ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆ ಕಾರ್ಯಕ್ರಮದಲ್ಲಿ ಫೈಟರ್ ರವಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎನ್ನುವ ಬಿಜೆಪಿ, ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ, ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ, ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಟೀಕಿಸಿದೆ.
ಇದನ್ನೂ ಓದಿ | Modi in Karnataka: ಹೆದ್ದಾರಿ ಉದ್ಘಾಟನೆಗೆ ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘನೆ: ಡಿ.ಕೆ.ಸುರೇಶ್ ಕಿಡಿ
ಇತ್ತೀಚೆಗೆ ರೌಡಿಶೀಟರ್ ಸೈಲೆಂಟ್ ಸುನೀಲ ಹಾಗೂ ಫೈಟರ್ ರವಿ ಬಿಜೆಪಿ ಸೇರ್ಪಡೆಯಾಗಿದ್ದರು. ಬಳಿಕ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಫೈಟರ್ ರವಿ, ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡಿದ್ದರು. ಇದೀಗ ಪ್ರಧಾನಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದೆ.