ಬೆಂಗಳೂರು: ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು, ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮತ್ತೊಮ್ಮೆ ಭರವಸೆ ನೀಡಿದರು (Independence Day 2024).
ʼʼಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಸ್ತ ಜನರ ಬದುಕಿಗೆ ಒಂದು ಆರ್ಥಿಕ ಭದ್ರತೆಯನ್ನು ಒದಗಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಈ ಯೋಜನೆ ಮುಂದುವರಿಯಲಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಸವಳಿದು ಹೋಗಿರುವ ಜನರ ಬದುಕಿಗೆ ಈ ಯೋಜನೆಗಳು ನೆಮ್ಮದಿ ತಂದಿವೆ. ಈ ಯೋಜನೆಗಳ ಮೂಲಕ ಸಂಪತ್ತಿನ ಮರುಹಂಚಿಕೆಗೆ ಒತ್ತು ನೀಡುತ್ತಲೇ ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರವಾದ ರೀತಿಯಲ್ಲಿ ಹೆಚ್ಚಿಸಲು ಕೂಡಾ ಅಷ್ಟೇ ಬದ್ಧತೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಆರ್ಥಿಕ ಬೆಳವಣಿಗೆ ಮತ್ತು ಆರ್ಥಿಕ ಸಮಾನತೆಯನ್ನು ಸಾಧಿಸುವುದರ ಜತೆಗೆ ಈ ನೆಲದ ಸಾಮಾಜಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಪರಂಪರೆಯನ್ನು ಮುಂದುವರಿಸಿ ಕರ್ನಾಟಕವನ್ನು ನಿಜ ಅರ್ಥದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ’ವನ್ನಾಗಿ ರೂಪಿಸಲು ನಾವು ಕಾರ್ಯತತ್ಪರಾಗಿದ್ದೇವೆʼʼ ಎಂದು ಅವರು ತಿಳಿಸಿದರು.
78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ನೇರಪ್ರಸಾರ https://t.co/GnGN3T2t1Z
— Siddaramaiah (@siddaramaiah) August 15, 2024
ʼʼನಮ್ಮ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದಾಗಿ ಮಾಸಿಕ ಸರಾಸರಿ 4,000-5,000 ರೂ.ಗಳಷ್ಟು ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಇದು ಹಲವು ಕಾರಣಗಳಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ನೀಡುವ Universal Basic Income ಪರಿಕಲ್ಪನೆ. ಮುಂದುವರಿದ ರಾಷ್ಟ್ರಗಳಲ್ಲಿ ಆರ್ಥಿಕವಾಗಿ ಅಶಕ್ತ ವರ್ಗಗಳಿಗೆ ನೆರವಾಗಲು ಜಾರಿಗೊಳಿಸಲಾಗುತ್ತಿರುವ ಇಂತಹ ಯೋಜನೆಯೊಂದನ್ನು ಅತೀ ದೊಡ್ಡ ಮಟ್ಟದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ ಕರ್ನಾಟಕ. ಈ ಬಗ್ಗೆ ನಮಗೆ ಹೆಮ್ಮೆ ಇದೆʼʼ ಎಂದು ಸಿಎಂ ಹೇಳಿದರು.
