Site icon Vistara News

ಹಿಂದಿ ದಿವಸ ವಿರೋಧಿಸಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ JDS ಪ್ರತಿಭಟನೆ

Hindi diwas protest jds

ಬೆಂಗಳೂರು: ಕೇಂದ್ರ ಸರ್ಕಾರದ ವತಿಯಿಂದ ರಾಜ್ಯದಲ್ಲಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಸರ್ಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿ ದಿವಸ ಆಚರಣೆ ಖಂಡಿಸಿ ವಿಧಾನಸೌಧ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಕನ್ನಡ ಶಾಲು ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಕೇಂದ್ರ ಸರ್ಕಾರಕ್ಕೆ ಭಾಷಾ ಸಹಿಷ್ಣುತೆ ಇಲ್ಲ. ರಾಜ್ಯಗಳ ಮೇಲೆ, ಅದರಲ್ಲೂ ಕರ್ನಾಟಕದ ಮೇಲೆ ಪದೇಪದೆ ಹಿಂದಿ ಹೇರಿಕೆ ಮಾಡುತ್ತಲೇ ಇದೆ. ಪ್ರಾದೇಶಿಕ ಭಾಷೆಗಳನ್ನು, ಮುಖ್ಯವಾಗಿ ಕನ್ನಡವನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ.

ಕೇಂದ್ರ ಸರ್ಕಾರದಿಂದ ಇವತ್ತು ಹಿಂದಿ ಆಚರಣೆ ಮಾಡುತ್ತಿರುವುದಕ್ಕೆ ನಮ್ಮ ಪಕ್ಷದ ವಿರೋಧ ಇದೆ. ಕೇಂದ್ರ ಬಿಜೆಪಿ ಸರ್ಕಾರ ಕೇವಲ ಒಂದು ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಿದೆ. ಒಂದು ಭಾಷೆ ಒಂದು ರಾಷ್ಟ್ರ ಎಂಬ ಗೃಹ ಸಚಿವರ ಹೇಳಿಕೆ ಸರಿಯಲ್ಲ. ಕೇವಲ ಹಿಂದಿ ಭಾಷೆಯಿಂದ ಭಾರತ ಒಂದಾಗಿ ಉಳಿದಿಲ್ಲ. ವಿವಿಧತೆಯಲ್ಲಿ ಏಕತೆ ಭಾರತದ ಶಕ್ತಿ. ಅದನ್ನೇ ಹಾಳು ಮಾಡಿದರೆ ದೇಶವನ್ನು ಒಡೆದಂತೆ. ಅವರು ಕೇವಲ ಭಾವನಾತ್ಮಕ ವಿಚಾರ ಕೆಣಕುತ್ತಾ ದೇಶವನ್ನು ವಿಭಜಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇವತ್ತು ಉತ್ತರ ಭಾರತದ ಕೆಲವು ಭಾಗದಲ್ಲಿ ಹಿಂದಿ ಇಲ್ಲ. ಅನೇಕ ರಾಜ್ಯಗಳಲ್ಲಿ ಅವರವರದೇ ಭಾಷೆ ಇದೆ. ತಮ್ಮ ಭಾಷೆಯನ್ನೇ ಮಾತನಾಡುತ್ತಾ ನೆಮ್ಮದಿಯಿಂದ ಇದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಪ್ರಾದೇಶಿಕ ಭಾಷೆಗಳ ಕತ್ತನ್ನು ಹಿಸುಕುವ ಕೇಂದ್ರದ ನಡೆಗೆ ನಮ್ಮ ವಿರೋಧ ಇದೆ. ಕನ್ನಡದ ಬಗ್ಗೆ ಯಾಕಿಷ್ಟು ಅಸಹನೆ ಇವರಿಗೆ ಎಂದು ನನಗೆ ಅರ್ಥವಾಗುತ್ತಿಲ್ಲ.

ಹಿಂದಿ ದಿವಸದ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡುವುದು ಎಷ್ಟು ಸರಿ? ಜನ ಈಗಾಗಲೇ ನೆರೆ ಹಾವಳಿಯಿಂದ ತತ್ತರಿಸಿದ್ದಾರೆ. ಅವರ ನೆರವಿಗೆ ಬಾರದೆ ಹಿಂದಿ ಭಾಷೆಯ ವಿಚಾರ ಸರ್ಕಾರಕ್ಕೆ ಮುಖ್ಯವಾಗಿದೆ. ಇದಕ್ಕೆ ಕನ್ನಡಿಗರ ಧಿಕ್ಕಾರವಿದೆ ಎಂದು ಕಿಡಿ ಕಾರಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಜೆಡಿಎಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

ಇದನ್ನೂ ಓದಿ | ‌Hindi Diwas | ಹಿಂದಿ ರಾಷ್ಟ್ರೀಯ ಭಾಷೆ, ಅದಕ್ಕೆ ಗೌರವ ಕೊಡಲು ತಕರಾರಿಲ್ಲ; ಆದರೆ, ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

Exit mobile version