ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ಬೀದರ್, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ (ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ) ಸಂಭ್ರಮ ಮನೆಮಾಡಿದೆ. ಅದರಲ್ಲೂ, ಕಲ್ಯಾಣ ಕರ್ನಾಟಕ (Kalyana Karnataka) ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಗೆ ಆಗಮಿಸಲು ಕ್ಷಣಗಣನೆ ಆರಂಭವಾಗಿದ್ದು, ಸಾಂಪ್ರದಾಯಿಕ ಸ್ವಾಗತ ದೊರೆಯಲಿದೆ.
ಬೆಳಗ್ಗೆ 8.45ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಲಿದ್ದಾರೆ. ನಂತರ 9 ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಅವರು ಶಾಂತಾ ಆಸ್ಪತ್ರೆಯ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಕಲಬುರಗಿ ಭೇಟಿ ವೇಳೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಸಾಂಪ್ರದಾಯಿಕ ಸ್ವಾಗತ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಕಲಬುರಗಿಯಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಲ್ಲೂ, ಡೊಳ್ಳು ಕುಣಿತ, ವೀರಗಾಸೆ, ಲಂಬಾಣಿ ಸಮುದಾಯದ ನೃತ್ಯದೊಂದಿಗೆ ಮುಖ್ಯಮಂತ್ರಿ ಅವರಿಗೆ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗುತ್ತದೆ. ಇದಕ್ಕಾಗಿ ಸರ್ದಾರ್ ವಲ್ಲಭಭಾಯಿ ಸರ್ಕಲ್‌ನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: Ballari News: ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಗೆ ಬಿಐಟಿಎಂ ವಿಶೇಷ ಕೊಡುಗೆ: ಡಾ. ಎಸ್.ಜೆ.ವಿ. ಮಹಿಪಾಲ್
ಈಗ ಏಕೆ ಸ್ವಾತಂತ್ರ್ಯದ ಅಮೃತ ಮಹೋತ್ಸವ?
ದೇಶದಲ್ಲಿ ಕಳೆದ ವರ್ಷವೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿದರೂ ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈಗ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ದೇಶಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಸಿಕ್ಕರೂ, ಹೈದರಾಬಾದ್ ನಿಜಾಮನ ಆಡಳಿತದಲ್ಲಿದ್ದ ಕಲಬುರಗಿ, ಯಾದಗಿರಿ, ಬೀದರ್, ಬಳ್ಳಾರಿ ಹಾಗೂ ರಾಯಚೂರಿಗೆ 1948ರ ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ಸಿಕ್ಕಿದೆ. ಹಾಗಾಗಿ, ಈ ಐದು ಜಿಲ್ಲೆಗಳಲ್ಲಿ ಈಗ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ.