ಬೆಂಗಳೂರು: ”ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಂಬಂಧವನ್ನು ಸಂವಿಧಾನ ಸ್ಪಷ್ಟಪಡಿಸಿದೆ. ಜನಕಲ್ಯಾಣ ಕಾರ್ಯಗಳನ್ನು ಅನುಷ್ಠಾನಗೊಳಿಸುವುದು ರಾಜ್ಯಗಳ ಜವಾಬ್ದಾರಿಯಾಗಿದ್ದು, ಅವುಗಳಿಗೆ ಪೂರಕವಾಗಿ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಆಶಯದಿಂದ ದೂರ ಸರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ (Independence Day 2024).
ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ʼʼಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ, ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಕೇಂದ್ರ ಮೀನಾಮೇಷ ಎಣಿಸುತ್ತಿದೆ. ಕೇಂದ್ರದಿಂದ ನ್ಯಾಯಯುತವಾಗಿ ಬರಬೇಕಾದ ಪರಿಹಾರದ ಮೊತ್ತ ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಗಿರುವುದು ಜನಹಿತಕ್ಕೆ ಒಳ್ಳೆಯದಲ್ಲ. ಮುಂದಿನ ದಿನಗಳಲ್ಲಾದರೂ ಕೇಂದ್ರ ಸರ್ಕಾರವು, ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡು ರಾಜ್ಯಗಳ ಅಭಿವೃದ್ಧಿಗೆ ಅನುದಾನಗಳನ್ನು ಬಿಡುಗಡೆ ಮಾಡಬೇಕೆಂದು ಈ ಸಂದರ್ಭದಲ್ಲಿ ಸಮಸ್ತ ನಾಡ ಬಂಧುಗಳ ಪರವಾಗಿ ಒತ್ತಾಯಿಸುತ್ತೇನೆʼʼ ಎಂದು ಸಿಎಂ ಹೇಳಿದ್ದಾರೆ.
ʼʼಜನತೆಯ ತೀರ್ಪನ್ನು ಧಿಕ್ಕರಿಸಿ ನಡೆಸುವ ಹಿಂಬಾಗಿಲ ರಾಜಕಾರಣವನ್ನು ಇತಿಹಾಸದಲ್ಲಿ ಜನತೆ ಎಂದಿಗೂ ಕ್ಷಮಿಸಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಾಡಿನ ಮಹಾ ಜನತೆ ನೀಡಿದ ತೀರ್ಪನ್ನು ಗೌರವಿಸಿ, ಸಂವಿಧಾನದ ಆಶಯಗಳ ಪ್ರಕಾರ ವಿರೋಧಪಕ್ಷಗಳು ಜವಾಬ್ದಾರಿಯುತವಾಗಿ ನಡೆಯಬೇಕೆಂಬುದನ್ನು ಎಲ್ಲರೂ ನಿರೀಕ್ಷಿಸುತ್ತಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿರುವ ಮತದಾರರು, ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ” ಎಂದು ಬಿಜೆಪಿ ವಿರುದ್ಧ ಹಾರಿಹಾಯ್ದರು.
ದೇಶದ ಚಲನಶೀಲ, ಸ್ಪಂದನಾಶೀಲ ಪ್ರಜಾಪ್ರಭುತ್ವಕ್ಕೆ ನಮ್ಮ ಸಂವಿಧಾನವೇ ಶ್ರೀರಕ್ಷೆಯಾಗಿದೆ. ದೇಶದಲ್ಲಿ ನಮ್ಮ ಪ್ರಜಾಪ್ರಭುತ್ವವು ಕ್ರಿಯಾಶೀಲವಾಗಲು, ಜನ ಜೀವನದ ಸಹಜ ಮತ್ತು ಅವಿಭಾಜ್ಯ ಭಾಗವಾಗಿರಲು ಎದುರಾಗಬಹುದಾದ ಅಡ್ಡಿ-ಆತಂಕಗಳ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ಅವರು ಅಂದೇ ಮುನ್ನೆಚ್ಚರಿಕೆ ನೀಡಿದ್ದರು. ಮೊದಲನೆಯದಾಗಿ, ಜಾತಿ-ಮತದ ಆಧಾರದ ವಿಭಜನೆಯ ರಾಜಕಾರಣ ಮಾಡುವ ವಿಚ್ಛಿದ್ರಕಾರಿ ಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು. ಎರಡನೆಯದಾಗಿ ಸಾಂವಿಧಾನಿಕ ಸಂಸ್ಥೆಗಳು ಮತ್ತು ಆಶಯಗಳನ್ನು ಬುಡಮೇಲು ಮಾಡುವ ಮನಸ್ಥಿತಿಯ ವ್ಯಕ್ತಿಗಳನ್ನು ಅಧಿಕಾರದಿಂದ ಮುಲಾಜಿಲ್ಲದೆ ದೂರ ಇಡಬೇಕು. ಅಂತಿಮವಾಗಿ ಸಾಮಾಜಿಕ ಪ್ರಜಾಪ್ರಭುತ್ವ ಇಲ್ಲದ ರಾಜಕೀಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದ್ದರುʼʼ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ʼʼನಾಡಿನ ಸಮಸ್ತ ಜನರು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಮೂಲ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ಗೌರವವಾಗಿರುತ್ತದೆ. ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಭಗತ್ ಸಿಂಗ್ ಮತ್ತು ಹುತಾತ್ಮರಾದ ಅವರ ಕ್ರಾಂತಿಕಾರಿ ಸ್ನೇಹಿತರು, ನಮಗೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಡಾ: ಬಿ.ಆರ್.ಅಂಬೇಡ್ಕರ್, ವೈಜ್ಞಾನಿಕ ಹಾಗೂ ಜ್ಯಾತ್ಯಾತೀತ ತಳಹದಿಯಲ್ಲಿ ಆಧುನಿಕ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಜವಾಹರಲಾಲ್ ನೆಹರೂ ಮುಂತಾದ ಮಹನೀಯರನ್ನು ನಾವು ಸ್ಮರಿಸಬೇಕು ಹಾಗೂ ಅವರ ಆಶಯಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ನೆರೆಹೊರೆಯ ದೇಶಗಳಲ್ಲಿ ತಲೆದೋರಿರುವ ಪ್ರಕ್ಷುಬ್ಧ ಪರಿಸ್ಥಿತಿ ಇಲ್ಲಿಯೂ ಎದುರಾಗಿ ಬಿಡಬಹುದು ಎಂಬ ಎಚ್ಚರಿಕೆ ನಮ್ಮೆಲ್ಲರಲ್ಲಿ ಇರಬೇಕಾಗುತ್ತದೆʼʼ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ʼʼಎಲ್ಲ ಜಾತಿ ಹಾಗೂ ಮತಗಳ ಜನರು ಒಟ್ಟುಗೂಡಿ ಸ್ವಾತಂತ್ರ್ಯ ಗಳಿಸಿದ್ದೇವೆ. ಎಲ್ಲರೂ ಒಟ್ಟುಗೂಡಿ ಈ ಅಮೂಲ್ಯ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಾಗಿದೆ.
ಮತದ ಬಿರುಕುಗಳನು ತೊರೆವೆ
ನುಡಿಗಳೊಡಕುಗಳನು ಮರೆವೆ
ತೊತ್ತ ತೊಡಕುಗಳನು ಬಿರಿವೆ
ಸ್ವಾತಂತ್ರ್ಯದ ಸ್ವರ್ಗಕೇರೆ
ಪುಣ್ಯದೇಣಿ ಮೆಟ್ಟಿಲು
ರಾಷ್ಟ್ರಕವಿ ಕುವೆಂಪು ಅವರ ಕವನದ ಈ ಸಾಲುಗಳಂತೆ ಜಾತಿ, ಮತ, ಧರ್ಮ, ಭಾಷೆ ಆಧಾರದ ಭೇದ-ಭಾವಗಳನ್ನು ಮರೆತು ದೇಶದ ವೈವಿಧ್ಯತೆಯನ್ನು ಗೌರವಿಸುತ್ತ, ಅಖಂಡತೆಯನ್ನು ಪಾಲಿಸುತ್ತ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಬೇಕಾಗಿದೆ. ಎಲ್ಲರಿಗೂ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ದೊರಕಿಸುವ ಮೂಲಕ ರಾಜಕೀಯ ಸ್ವಾತಂತ್ರ್ಯ ಅಬಾಧಿತವಾಗುವಂತೆ ಶ್ರಮಿಸಬೇಕುʼʼ ಎಂದು ಅವರು ಕರೆ ನೀಡಿದ್ದಾರೆ.
ಇದನ್ನೂ ಓದಿ: ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