ಬೆಂಗಳೂರು: ಕರ್ನಾಟಕದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ವೇದಿಕೆ ಮೇಲೆ ಅಳವಡಿಸಲಾಗುವ ಪರದೆ, ಫಲಕಗಳಲ್ಲಿ ಹಾಗೂ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶ ಎರಡೇ ದಿನಕ್ಕೆ ಗಾಳಿಗೆ ತೂರಲ್ಪಟ್ಟಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬೆಂಗಳೂರಿನಲ್ಲಿ ಗುರುವಾರ ಭಾಗವಹಿಸಿರುವ, ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದ ʼಮಂಥನʼ ಕಾರ್ಯಕ್ರಮದಲ್ಲಿ ಕನ್ನಡ ಮಾಯವಾಗಿದೆ. ಒಂದು ವಾರದ ಹಿಂದಷ್ಟೆ ಮಂಗಳೂರಿನಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಇದ್ದ ಕನ್ನಡ ಬಳಕೆಯನ್ನು ನಿತಿನ್ ಗಡ್ಕರಿ ಅವರ ಕಾರ್ಯಕ್ರಮದಲ್ಲಿ ಸಂಪೂರ್ಣ ಮರೆಯಲಾಗಿದೆ.
ಇದನ್ನೂ ಓದಿ | ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ
ಸೆಪ್ಟೆಂಬರ್ 2ರಂದು ಮಂಗಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಮಂಗಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಕೇಂದ್ರ ಬಂದರು ಮತ್ತು ಜಲಮಾರ್ಗ ಸಚಿವಾಲಯದಿಂದ ಆಯೋಜಿಸಿದ್ದ ಸುಮಾರು 3,800 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮವನ್ನುದ್ದೇಶಿಸಿ ಮೋದಿ ಮಾತನಾಡಿದರು.
ಈ ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡ, ಹಿಂದಿ, ಇಂಗ್ಲಿಷ್ ಭಾಷೆಗಳನ್ನು ಬಳಸಲಾಗಿತ್ತು. ಎಲ್‌ಇಡಿ ಪರದೆಯ ಮೇಲೆ ಭಾಷೆಗಳು ಬದಲಾವಣೆ ಆಗುತ್ತಲಿದ್ದವು. ಮೋದಿ ಅವರು ಶಂಕುಸ್ಥಾಪನೆ ಮಾಡಿದ ಯೋಜನೆಗಳ ವಿವರಗಳನ್ನೂ ಮೂರೂ ಭಾಷೆಯಲ್ಲಿ ಮುದ್ರಿಸಲಾಗಿತ್ತು. ಇದೆಲ್ಲಕ್ಕಿಂತಲೂ ಹೆಚ್ಚಾಗಿ ಕಾರ್ಯಕ್ರಮದ ಆರಂಭದಲ್ಲಿ ಸಂಪೂರ್ಣ ನಾಡಗೀತೆಯನ್ನು ಹಾಡಲಾಗಿತ್ತು, ಸಭೆಯಲ್ಲಿದ್ದವರೆಲ್ಲರೂ ಎದ್ದು ನಿಂತು ಗೌರವ ಸೂಚಿಸಿದ್ದರು.
ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯದಿಂದ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಮಂಥನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರ ಜತೆಗೆ ವಿ.ಕೆ. ಸಿಂಗ್, ಸಂಸದರಾದ ಪಿ.ಸಿ. ಮೋಹನ್, ತೇಜಸ್ವೀ ಸೂರ್ಯ, ರಾಜ್ಯ ಸರ್ಕಾರದ ಸಚಿವರುಗಳಾದ ಶ್ರೀರಾಮುಲು, ಸಿ.ಸಿ. ಪಾಟೀಲ್ ಸೇರಿ ಅನೇಕರು ಭಾಗವಹಿಸಿದ್ದರು. ವೇದಿಕೆಯಲ್ಲಿ ಎಲ್ಲಿಯೂ ಕನ್ನಡ ಇರಲೇ ಇಲ್ಲ. ಮೋದಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಒಬ್ಬ ಹಿಂದಿ ನಿರೂಪಕರ ಜತೆಗೆ ಕನ್ನಡ ನಿರೂಪಕರೂ ಇದ್ದರು. ಆದರೆ ಇದೀಗ ಬೆಂಗಳೂರಿನ ಕಾರ್ಯಕ್ರಮದಲ್ಲಿ ಕನ್ನಡ ನಿರೂಪಣೆಯೂ ಇರಲಿಲ್ಲ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಬರೆದ ಪತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯನ್ನು ಬಳಸದಿರುವ ಬಗ್ಗೆ ಪ್ರಸ್ತಾಪಿಸಿದ್ದರು. ಈ ಬಗ್ಗೆ ವೇದಿಕೆ ಮೇಲೆ ಅಳವಡಿಸಲಾಗುವ ಪರದೆ, ಫಲಕಗಳಲ್ಲಿ ಹಾಗೂ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಕೋರಿದ್ದರು. ಹೀಗಾಗಿ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶ ಸೆಪ್ಟೆಂಬರ್ 6ರಂದು ಸೂಚಿಸಿದ್ದರು.
ಕನ್ನಡ ರಾಜ್ಯದ ಆಡಳಿತ ಭಾಷೆಯಾಗಿ ಇರಬೇಕು ಎಂಬುವುದನ್ನು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ-1953ರಲ್ಲಿ ಉಲ್ಲೇಖ ಮಾಡಲಾಗಿದೆ. ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯ ಜತೆಗೆ ಸಾರ್ವಭೌಮ ಭಾಷೆಯಾಗಿದೆ. ಕನ್ನಡವನ್ನು ರಾಜ್ಯದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ರಚನೆಯಾಗಿರುತ್ತದೆ. ಹೀಗಾಗಿ ಕನ್ನಡ ಕಡ್ಡಾಯಗೊಳಿಸುವ ಬಗ್ಗೆ ಪ್ರಾಧಿಕಾರ ಶಿಫಾರಸು ಮಾಡಿದೆ ಎಂದು ಆದೇಶದಲ್ಲಿ ತಿಳಿಸಿದ್ದರು.
ಆದರೆ ಮುಖ್ಯ ಕಾರ್ಯದರ್ಶಿ ಆದೇಶವಾದ ಎರಡೇ ದಿನಕ್ಕೆ ರಾಜಧಾನಿ ಬೆಂಗಳೂರಿನ ಕಾರ್ಯಕ್ರಮದಲ್ಲೇ ಕನ್ನಡವನ್ನು ಕಡೆಗಣಿಸಲಾಗಿದೆ.
ಇದನ್ನೂ ಓದಿ | Modi in Mangalore | ವೀರತ್ವ + ವ್ಯಾಪಾರ = ಕರಾವಳಿ: ಪ್ರಧಾನಿ ಮೋದಿ ಬಣ್ಣನೆ