ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್ ನೀಡಿದ ಪಂಚ ಗ್ಯಾರಂಟಿಗಳಲ್ಲಿ (Congress Guarantee) ಮೂರನ್ನು ಈಗಾಗಲೇ ಜಾರಿ ಮಾಡಲಾಗಿದೆ. ಶಕ್ತಿ ಯೋಜನೆ (Shakthi scheme), ಅನ್ನ ಭಾಗ್ಯ (Anna Bhagya Scheme) ಮತ್ತು ಗೃಹಜ್ಯೋತಿ ಯೋಜನೆ(Gruha jyothi scheme)ಗಳು ಚಾಲನೆಗೆ ಬಂದಿವೆ. ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 24ರಂದು (Gruha lakshmi from August 24) ಉದ್ಘಾಟಿಸಲಾಗುತ್ತದೆ. ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಯುವನಿಧಿಗೆ (Yuvanidhi from December) ಈ ವರ್ಷದ ಡಿಸೆಂಬರ್‌ನಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramiah) ಪ್ರಕಟಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಶನಿವಾರ ಕಲಬುರಗಿಯಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಇಷ್ಟೆಲ್ಲ ಗ್ಯಾರಂಟಿ ಯೋಜನೆಗಳ ನಡುವೆಯೂ ಸರ್ಕಾರ ರಾಜ್ಯದ ಅಭಿವೃದ್ಧಿ ಯೋಜನೆಗಳನ್ನು ಮರೆಯುವುದಿಲ್ಲ ಎಂದು ಪ್ರಕಟಿಸಿದರು. ಅದರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಜವಾಬ್ದಾರಿ ನಮ್ಮದು
2013-18 ರಲ್ಲಿ ಅಧಿಕಾರದಲ್ಲಿದ್ದಗ ಕಾಂಗ್ರೆಸ್ ಸರ್ಕಾರ ಕೊಟ್ಟಂತಹ 165 ಭರವಸೆಗಳನ್ನು 158 ಈಡೇರಿಸಿ, 30 ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿತ್ತು. ಆದ್ದರಿಂದ ಈ ಬಾರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ನೀಡಿದರು. ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ 76 ಭರವಸೆಗಳನ್ನು ಜಾರಿಗೆ ತರಲಾಗುವುದು. ಮುಂದಿನ ಐದು ವರ್ಷಗಳಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂಬ ಸ್ಪಷ್ಟವಾದ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು.
ಶಕ್ತಿ ಯೋಜನೆಯಿಂದ ಮಹಿಳೆಯರು ಸಂತುಷ್ಟ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿಗಳನ್ನು ಜಾರಿಗೊಳಿಲು ಸಚಿವ ಸಂಪುಟ ತೀರ್ಮಾನ ಕೈಗೊಳ್ಳಲಾಯಿತು. ಅದಂತೆ ಜೂನ್ 11 ರಂದು ‘ಶಕ್ತಿ’ ಯೋಜನೆ ಜಾರಿಗೊಳಿಸಲಾಯಿತು. ಇದುವರೆಗೂ 30 ಕೋಟಿಗೂ ಹೆಚ್ಚು ಜನ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದು , ಪ್ರತಿದಿನ ಸುಮಾರು 50 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯಿಂದ ರಾಜ್ಯದ ಮಹಿಳೆಯರು ಸಂತುಷ್ಟರಾಗಿದ್ದಾರೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಕರ್ನಾಟಕ ಮಾದರಿ
ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವತ್ರಿಕ ಮೂಲ ಆದಾಯ ಎಂಬ ಪರಿಕಲ್ಪನೆಯಡಿ ರೂಪಿಸಲಾಗಿದ್ದು, ಕರ್ನಾಟಕದಲ್ಲಿ ಕರ್ನಾಟಕ ಮಾದರಿ- ಪ್ರಾರಂಭ ಮಾಡುತ್ತೇವೆ. ಬಡತನ ಹಿಂಸೆಯ ಅತಿ ಕೆಟ್ಟ ರೂಪ ಎಂದು ಮಹಾತ್ಮಾ ಗಾಂಧಿ ಹೇಳಿದ್ದರು ದೇಶದಲ್ಲಿ ಬಡವ ಶ್ರೀಮಂತರೆಂಬ ಅಸಮಾನತೆ ಇದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು, ನಾವು ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 4 ಕೆಜಿಗೆ ಇಳಿಸಿದರು.ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಹಕರಿಸದ ಕಾರಣ, 5 ಕೆಜಿ ಅಕ್ಕಿಯ ಬದಲು 170 ರೂ. ಗಳನ್ನು ಎಲ್ಲ ಫಲಾನುಭವಿಗಳಿಗೆ ನೀಡಲಾಗುತ್ತಿದೆ ಎಂದರು.
ಗೃಹಲಕ್ಷ್ಮಿ ಯೋಜನೆ ಆಗಸ್ಟ್ 24ರಂದು ಚಾಲನೆ
ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 24ರಂದು ಚಾಲನೆ ನೀಡಲಿದ್ದೇವೆ. ರಾಜ್ಯದ 1.28 ಕೋಟಿ ಕುಟುಂಬಗಳಿಗೆ 2000 ರೂ. ಗಳನ್ನು ಈ ಯೋಜನೆಯಡಿ ನೀಡಲಾಗುವುದು. ನಾವು ಜನರ ಕೈಗೆ ದುಡ್ಡು ನೀಡುತ್ತದ್ದೇವೆ. ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ತನ್ಮೂಲಕ ರಾಜ್ಯದ ಜಿಡಿಪಿ , ಆರ್ಥಿಕ ಚಟುವಟಿಕೆ ಜಾಸ್ತಿಯಾಗುತ್ತದೆ. ಐದು ಗ್ಯಾರಂಟಿಗಳಿಂದ ಒಬ್ಬರಿಗೆ 4 ರಿಂದ 5 ಸಾವಿರ ರೂ. ದೊರೆಯಲಿದ್ದು, ಈ ರೀತಿ ವಾರ್ಷಿಕವಾಗಿ 48 ರಿಂದ 60 ಸಾವಿರ ರೂ. ಜನರಿಗೆ ಲಭಿಸಲಿದೆ ಎಂದು ತಿಳಿಸಿದರು.
ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಹೊಂದಿರುವವರಿಗೆ ಯುವನಿಧಿ ಯೋಜನೆಯನ್ನು ಡಿಸೆಂಬರ್ ಬಳಿಕ ಜಾರಿಗೊಳಿಸಲಾಗುವುದು. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಗ್ಯಾರಂಟಿ ಜಾರಿಯ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನೂ ಮಾಡುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ : Gruha Jyothi : ತಾಕತ್ತಿದ್ದರೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ದೇಶಾದ್ಯಂತ ಜಾರಿ ಮಾಡಿ; ಮೋದಿಗೆ ಸಿದ್ದರಾಮಯ್ಯ ಸವಾಲು