ʼʼಈ ಯೋಜನೆಗಳು ಮುಂದುವರಿಯಲಿವೆ. ಮಾತ್ರವಲ್ಲ, ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಲಿದ್ದೇವೆ. ಈ ಯೋಜನೆಗಳ ವ್ಯಾಪ್ತಿಯೊಳಗೆ ಹೊಸ ಆವಿಷ್ಕಾರಗಳನ್ನು ನಡೆಸಿ ಅವುಗಳು ಫಲಾನುಭವಿಗಳಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯ ಕ್ರಮಗಳನ್ನು ಕೈಗೊಳ್ಳಲು ನಾವು ಉದ್ಯುಕ್ತರಾಗಿದ್ದೇವೆ. ಉದಾಹರಣೆಗೆ ʼಗೃಹಲಕ್ಷ್ಮೀʼ ಯೋಜನೆಯಡಿ ಫಲಾನುಭವಿ ಕುಟುಂಬಗಳ ಯಜಮಾನಿ ಮಹಿಳೆಯರಿಗೆ ಈಗ ಮಾಸಿಕ 2,000 ರೂ. ನೆರವು ನೀಡುತ್ತಿದ್ದೇವೆ. ಈ ಫಲಾನುಭವಿಗಳನ್ನು ಸ್ತ್ರೀ-ಶಕ್ತಿ ಮಹಿಳಾ ಸ್ವಸಹಾಯ ಸಂಘಗಳಾಗಿ ಸಂಘಟಿಸುವ ಮೂಲಕ ಅವರಿಗೆ ವಿವಿಧ ಹಣಕಾಸು ಸಂಸ್ಥೆಗಳಿಂದ ಆರ್ಥಿಕ ನೆರವು ಒದಗಿಸಿ ವರಮಾನ ತರುವ ವಿವಿಧ ಚಟುವಟಿಕೆಗಳಲ್ಲಿ ಅವರನ್ನು ತೊಡಗಿಸುವ ಯೋಚನೆ ಇದೆ. ಅದೇ ರೀತಿ ಯುವನಿಧಿಯ ಫಲಾನುಭವಿಗಳಿಗೆ ಕೌಶಾಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಕ್ರಮ ವಹಿಸಲಾಗುತ್ತಿದೆʼʼ ಎಂದು ಸಿದ್ದರಾಮಯ್ಯ ವಿವರಿಸಿದರು.
“ಶಕ್ತಿ ಯೋಜನೆʼಯಡಿ ಮಹಿಳೆಯರು 270 ಕೋಟಿ ಟ್ರಿಪ್ ಉಚಿತ ಪ್ರಯಾಣ ಸೌಲಭ್ಯ ಪಡೆಯುವ ಮೂಲಕ 6,541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚ ಉಳಿತಾಯ ಮಾಡಿದ್ದಾರೆ. ‘ಗೃಹಲಕ್ಷ್ಮೀ ಯೋಜನೆ’ಯಡಿ 1.20 ಕೋಟಿ ಮಹಿಳೆಯರಿಗೆ ಈ ವರೆಗೆ 25,259 ಕೋಟಿ ರೂ.ಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ‘ಅನ್ನಭಾಗ್ಯ ಯೋಜನೆ’ಯಡಿ ಹೆಚ್ಚುವರಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ ಕೇಂದ್ರದ ಅಸಹಕಾರದಿಂದಾಗಿ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗುತ್ತಿದೆ. ಈ ವರೆಗೆ 1.16 ಕೋಟಿ ಪಡಿತರ ಚೀಟಿಗಳ 4.08 ಕೋಟಿ ಫಲಾನುಭವಿಗಳಿಗೆ 7,763 ಕೋಟಿ ರೂ. ನೆರವನ್ನು ನೇರವಾಗಿ ವರ್ಗಾಯಿಸಲಾಗಿದೆ. ಉಚಿತವಾಗಿ 200 ಯೂನಿಟ್ ವರೆಗೆ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯ ಸೌಲಭ್ಯವನ್ನು 1.60 ಕೋಟಿ ಕುಟುಂಬಗಳು ಪಡೆದುಕೊಳ್ಳುತ್ತಿವೆ. ಈ ಯೋಜನೆಗಾಗಿ 8,844 ಕೋಟಿ ರೂ. ವೆಚ್ಚ ಮಾಡಲಾಗಿದೆ. ‘ಯುವನಿಧಿ ಯೋಜನೆ’ಯಡಿ 1.31 ಲಕ್ಷ ಪದವಿ/ಡಿಪ್ಲೊಮಾ ಪಡೆದ ನಿರುದ್ಯೋಗಿಗಳಿಗೆ ನೆರವು ನೀಡಲಾಗುತ್ತಿದ್ದು ಇದಕ್ಕಾಗಿ 91 ಕೋಟಿ ರೂ.ಗಳನ್ನು ಭರಿಸಲಾಗಿದೆʼʼ ಎಂದು ಸಿದ್ದರಾಮಯ್ಯ ತಿಳಿಸಿದರು.
ʼʼನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಎರಡು ಮುಂಗಾರು ಹಂಗಾಮುಗಳಲ್ಲಿ ರಾಜ್ಯ ಸಂಪೂರ್ಣ ವಿಭಿನ್ನ ಪರಿಸ್ಥಿತಿಯನ್ನು ಎದುರಿಸಿದೆ. ಕಳೆದ ವರ್ಷ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾದರೆ, ಈ ಬಾರಿ ಅತಿವೃಷ್ಟಿಗೆ ಒಳಗಾಗಿದೆ. ಕೇಂದ್ರ ಸರ್ಕಾರವು ಬರ ಪರಿಹಾರದ ಮೊತ್ತವನ್ನು ತಡವಾಗಿ ನೀಡಿದರೂ, ರಾಜ್ಯದಲ್ಲಿ ಬರದಿಂದಾಗಿ ಜನರಿಗೆ ಹೆಚ್ಚಿನ ಅನಾನುಕೂಲಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಲಾಯಿತು. ಎನ್‍ಡಿಆರ್‌ಎಫ್ ಅಡಿ ಪರಿಹಾರ ಬಿಡುಗಡೆಯಾಗುವ ಮೊದಲೇ ರಾಜ್ಯ ಸರ್ಕಾರ ಬರಗಾಲದಿಂದ ಬಾಧಿತರಾದ ಪ್ರತಿ ರೈತರಿಗೆ 2,000 ರೂ. ವರೆಗೆ ಒಟ್ಟು 636.45 ಕೋಟಿ ರೂ.ಗಳ ಮಧ್ಯಂತರ ಪರಿಹಾರವನ್ನು ವಿತರಿಸಿದೆ. ಒಟ್ಟಾರೆಯಾಗಿ ಬೆಳೆ ನಷ್ಟ ಅನುಭವಿಸಿದ 38,58,737 ರೈತರಿಗೆ 3454.66 ಕೋಟಿ ರೂ. ಬೆಳೆಹಾನಿ ಪರಿಹಾರವನ್ನು ಎನ್‍ಡಿಆರ್‌ಎಫ್ ಅಡಿ ವಿತರಿಸಲಾಗಿದೆ. ಇದರೊಂದಿಗೆ 17.88 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ಒಟ್ಟು 512.83 ಕೋಟಿ ರೂ. ಗಳಷ್ಟು ಜೀವನೋಪಾಯ ಪರಿಹಾರ ವಿತರಿಸಲಾಗಿದೆʼʼ ಎಂದು ಸಿದ್ದರಾಮಯ್ಯ ವಿವರಿಸಿದರು.
ʼʼಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾನು ಸ್ವತಃ ಭೇಟಿ ನೀಡಿದ್ದೇನೆ. ನಮ್ಮ ಸಚಿವರೂ ಜಿಲ್ಲೆಗಳಲ್ಲಿದ್ದು ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಜೀವಹಾನಿ, ಜಾನುವಾರುಗಳ ಸಾವು ಹಾಗೂ ಮನೆ ಹಾನಿಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ. ಮನೆ ಕಳೆದುಕೊಂಡವರಿಗೆ 1.2 ಲಕ್ಷ ರೂ. ಪರಿಹಾರದೊಂದಿಗೆ ಮನೆ ಹಂಚಿಕೆ ಮಾಡಲು ಕ್ರಮ ವಹಿಸುತ್ತಿದ್ದೇವೆʼʼ ಎಂದು ಸಿಎಂ ತಿಳಿಸಿದರು.
ಇದನ್ನೂ ಓದಿ: Independence day 2024: ವಿಕಸಿತ ಭಾರತ @2047 ಎಂಬುದು ಕೇವಲ ಪದಗಳಲ್ಲ..140 ಕೋಟಿ ಜನರ ಸಂಕಲ್ಪ-ಪ್ರಧಾನಿ ಮೋದಿ