಧ ವಸತಿ ಯೋಜನೆಗಳಡಿ ಒಟ್ಟು 3,690 ಕೋಟಿ ರೂ. ವೆಚ್ಚದಲ್ಲಿ 2.38 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಫಲಾನುಭವಿಗಳಿಗೆ ಆರ್ಥಿಕವಾಗಿ ಹೊರೆಯಾಗಿದ್ದ ವಂತಿಗೆಯಲ್ಲಿ ತಲಾ 4 ಲಕ್ಷ ರೂ. ರಾಜ್ಯ ಸರ್ಕಾರವೇ ಭರಿಸಲು ತೀರ್ಮಾನಿಸಿ, ಅರ್ಧಕ್ಕೆ ನಿಂತಿದ್ದ ಮನೆಗಳ ನಿರ್ಮಾಣ ಮತ್ತೆ ಪ್ರಾರಂಭವಾಗಿದೆ. ಈಗಾಗಲೇ 36,781 ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸುವ ಮೂಲಕ ಬಡ ಜನರ ಸ್ವಂತ ಸೂರಿನ ಕನಸನ್ನು ಸಾಕಾರಗೊಳಿಸಿದ್ದೇವೆ. ಹಾಗೆಯೇ ಇನ್ನುಳಿದ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಂಡಿದ್ದೇವೆʼʼ ಎಂದು ಸಿಏಂ ತಿಳಿಸಿದ್ದಾರೆ.
ಜನರಿಗೆ ಸರಳವಾಗಿ, ಪಾರದರ್ಶಕವಾಗಿ ನಾಗರಿಕ ಸೇವೆಗಳನ್ನು ದೊರಕಿಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಪಹಣಿಗೆ ಆಧಾರ್ ಜೋಡಣೆ, ಆಟೋಮ್ಯುಟೇಷನ್ ಸೌಲಭ್ಯ, ಬಗರ್‌ಹುಕುಂ ಸಾಗುವಳಿ ತಂತ್ರಾಂಶ, ಕಂದಾಯ ದಾಖಲೆಗಳ ಡಿಜಿಟಲೀಕರಣ, ನಗರಾಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ ಯೋಜನೆ ಮೊದಲಾದವುಗಳು ರೈತರ, ಜನ ಸಾಮಾನ್ಯರ ಸಮಯ ಹಾಗೂ ಶ್ರಮ ಉಳಿತಾಯ ಮಾಡುವತ್ತ ಮಹತ್ವದ ಕ್ರಮಗಳಾಗಿವೆ. ಗ್ರಾಮೀಣ ಪ್ರದೇಶದ ಜನರು ತಮ್ಮ ಗ್ರಾಮ ಪಂಚಾಯಿತಿಯಲ್ಲಿಯೇ ಸಕಾಲದಲ್ಲಿ ಜನನ ಮರಣ ನೋಂದಣಿ ಮಾಡುವ ಉದ್ದೇಶದಿಂದ ರಾಜ್ಯದ ಎಲ್ಲ 5,950 ಗ್ರಾಮ ಪಂಚಾಯಿತಿಗಳಲ್ಲಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆʼʼ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ʼʼನೋಂದಣಿ ಮತ್ತು ಮುದ್ರಾಂಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಕೌನ್ಸೆಲಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ತಾಯಂದಿರ ಅನುಕೂಲಕ್ಕಾಗಿ 4,000 ಪಂಚಾಯಿತಿಗಳಲ್ಲಿ ‘ಕೂಸಿನ ಮನೆʼ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆʼʼ ಎಂದು ಹೇಳಿದ್ದಾರೆ.
ಇದನ್ನೂ ಓದಿ: Independence Day 2024: ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯ: ಸಿದ್ದರಾಮಯ್ಯ ಗಂಭೀರ ಆರೋಪ